ಇದೇ ತಿಂಗಳು 18 ರಂದು ಜಿಲ್ಲೆಗೆ ಮುಖ್ಯಮಂತ್ರಿ ಭೇಟಿ ನೀಡಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ: ಜಿಲ್ಲಾಧಿಕಾರಿ ಕೆ.ಎನ್ ರಮೇಶ್

0
308

ಚಿಕ್ಕಮಗಳೂರು: ಇದೇ ತಿಂಗಳು 18 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಚಿಕ್ಕಮಗಳೂರಿಗೆ ಆಗಮಿಸಲಿದ್ದು, ಜಿಲ್ಲೆಯ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಈ ಸಂಬಂಧ ಅಧಿಕಾರಿಗಳ ಪೂರ್ವಭಾವಿ ಸಭೆ ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ವಿವಿಧ ಇಲಾಖೆಗಳ ಅಭಿವೃದ್ಧಿ ಯೋಜನೆಗಳನ್ನು ವರ್ಚುವಲ್ ಆಗಿ ಮುಖ್ಯಮಂತ್ರಿ ಉದ್ಘಾಟಿಸಲಿದ್ದು, ಈ ಸಂಬಂಧ ಎಲ್ಲಾ ಇಲಾಖೆಗಳು ತಮ್ಮ ಯೋಜನೆಗಳ ವರದಿ, ಹಿನ್ನೆಲೆ, ಅನುದಾನ, ವೆಚ್ಚ, ಫಲಾನುಭವಿಗಳು, ಸಮಸ್ಯೆಗಳು ಮುಂತಾದ ಸಂಪೂರ್ಣ ಮಾಹಿತಿ ಹಾಗೂ ಅವುಗಳಿಗೆ ಸಂಬಂಧಿಸಿದ ಛಾಯಾಚಿತ್ರಗಳೊಂದಿಗೆ ತಯಾರಿರಬೇಕು ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಸೂಚಿಸಿದರು.

ಮುಖ್ಯಮಂತ್ರಿಗಳು ಬೆಳಿಗ್ಗೆ 11 ಗಂಟೆಗೆ ಚಿಕ್ಕಮಗಳೂರಿಗೆ ಆಗಮಿಸಲಿದ್ದು, ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಬಸವ ತತ್ವ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಲೋಕೋಪಯೋಗಿ ಇಲಾಖೆಯಿಂದ 9.8 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅರಣ್ಯ ಭವನದ ಶಂಕು ಸ್ಥಾಪನೆ, 30 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಜಿಲ್ಲಾ ಕಛೇರಿ ಸಂಕೀರ್ಣದ ಶಂಕು ಸ್ಥಾಪನೆ, ನೂತನ ಪ್ರವಾಸಿ ಮಂದಿರ ಕಟ್ಟಡದ ಉದ್ಘಾಟನೆ ಕಾರ್ಯಕ್ರಮಗಳನ್ನು ಅವರು ನೆರವೇರಿಸಲಿದ್ದಾರೆ ಎಂದರು.

ಸಖರಾಯಪಟ್ಟಣದಲ್ಲಿ ನಿರ್ಮಿಸಲಾಗಿರುವ ಐಟಿಐ ಕಾಲೇಜನ್ನು ಉದ್ಘಾಟಿಸಲಿರುವ ಮುಖ್ಯಮಂತ್ರಿಗಳು, ಕಲ್ಯಾಣನಗರ ಬಳಿ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಮಹಿಳಾ ಕ್ರೀಡಾ ವಿದ್ಯಾರ್ಥಿನಿಲಯ, 3.85 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಫೂಟ್‌ಬಾಲ್ ಅಂಕಣ, ಶೃಂಗೇರಿಯಲ್ಲಿ 24.24.22 ಕೋಟಿ ರೂ. ಹಾಗೂ ಕಳಸದಲ್ಲಿ 22.67 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳನ್ನು ಉದ್ಘಾಟಿಸಲಿದ್ದಾರೆ ಎಂದು ಅವರು ತಿಳಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ರೂ. 4.5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಪೋಸ್ಟ್ ಮೆಟ್ರಿಕ್ ಬಾಲಕರ ವಸತಿನಿಲಯದ ಉದ್ಘಾಟನೆ , ಲೋಕೋಪಯೋಗಿ ಇಲಾಖೆಯಿಂದ ಪ್ರತಿ ಗ್ರಾಮದಲ್ಲಿ ಒಟು 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸಮುದಾಯ ಭವನಗಳಿಗೆ ವರ್ಚುವಲ್ ಆಗಿ ಚಾಲನೆ ನೀಡಲಿರುವ ಅವರು ಸರ್ಕಾರದಿಂದ ಮಂಜೂರಾಗಿರುವ ಒಟ್ಟು 14.5‌ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ 4 ಸೇತುವೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ.

ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 85 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ 16 ರಸ್ತೆಗಳಿಗೆ ಅವರು ಶಂಕು ಸ್ಥಾಪನೆ ಮಾಡಲಿದ್ದಾರೆ. ನರೇಗಾ ಯೋಜನೆಯಡಿ ಸುಮಾರು 170 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಶಾಲೆ, ಅಂಗನವಾಡಿ ಕೇಂದ್ರಗಳು, ವಿದ್ಯಾರ್ಥಿ ನಿಲಯಗಳಿಗೆ ಅವರು ಸಾಂಕೇತಿಕವಾಗಿ ಚಾಲನೆ ನೀಡಲಿದ್ದಾರೆ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಹೆಚ್, ಭದ್ರಾ ಹುಲಿ ಸಂರಕ್ಷಿತಾ ಅರಣ್ಯದ ಅರಣ್ಯಾಧಿಕಾರಿ ಪ್ರಭಾಕರನ್ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here