ಚಿಕ್ಕಮಗಳೂರು: ಸಕಾಲ ಯೋಜನೆಯಡಿ ಸ್ವೀಕರಿಸಿದ ಅರ್ಜಿಗಳನ್ನು ನಿಗಧಿತ ಸಮಯದೊಳಗೆ ವಿಲೇವಾರಿ ಮಾಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಸೂಚಿಸಿದರು.
ತಮ್ಮ ಕಛೇರಿಯಲ್ಲಿ ನಡೆದ ಸಕಾಲ ಯೋಜನೆಯ ಪ್ರಗತಿ ಪರಿಶೀಲನೆ ಹಾಗೂ ಸಕಾಲ ಸೇವೆಗಳ ಅನುಷ್ಠಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೊಳಿಸಿದ್ದು, ಸಕಾಲ ಯೋಜನೆಯಡಿಯಲ್ಲಿ ಸಲ್ಲಿಕೆಯಾದ ಅರ್ಜಿಗಳ ವಿಲೇವಾರಿಗೆ ಅಧಿಕಾರಿಗಳು ಮುತುವರ್ಜಿಯಿಂದ ಕೆಲಸ ನಿರ್ವಹಿಸಬೇಕು ಎಂದರು.
ನಗರಸಭೆ ವ್ಯಾಪ್ತಿಯಲ್ಲಿ ಒಟ್ಟು 113 ಅರ್ಜಿಗಳು ಸಕಾಲ ಯೋಜನೆ ಅಡಿಯಲ್ಲಿ ನೊಂದಾಣಿಯಾಗಿದ್ದು, ಇನ್ನೂ ಕೂಡ ವಿಲೇವಾರಿಯಾಗದೆ ವಿಳಂಬವಾಗಿರುವುದಕ್ಕೆ ಸೂಕ್ತ ಕಾರಣವನ್ನು ನೀಡಬೇಕೆಂದು ನಗರಸಭೆಯ ಅಧಿಕಾರಿಗಳಿಗೆ ತಿಳಿಸಿದರು.
ಪ್ರಾದೇಶಿಕೆ ಸಾರಿಗೆ ಇಲಾಖೆ, ಕೆ.ಎಸ್.ಆರ್.ಟಿ.ಸಿ, ಕೃಷಿ ಇಲಾಖೆ, ಆಯುಷ್ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆಗಳಲ್ಲಿ ಸಕಾಲದಲ್ಲಿ ಅರ್ಜಿಗಳನ್ನು ಸ್ವೀಕರಿಸಿದ್ದು, ವಿಲೇವಾರಿಯಾಗದೇ ಉಳಿದಿರುವ ಅರ್ಜಿಗಳನ್ನು ಪರಿಶೀಲಿಸಿ ಅವುಗಳನ್ನು ನಿಗಧಿತ ಸಮಯದೊಳಗೆ ವಿಲೇವಾರಿ ಮಾಡಬೇಕೆಂದು ಅಧಿಕಾರಿಗಳಿಗೆ ಹೇಳಿದರು.
ಇಲಾಖೆಗಳು ಅರ್ಜಿಗಳನ್ನು ಸಕಾಲ ಯೋಜನೆಯಡಿಯಲ್ಲಿಯೇ ಸ್ವೀಕರಿಸಿ ವಿಲೇವಾರಿ ಮಾಡಬೇಕು ವಿಲೇವಾರಿಯಾಗದೇ ವಿಳಂಬವಾಗಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ತಾಂತ್ರಿಕ ದೋಷವಿದ್ದಲ್ಲಿ ಅದರ ಮಾಹಿತಿಯನ್ನು ನಮ್ಮ ಗಮನಕ್ಕೆ ತರಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಸಕಾಲ ಯೋಜನೆಯಡಿಯಲ್ಲಿ ಅರ್ಜಿಗಳು ಸ್ವೀಕೃತಿಯಾದ ದಿನಾಂಕ ಮತ್ತು ಸ್ವೀಕೃತಿಯಾದ ಅರ್ಜಿಗಳ ವಿಲೇವಾರಿ ವಿಳಂಬವಾಗಲು ಸೂಕ್ತ ಕಾರಣಗಳನ್ನು ನೀಡಿ ಯೋಜನೆಯನ್ನು ಪರಿಣಾಮಕಾರಿ ಅನುಷ್ಠಾನಕ್ಕೆ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕೈ ಜೋಡಿಸಬೇಕು. ಅರ್ಜಿಗಳ ಸ್ವೀಕಾರ, ತಿರಸ್ಕಾರ ಮತ್ತು ವಿಲೇವಾರಿ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಬಿ.ಆರ್.ರೂಪ, ಉಪವಿಭಾಗಾಧಿಕಾರಿ ಡಾ.ಹೆಚ್.ಎಲ್.ನಾಗರಾಜ್ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.