ಬಾಬು ಜಗಜೀವನ್ ರಾಮ್ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಸರಳವಾಗಿ ಆಚರಣೆಗೆ ನಿರ್ಧಾರ

0
358

ಚಿಕ್ಕಮಗಳೂರು: ಕೋವಿಡ್-19 ಹಿನ್ನೆಲೆ ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಿ ಡಾ.ಬಾಬು ಜಗಜೀವನ್ ರಾಮ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಸರಳವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ತಿಳಿಸಿದರು.

ಇಂದು ನಡೆದ ಡಾ.ಬಾಬು ಜಗಜೀವನ್ ರಾಮ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಣೆಯ ಕುರಿತ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಕೋವಿಡ್-19 ಎರಡನೇ ಅಲೆಯು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಿನ ಜನರು ಸೇರುವುದನ್ನು ಹಾಗೂ ಸಭೆ, ಸಮಾರಂಭಗಳನ್ನು ನಡೆಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡುವ ಮೂಲಕ ಜಿಲ್ಲೆಯನ್ನು ಕೋವಿಡ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಎಲ್ಲರೂ ಸಹಕರಿಸಬೇಕು ಎಂದರು.

ಕೋವಿಡ್-19 ಹಿನ್ನೆಲೆ ಜಯಂತಿಗಳ ಆಚರಣೆಯನ್ನು ವಿಜೃಂಭಣೆಯಿಂದ ಆಚರಿಸದೆ ಸರಳವಾಗಿ ಸನ್ಮಾನ್ಯರಿಗೆ ಗೌರವ ಸಮರ್ಪಣೆ ಮಾಡುವ ಮೂಲಕ ಅವರ ಉದ್ದೇಶ ಮತ್ತು ಸಮಾಜಕ್ಕೆ ನೀಡಿರುವ ಕೊಡುಗೆಗಳನ್ನು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದರೊಂದಿಗೆ ಸಮಾಜಕ್ಕೆ ಉತ್ತಮ ಸಂದೇಶಗಳನ್ನು ನೀಡೋಣ ಎಂದು ತಿಳಿಸಿದರು.

ಏಪ್ರಿಲ್ 05 ರಂದು ಡಾ.ಬಾಬು ಜಗಜೀವನ್ ರಾಮ್ ಅವರ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಹಾಗೂ ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಜಿಲ್ಲಾ ಪಂಚಾಯಿತಿ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ನಗರದ ಕುವೆಂಪು ಕಲಾ ಮಂದಿರದಲ್ಲಿ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಹಾಗೂ ಬಾಬು ಜಗಜೀವನ್ ರಾಮ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಉಪನ್ಯಾಸ ನೀಡಲು ಉತ್ತಮ ಉಪಾನ್ಯಸಕರನ್ನು ಆಹ್ವಾನಿಸಲು ತಿಳಿಸಿದರು. ಮಹಾತ್ಮರ ಜಯಂತಿಯನ್ನು ಸರಳವಾಗಿ ಆಚರಿಸುವ ಮೂಲಕ ಅವರ ಸಂದೇಶಗಳನ್ನು ಸ್ಮರಿಸೋಣ ಸಾರ್ವಜನಿಕರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಂಘಟನೆಗಳು ಮಹಾನ್ ವ್ಯಕ್ತಿಗಳ ಅನುಯಾಯಿಗಳು ಸರ್ಕಾರದ ಮಾರ್ಗಸೂಚಿಗಳನ್ವಯ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂದು ಹೇಳಿದರು.

ಸರ್ಕಾರದ ಆದೇಶಗಳನ್ನು ಪಾಲಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಅದನ್ನು ವಿರೋಧಿಸಲು ಸಾಧ್ಯವಿಲ್ಲ ಜಿಲ್ಲೆಯಲ್ಲಿ ಕೋರೊನಾ ಎರಡನೇ ಅಲೆಯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಕೊರೊನಾ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಜಿಲ್ಲಾಡಳಿತಕ್ಕೆ ಸಹಕರಿಸಬೇಕು ಎಂದು ಹೇಳಿದರು.

ಚಿಕ್ಕಮಗಳೂರು ತಹಸೀಲ್ದಾರ್ ಡಾ.ಕಾಂತರಾಜು, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಬಿ.ವಿ.ಚೈತ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಮಂಜುಳಾ ಹುಲ್ಲಹಳ್ಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಉಮೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ್, ಜಿಲ್ಲಾ ದೈಹಿಕ ಶಿಕ್ಷಣ ಇಲಾಖೆ ನಿರ್ದೇಶಕ ಲಕ್ಷ್ಮಣ್, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ದೇವೇಂದ್ರಪ್ಪ, ಗೌರವಾಧ್ಯಕ್ಷ ಓಂಕಾರಸ್ವಾಮಿ ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here