ಕೋವಿಡ್-19 2ನೇ ಅಲೆ ಬಾರದಂತೆ ನಿಯಂತ್ರಿಸಿ: ಉಸ್ತುವಾರಿ ಕಾರ್ಯದರ್ಶಿ ಸಿ.ಶಿಖಾ

0
280

ಚಿಕ್ಕಮಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳ ವರದಿಯಲ್ಲಿ ಏರಿಕೆಯಾಗುತ್ತಿದ್ದು, ಎರಡನೇ ಅಲೆಯ ಅಪಾಯವನ್ನು ಸೂಚಿಸುತ್ತಿದೆ ಜಿಲ್ಲೆಯಲ್ಲಿ ಎರಡನೇ ಅಲೆ ಬಾರದಂತೆ ನಿಯಂತ್ರಿಸಲು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕಿ ಸಿ. ಶಿಖಾ ಅಧಿಕಾರಿಗಳಿಗೆ ಸೂಚಿಸಿದರು

ಜಿಲ್ಲಾ ಪಂಚಾಯತಿಯಲ್ಲಿ ನಡೆದ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬಹುತೇಕ ಜನರು ಮಾಸ್ಕ್ ಧರಿಸದೆ ಓಡಾಡುತ್ತಿರುವುದು ಕಂಡುಬರುತ್ತಿದೆ. ಮಾಸ್ಕ್ ಧರಿಸದೆ ಇರುವವರನ್ನು ಗುರುತಿಸಿ ದಂಡ ವಿಧಿಸಬೇಕು, ಜನರು ಸ್ವಯಂ ಪ್ರೇರಿತವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ಮದುವೆ, ಸಾಮಾಜಿಕ, ಧಾರ್ಮಿಕ ಆಚರಣೆಗಳಿಗೆ ಸರ್ಕಾರ ವಿಧಿಸಿರುವ ಷರತ್ತುಗಳನ್ನು ಕಡ್ಡಾಯವಾಗಿ ಅನುಸರಿಸಬೇಕು ಕಳೆದ ವರ್ಷ ಈ ದಿನಗಳಲ್ಲಿ ಇದ್ದ ಕೋವಿಡ್ 19 ರ ಸ್ಥಿತಿಯೇ ಈಗ ನಿರ್ಮಾಣವಾಗುತ್ತಿರುವುದು ಕಂಡುಬರುತ್ತಿದೆ ಎಂದರು.

ಜಿಲ್ಲೆಯಾದ್ಯಂತ ಕೋವಿಡ್-19 ಸೋಂಕಿತರು ಮತ್ತು ಅವರ ಸಂಪರ್ಕದ ವ್ಯಕ್ತಿಗಳನ್ನು ಪತ್ತೆಮಾಡಿ ಪರೀಕ್ಷೆಗೆ ಒಳಪಡಿಸುವ ಕಾರ್ಯ ತಿವ್ರವಾಗಬೇಕು. 60 ವರ್ಷ ಮೇಲ್ಪಟ್ಟ ಜಿಲ್ಲೆಯ ನಾಗರಿಕರನ್ನು ಹಾಗೂ 45 ವರ್ಷ ಮೇಲ್ಪಟ್ಟ ವ್ಯಕ್ತಿಗಳನ್ನು ಗುರುತಿಸಿ ಲಸಿಕೆ ಹಾಕಲು ಕ್ರಮ ವಹಿಸಬೇಕು, ಈ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪಾತ್ರ ಬಹಳ ಮುಖ್ಯವಾಗಿದೆ ಎಂದರಲ್ಲದೆ ಜನರಲ್ಲಿ ಕೋವಿಡ್-19 ರ ಹರಡುವಿಕೆಯ ವಿರುದ್ದ ಜಾಗೃತಿ ಮೂಡಿಸಬೇಕು.

ಬೇಸಿಗೆ ಪ್ರಾರಂಭವಾಗಿದ್ದು ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು ಎಂದರು. ಇದಕ್ಕೆ ಉತ್ತರಿಸಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಕಾರ್ಯಪಾಲಕ ಅಭಿಯಂತರರು ಸಭೆಗೆ ಮಾಹಿತಿ ನೀಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಮೂಡಿಗೆರೆ ತಾಲ್ಲೂಕು, ಕಳಸ ಗ್ರಾಮಕ್ಕೆ ರೂ. 260 ಲಕ್ಷ ಅಂದಾಜು ವೆಚ್ಚ ಅನುಮೋದನೆಯಾಗಿದ್ದು ಕಾಮಗಾರಿ ಪೂರ್ಣಗೊಂಡಿರುತ್ತದೆ. ತರೀಕೆರೆ ತಾಲ್ಲೂಕು ಕರಕುಚ್ಚಿ ಹಾಗೂ ಇತರೆ ಹತ್ತು ಗ್ರಾಮಗಳಲ್ಲಿ ರೂ. 514.50ಲಕ್ಷ ಅನುಮೋದನೆಯಾಗಿದೆ. ತರೀಕೆರೆ ತಾಲ್ಲೂಕು ಬೇಲೇನಹಳ್ಳಿ ಹಾಗೂ ಇತರೆ ಇಪ್ಪತ್ತು ಗ್ರಾಮಗಳ ಕುಡಿಯುವ ನೀರಿಗೆ ರೂ. 1302.68 ಲಕ್ಷಗಳಿಗೆ ಅನುಮೋದನೆಯಾಗಿದೆ. ಎಂದು ಹೇಳಿದರು.

ನಂತರ ಜಿಲ್ಲೆಯಲ್ಲಿ ಪಡಿತರ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ಕ್ರಮ ವಹಿಸಬೇಕು ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಒಟ್ಟು 524 ನ್ಯಾಯ ಬೆಲೆ ಅಂಗಡಿಗಳಿದ್ದು ಅವುಗಳಲ್ಲಿ 508 ನ್ಯಾಯ ಬೆಲೆ ಅಂಗಡಿಗಳಲ್ಲಿ ಪಿ.ಒ.ಎಸ್ ಮೂಲಕ ಪಡಿತರ ವಿತರಿಸಲಾಗುತ್ತಿದೆ. ಶೃಂಗೇರಿ, ಕೊಪ್ಪ, ಚಿಕ್ಕಮಗಳೂರು ಸೇರಿದಂತೆ 16 ನ್ಯಾಯ ಬೆಲೆ ಅಂಗಡಿಗಳಲ್ಲಿ ಇಂಟರ್‌ನೆಟ್ ಸಮಸ್ಯೆಯಿಂದಾಗಿ ಫಲಾನುಭವಿಗಳ ಸಹಿ ಪಡೆದು ಪಡಿತರ ಚೀಟಿ ವಿತರಿಸಲಾಗುತ್ತಿದೆ. ಇಲಾಖೆಯವರು ಬಯೋಮೆಟ್ರಿಕ್ ಮೂಲಕವೇ ಪಡಿತರ ವಿತರಿಸುವಂತೆ ತಿಳಿಸಲಾಗಿದೆ. ಈ 16 ನ್ಯಾಯ ಬೆಲೆ ಅಂಗಡಿಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಿದರೆ ಅನುಕೂಲವಾಗುತ್ತದೆ ಎಂದು ಆಹಾರ ಇಲಾಖೆಯ ನಿರ್ದೇಶಕರು ಮನವಿ ಮಾಡಿದರು.

ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರು ಸಭೆಗೆ ಮಾಹಿತಿ ನೀಡಿ ಜಿಲ್ಲೆಯಲ್ಲಿ 2019-20ರಲ್ಲಿ ಸುರಿದ ಬಾರಿ ಮಳೆಯಿಂದಾಗಿ ಹಾನಿಗೊಳಗಾದ ರಸ್ತೆಗಳು ಮತ್ತು ಸೇತುವೆಗಳ ಮರು ನಿರ್ಮಾಣ ಮತ್ತು ಅಭಿವೃದ್ದಿಗಾಗಿ ಒಟ್ಟು 492 ಕಾಮಗಾರಿಗಳಿಗೆ ರೂ.5685 ಲಕ್ಷಗಳ ಅನುದಾನ ಹಂಚಿಕೆಯಾಗಿದ್ದು ರೂ.2248.84 ಲಕ್ಷಗಳ ಅನುದಾನ ಬಿಡುಗಡೆಯಾಗಿದ್ದು, ಈ ಅನುದಾನದಡಿ 253 ಕಾಮಗಾರಿಗಳನ್ನು ಪೂರ್ಣಗೊಳಿಸಿ ರೂ.529.79 ಲಕ್ಷಗಳನ್ನು ವೆಚ್ಚ ಮಾಡಲಾಗಿದೆ.

ಪ್ರಸ್ತುತ ಸಾಲಿನಲ್ಲಿ 170 ಕಾಮಗಾರಿಗಳು ಪೂರ್ಣಗೊಂಡಿದ್ದು 44 ಕಾಮಗಾರಿಗಳು ಕೆಲವು ಹಂತದಲ್ಲಿ ಪ್ರಗತಿಯಲ್ಲಿದ್ದು 25 ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ. ವಿಭಾಗ ಕಛೇರಿಯಲ್ಲಿ 1096 ಲಕ್ಷಗಳ ಬಿಲ್ಲು ಬಾಕಿ ಇರುತ್ತದೆ ಎಂದು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ಮಾತನಾಡಿ, ಜಿಲ್ಲೆಯಲ್ಲಿ 2020ರ ಏಪ್ರಿಲ್ 20 ರಿಂದ ಆಗಸ್ಟ್ 2020 ರವರಗೆ ಒಟ್ಟು 11 ಮಾನವಹಾನಿ ಪ್ರಕರಣಗಳಿಗೆ ಪರಿಹಾರ ನೀಡಲಾಗಿದೆ ಎಂದರು.

ಜಿಲ್ಲೆಯಲ್ಲಿ 50 ಗ್ರಾಮಗಳನ್ನು ಪೋಡಿ ಮುಕ್ತ ಗ್ರಾಮಗಳನ್ನಾಗಿ ಮಾಡುವ ಗುರಿ ಹೊಂದಲಾಗಿದ್ದು, ಈಗಾಗಲೇ 35 ಗ್ರಾಮಗಳನ್ನು ಪೋಡಿ ಮಾಡಿ ಪೋಡಿ ಮುಕ್ತಗೊಳಿಸಲಾಗಿದ್ದು, ಇನ್ನೂ 15 ಗ್ರಾಮಗಳು ಬಾಕಿ ಇದೆ ಎಂದು ಚಿಕ್ಕಮಗಳೂರು ಉಪವಿಭಾಗದ ಉಪವಿಭಾಗಧಿಕಾರಿ ಡಾ.ಹೆಚ್.ಎಲ್.ನಾಗರಾಜ್ ಸಭೆಗೆ ಮಾಹಿತಿ ನೀಡಿದರು.

ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು ಕುಡಿಯುವ ನೀರಿಗೆ ಸಂಬಂಧಿಸಿದಂತೆ ಮೆಸ್ಕಾಂ ಅಧಿಕಾರಿಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಕೋವಿಡ್ 19 ಎರಡನೇ ಅಲೆ ಪ್ರಾರಂಭವಾಗಿದ್ದು, ಎಲ್ಲಾ ಇಲಾಖೆ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ನಿರ್ವಹಿಸುವಂತೆ ಉಸ್ತುವಾರಿ ಕಾರ್ಯದರ್ಶಿ ಸೂಚಿಸಿದರು.

ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಛೇರಿಯಿಂದ ಹೊರ ತಂದಿರುವ 2019-20ರ ಚಿಕ್ಕಮಗಳೂರು ಜಿಲ್ಲೆಯ ಅಂಕಿ-ಅಂಶಗಳ ನೋಟ ಕೈಪಿಡಿಯನ್ನು ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಪೂವಿತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಹೆಚ್, ಅಪರ ಜಿಲ್ಲಾಧಿಕಾರಿ ಬಿ.ಆರ್.ರೂಪ, ತರೀಕೆರೆ ಉಪವಿಭಾಗದ ಉಪವಿಭಾಗಾಧಿಕಾರಿ ರೇಣುಕಾ ಪ್ರಸಾದ್, ಎಲ್ಲಾ ತಾಲ್ಲೂಕುಗಳ ತಹಸೀಲ್ದಾರರು ಹಾಗೂ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here