ಯುವಕರೆ ಮಾದಕ ವ್ಯಸನಗಳಿಗೆ ಬಲಿಯಾಗದಿರಿ : ಗೃಹ ಸಚಿವ ಆರಗ ಜ್ಞಾನೇಂದ್ರ

0
325

ತೀರ್ಥಹಳ್ಳಿ: ಯುವಜನತೆ ಈ ದೇಶದ ಅಮೂಲ್ಯ ಆಸ್ತಿಯಾಗಿದ್ದು, ಅವರೆಲ್ಲರನ್ನೂ ಸನ್ಮಾರ್ಗದಲ್ಲಿ ಕರೆದೊಯ್ಯಬೇಕಾದ ಅಗತ್ಯವಿದೆ. ಯುವಜನತೆ ಗಾಂಜಾ, ಅಫೀಮಿನಂತಹ ಮಾದಕ ವ್ಯಸನಗಳಿಗೆ ಬಲಿಯಾಗಿ ತಮ್ಮ ಅಮೂಲ್ಯ ಜೀವ, ಆಸ್ತಿ ಹಾನಿ ಮಾಡಿಕೊಳ್ಳದಂತೆ ರಕ್ಷಿಸಬೇಕಾದ ಹೊಣೆಗಾರಿಕೆ ನಮ್ಮೆಲ್ಲರದ್ದಾಗಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದರು.

ಅವರು ಇಂದು ತೀರ್ಥಹಳ್ಳಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ತೀರ್ಥಹಳ್ಳಿಯ ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಮಾದಕ ವ್ಯಸ್ತುಗಳ ನಿಯಂತ್ರಣದ ಕುರಿತು ಏರ್ಪಡಿಸಲಾಗಿದ್ದ ಜನಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಮಾದಕ ವ್ಯಸನಗಳಿಗೆ ಬಲಿಯಾಗುವ ವ್ಯಕ್ತಿಸಮಾಜಘಾತಕರಾಗುವ ಕೌಟುಂಬಿಕ ಸಾಮರಸ್ಯವನ್ನು ನಾಶಪಡಿಸುವ ಸಂಭವವಿದೆ. ಆದ್ದರಿಂದ ಮಾದಕ ವ್ಯಸನಗಳಿಂದ ದೂರವಿರುವಂತೆ ಯುವಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.

ಮಾದಕ ವಸ್ತುಗಳ ಕಳ್ಳಸಾಗಾಣಿಕೆ, ಮಾರಾಟ, ಪ್ರೇರಣೆ ನೀಡುವ ಚಟುವಟಿಕೆಗಳಲ್ಲಿ ಸಕ್ರಿಯರಾದವರನ್ನು ಗುರುತಿಸಿ ಕಾನೂನು ಪ್ರಕಾರ ದಂಡನೆಗೆ ಗುರಿಪಡಿಸಲಾಗುವುದಲ್ಲದೇ ರಾಜ್ಯದಲ್ಲಿ ಅದರ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಅಗತ್ಯ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಲಿದೆ ಎಂದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಅವರು ಮಾತನಾಡಿ, ಇಂದಿನ ಯುವ ಜನತೆ ಹೆಚ್ಚಿನ ಸಂಖ್ಯೆಯ ಯುವಕರು ಮಾದಕ ವ್ಯಸನಗಳಿಗೆ ದಾಸರಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಗಾಂಜಾ ಅಫೀಮು ಮತ್ತಿತರ ಮಾದಕ ವಸ್ತುಗಳ ಸಾಗಾಟ, ಮಾರಾಟ ಹಾಗೂ ಬೆಳೆಯುವವರ ಮೇಲೆ ಪೊಲೀಸ್ ಕಣ್ಗಾವಲು ಇರಿಸಲಾಗಿದೆ. ಇಂದಿನಿಂದ ಆರಂಭವಾಗಿರುವ ಈ ಜನಜಾಗೃತಿ ಅಭಿಯಾನದಲ್ಲಿ ಒಂದು ತಿಂಗಳ ಕಾಲ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳು, ಕಾನೂನು ಪ್ರಕಾರ ಆಗಬಹುದಾದ ದಂಡನೆಗಳ ಕುರಿತು ಅರಿವು ಮೂಡಿಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಜನಜಾಗೃತಿಗಾಗಿ ವಿನ್ಯಾಸಗೊಳಿಸಲಾದ ವಾಹನಕ್ಕೆ ಸಚಿವರು ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ|| ಶೇಖರ್ ಹೆಚ್. ತೆಕ್ಕಣ್ಣನವರ್ ಸೇರಿದಂತೆ ಸಂಬಂಧಿತ ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here