ಆತ್ಮವಿಶ್ವಾಸ ಹಾಗೂ ಸಾಧಿಸುವ ಛಲವಿದ್ದರೆ ಎಷ್ಟೇ ಕಷ್ಟಗಳಿದ್ದರೂ ಸಹ ಯಶಸ್ಸು ಸಾಧ್ಯ: ಜಿಲ್ಲಾಧಿಕಾರಿ ಕೆ.ಎನ್. ರಮೇಶ್

0
347

ಚಿಕ್ಕಮಗಳೂರು : ಸಮಾಜಕ್ಕೆ ಉತ್ತಮವಾದ ಕೊಡುಗೆಯನ್ನು ನೀಡುವ ಆತ್ಮವಿಶ್ವಾಸ ಹಾಗೂ ಸಾಧಿಸುವ ಛಲವಿದ್ದರೆ ಎಷ್ಟೇ ಕಷ್ಟಗಳಿದ್ದರೂ ಸಹ ಯಶಸ್ಸು ಸಾಧ್ಯ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಹೇಳಿದರು.

ಅವರು ಸೋಮವಾರ ಚಿಕ್ಕಮಗಳೂರು ನಗರದ ಕುವೆಂಪು ಕಲಾ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಮತ್ತು ನಗರಸಭೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಚಿಕ್ಕಮಗಳೂರು ಇವರ ಸಂಯುಕ್ತಾಶ್ರಯದಲ್ಲಿ ನಡೆದ ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಮ್ ರವರ 114ನೇ ಜನ್ಮ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಬಾಬು ಜಗಜೀವನ ರಾಮ್ ಅವರು ಬಡತನದಲ್ಲಿ ಜನಿಸಿ ಜೀವನದಲ್ಲಿ ಎದುರಾದಂತಹ ಅನ್ಯಾಯ, ಅಸ್ಪೃಶ್ಯತೆಯ ವಿರುದ್ಧ ಧ್ವನಿ ಎತ್ತಿದಂತಹ ಮಹಾನ್ ವ್ಯಕ್ತಿಗಳಾಗಿದ್ದಾರೆ ಎಂದ ಅವರು ಕೇಂದ್ರ ಸರ್ಕಾರದ ಅತ್ಯುನ್ನತ ಹುದ್ದೆಗಳನ್ನು ಅಲಂಕರಿಸಿ ಸಮಾಜದ ಶೋಷಿತರ ಹಕ್ಕುಗಳಿಗಾಗಿ ಹೋರಾಟ ಮಾಡಿದ ಮಹಾನ್ ನಾಯಕರಾದ ಅವರು ಶೋಷಿತರ ಆಶಾಕಿರಣರಾಗಿದ್ದಾರೆ ಎಂದು ತಿಳಿಸಿದರು.

ನಾಲ್ಕು ದಶಕಗಳ ಕಾಲ ಸಂಸತ್ ಸದಸ್ಯರಾಗಿ ಅಪರಿಮಿತ ಸೇವೆ ಸಲ್ಲಿಸಿದ್ದಾರೆ. ರಾಷ್ಟ್ರದ ಕೃಷಿ ಸಚಿವರಾಗಿ ಹಸಿರು ಕ್ರಾಂತಿಗೆ ಅವರು ನೀಡಿದ ಕೊಡುಗೆ ಅಪಾರವಾಗಿದೆ. ಸ್ವಾತಂತ್ರೋತ್ತರ ಭಾರತದಲ್ಲಿ ಆಹಾರ ಕೊರತೆ ಎದುರಾದಾಗ ಸುಧಾರಿತ ತಳಿಗಳನ್ನು ಅಳವಡಿಸಿಕೊಂಡು ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಿದ ಹಸಿರು ಕ್ರಾಂತಿಯ ಹರಿಕಾರ ಎಂದೇ ಖ್ಯಾತಿಯಾಗಿದ್ದಾರೆ. ರಕ್ಷಣಾ ಸಚಿವರಾಗಿ ಗುರುತರವಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಜಾತ ಕೃಷ್ಣಪ್ಪ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದರು. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಬಿ.ಜೆ.ಸೋಮಶೇಖರಪ್ಪ ಮಾತನಾಡಿ, ಮಹಾನ್ ವ್ಯಕ್ತಿಗಳ ನಡೆ-ನುಡಿ ಜೀವನ ಶೈಲಿಯನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರನ್ನು ಮಾದರಿಯಾಗಿಟ್ಟುಕೊಂಡು ಸಮಾಜದಲ್ಲಿ ಉತ್ತಮ ಕಾರ್ಯನಿರ್ವಹಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಶಿವಮೊಗ್ಗ ಡಯಟ್‌ನ ಹಿರಿಯ ಉಪನ್ಯಾಸಕ ಬಿ.ವಿ.ಹರಿಪ್ರಸಾದ್ ಬಾಬು ಜಗಜೀವನ ರಾಮ್ ಅವರ ಕುರಿತು ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂತರ್ಜಾತಿ ವಿವಾಹವಾದ ದಂಪತಿಗಳಿಗೆ ಗೌರವಧನವನ್ನು ನೀಡಲಾಯಿತು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಬಿ.ವಿ.ಚೈತ್ರ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಪೂವಿತ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ದ್ರಾಕ್ಷಾಯಿಣಿ ಪೂರ್ಣೇಶ್, ಜಿಲ್ಲಾ ಪಂಚಾಯಿತಿ ಸದಸ್ಯೆ ಜಸಿಂತಾ ಅನಿಲ್‌ಕುಮಾರ್, ನಗರಸಭೆ ಪೌರಾಯುಕ್ತ ಬಸವರಾಜ್, ತಹಶೀಲ್ದಾರ್ ಡಾ.ಕೆ.ಜೆ.ಕಾಂತರಾಜ್, ಡಿವೈಎಸ್ಪಿ ಪ್ರಭು, ದಲಿತ ಮುಖಂಡ ಕೆ.ಟಿ.ರಾಧಕೃಷ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here