ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕ್ಷಯರೋಗವನ್ನು ಸಂಪೂರ್ಣ ನಿರ್ಮೂಲನೆ ಮಾಡುವ ಮೂಲಕ ಕ್ಷಯರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಹಕರಿಸಿ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ತಿಳಿಸಿದರು.
ತಾಲ್ಲೂಕು ಪಂಚಾಯಿತಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾರತದಲ್ಲಿ ಪ್ರತಿ 5 ನಿಮಿಷಕ್ಕೆ ಇಬ್ಬರು ಕ್ಷಯ ರೋಗದಿಂದ ಬಲಿಯಾಗುತ್ತಿದ್ದು, ರೋಗಿಗಳು ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಕ್ಷಯರೋಗಕ್ಕೆ ಸರಿಯಾದ ಸಮಯಕ್ಕೆ ಚಿಕಿತ್ಸೆಯನ್ನು ತೆಗೆದುಕೊಂಡರೆ ರೋಗದಿಂದ ಮುಕ್ತರಾಗಬಹುದು, ಜನರಲ್ಲಿ ಕ್ಷಯ ರೋಗದ ಹರಡುವಿಕೆ, ಲಕ್ಷಣಗಳ ತಿಳುವಳಿಕೆಯ ಕೊರತೆ ಇರುವುದರಿಂದ ಕ್ಷಯ ರೋಗದ ಬಗ್ಗೆ ಅರಿವು ಮೂಡಿಸಿದಲ್ಲಿ ಕ್ಷಯ ರೋಗವನ್ನು ತಡೆಗಟ್ಟಬಹುದು ಎಂದು ಹೇಳಿದರು.
ವಿಶ್ವ ಆರೋಗ್ಯ ಸಂಸ್ಥೆಯು 2030ರೊಳಗೆ ಕ್ಷಯ ರೋಗ ಮುಕ್ತ ವಿಶ್ವ ನಿರ್ಮಾಣ ಮಾಡುವ ಉದ್ದೇಶ ಹೊಂದಿದ್ದು, ಭಾರತ ದೇಶವು 2025 ರೊಳಗಾಗಿ ಕ್ಷಯ ರೋಗ ಮುಕ್ತ ದೇಶವನ್ನಾಗಿ ಮಾಡಲು ಉದ್ದೇಶಿಸಿದೆ ಈ ಯೋಜನೆಯನ್ನು ಯಶಸ್ವಿಗೊಳಿಸುವಲ್ಲಿ ನಾವೆಲ್ಲರೂ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದರು.
ಜಿಲ್ಲೆಯಲ್ಲಿ ಒಟ್ಟು 875 ಕ್ಷಯ ರೋಗಿಗಳು ಇದ್ದು, ರೋಗಿಗಳು ಸಂಪೂರ್ಣ ಗುಣಮುಖರಾಗುವವರೆಗೂ ನಿರಂತರ ಚಿಕಿತ್ಸೆ ಪಡೆಯುವ ಮೂಲಕ ರೋಗದಿಂದ ಮುಕ್ತರಾಗಬಹುದು ಕ್ಷಯ ರೋಗದ ಬಗ್ಗೆ ಗ್ರಾಮೀಣ ಭಾಗದಲ್ಲಿ ಆರೋಗ್ಯ ಶಿಕ್ಷಣದ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ಕಲಾ ತಂಡಗಳು, ಭಿತ್ತಿ ಪತ್ರಗಳು ಹಾಗೂ ಮಾಧ್ಯಮದ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಹೆಚ್ಚು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜಾಗೃತಿ ಮೂಡಿಸಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಉಮೇಶ್ ಮಾತನಾಡಿ, ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ 11 ಕಲಾ ತಂಡಗಳು ಹಾಗೂ ಸರ್ಕಾರಿ ಕಛೇರಿಗಳಲ್ಲಿ ಕೆಂಪು ದೀಪ ಉರಿಸುವ ಮೂಲಕ ಕ್ಷಯ ರೋಗದ ಕುರಿತು ಅರಿವು ಮೂಡಿಸಲಾಗುತ್ತಿದೆ. ಕ್ಷಯ ರೋಗದ ನಿರ್ಮೂಲನೆಗಾಗಿ ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಇದರ ಸದುಪಯೋಗ ಪಡೆದುಕೊಳ್ಳುವ ಮೂಲಕ ಕ್ಷಯ ರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಹಕರಿಸಬೇಕೆಂದು ತಿಳಿಸಿದರು.
ಸರ್ಕಾರವು 2025 ರೊಳಗೆ ಕ್ಷಯರೋಗ ನಿರ್ಮೂಲನೆ ಮಾಡಲು ಯೋಜನೆ ಕೈಗೊಂಡಿದ್ದು, ವೈದ್ಯರು, ಆಶಾ ಕಾರ್ಯಕರ್ತೆಯರ ಪಾತ್ರ ಬಹಳ ಮುಖ್ಯವಾಗಿದ್ದು, ಎಲ್ಲರೂ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಆಶಾ ಕಾರ್ಯಕರ್ತೆಯರು ಗ್ರಾಮೀಣ ಭಾಗದ ಜನರೊಂದಿಗೆ ಉತ್ತಮ ಸಂಪರ್ಕ ಹೊಂದಿರುವುದರಿಂದ ಜನರಲ್ಲಿ ಅರಿವು ಮೂಡಿಸುವ ಮೂಲಕ ರೋಗದ ಲಕ್ಷಣ ಇರುವವರನ್ನು ಗುರುತಿಸಿ ಚಿಕಿತ್ಸೆಗೆ ಒಳಪಡಿಸಬೇಕು.
ಜಿಲ್ಲೆಯ ಎಲ್ಲಾ ವೈದ್ಯಾಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಿದಲ್ಲಿ 2025 ರ ಮುಂಚಿತವಾಗಿಯೇ ಜಿಲ್ಲೆಯನ್ನು ಕ್ಷಯರೋಗ ಮುಕ್ತ ಜಿಲ್ಲೆಯನ್ನಾಗಿ ನಿರ್ಮಾಣ ಮಾಡಲು ಸಾಧ್ಯ, ಕಡ್ಡಾಯವಾಗಿ ಕಫಾ ತಪಾಸಣೆ ಮಾಡುವ ಮೂಲಕ ರೋಗಿಗಳನ್ನು ಗುರುತಿಸಿ ಗುಣಮುಖರನ್ನಾಗಿ ಮಾಡಲು ಸಹಕರಿಸಬೇಕು ಎಂದು ಹೇಳಿದರು.
ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಮೋಹನ್ ಕುಮಾರ್ ಮಾತನಾಡಿ, ಸರ್ಕಾರದಿಂದ ಹಲವಾರು ಯೋಜನೆಗಳು ಹಾಗೂ ಲಸಿಕೆಗಳು ಲಭ್ಯವಿದ್ದು, ರೋಗಿಗಳು ಚಿಕಿತ್ಸೆಯನ್ನು ಅರ್ಧಕ್ಕೆ ನಿಲ್ಲಿಸದೆ ರೋಗವು ಸಂಪೂರ್ಣವಾಗಿ ಗುಣವಾಗುವವರೆಗೂ ಚಿಕಿತ್ಸೆ ಪಡೆಯುವ ಮೂಲಕ ಕ್ಷಯರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಮುಂದಾಗಬೇಕು.
ಕ್ಷಯರೋಗದ ನಿರ್ಮೂಲನೆ ಮಾಡುವಲ್ಲಿ ವೈದ್ಯರು, ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಹಾಗೂ ಆಶಾ ಕಾರ್ಯಕರ್ತೆಯರು ಎಷ್ಟು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತೆವೋ ಅಷ್ಟರ ಮಟ್ಟಿಗೆ ಕ್ಷಯರೋಗದ ನಿರ್ಮೂಲನೆ ಮಾಡಲು ಸಾಧ್ಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಕ್ಷಯರೋಗದ ಕುರಿತು ಅರಿವು ಮೂಡಿಸುವ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿ ಕ್ಷಯರೋಗ ನಿರ್ಮೂಲನೆಗಾಗಿ ಶ್ರಮಿಸಿರುವ ಆರೋಗ್ಯ ಇಲಾಖೆಯ ಅಧಿಕಾರಿಗಳು, ವೈದ್ಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಟಿ.ಪಿ.ಬಾಲಕೃಷ್ಣ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಗೀತಾ, ತಾಲ್ಲೂಕು ವೈದ್ಯಾಧಿಕಾರಿ ಡಾ. ಸೀಮಾ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಹರೀಶ್ಬಾಬು, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮಂಜುನಾಥ್, ಜಿಲ್ಲಾ 2ನೇ ಹೆಚ್ಚುವರಿ ಶಸ್ತ್ರ ಚಿಕಿತ್ಸಕ ಡಾ.ನಾಗೇಂದ್ರ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಲಾಜಾಕ್ಷಿ ಹಾಗೂ ಸಿಬ್ಬಂದಿಗಳು ಹಾಜರಿದ್ದರು.