ಚಿಕ್ಕಮಗಳೂರು: ಸಫಾಯಿ ಕರ್ಮಚಾರಿಗಳಿಗೆ ಸಫಾಯಿ ಕರ್ಮಾಚಾರಿ ಗುರುತಿನ ಚೀಟಿ, ಪ್ರಮಾಣಪತ್ರ ವಿತರಿಸಲು ಹೆಚ್ಚಿನ ಪ್ರಚಾರ ಕಾರ್ಯ ಕೈಗೊಳ್ಳಬೇಕು ಮತ್ತು ಅವರಿಗೆ ಇದರ ಬಗ್ಗೆ ತಿಳುವಳಿಕೆ ನೀಡಬೇಕು ಎಂದು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ಗಳ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ-2013ರ ಅನ್ವಯ ಜಿಲ್ಲಾ ಮಟ್ಟದ ಜಿಲ್ಲಾ ಜಾಗೃತಿ ಸಮಿತಿಯ ದ್ವಿತೀಯ ತ್ರೈಮಾಸಿಕ ಸಭೆಯಲ್ಲಿ ಮಾತನಾಡಿ, ಸುಲಭ ಶೌಚಾಲಯ, ಚಿತ್ರಮಂದಿರ, ಕಲ್ಯಾಣ ಮಂಟಪ, ಸಭಾಭವನಗಳು, ಆಸ್ಪತ್ರೆಗಳು, ಪೊಲೀಸ್ ಠಾಣೆ, ರೈಲು-ಬಸ್ಸುನಿಲ್ದಾಣದ ಶೌಚಾಲಯಗಳಲ್ಲಿ ಸ್ವಚ್ಛತಾ ಕೆಲಸ ಮಾಡುವ ಸಫಾಯಿ ಕರ್ಮಾಚಾರಿಗಳು ಗುರುತಿನ ಚೀಟಿಗಳನ್ನು ಪಡೆಯಲು ಅರ್ಜಿ ಸಲ್ಲಿಸಿದ ತಕ್ಷಣ ಪರಿಶೀಲಿಸಿ ಗುರುತಿನ ಚೀಟಿ/ಪ್ರಮಾಣಪತ್ರಗಳನ್ನು ವಿತರಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ಶೃಂಗೇರಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ವಾಸಿಸಲು ಮನೆಯಿಲ್ಲದ ಕಾರಣ ಕಸ ವಿಲೇವಾರಿ ಘಟಕದ ಹತ್ತಿರ ಕಾವಲುಗಾರರಿಗೆ ನಿರ್ಮಿಸಿದ ಮನೆಯನ್ನು ತಾತ್ಕಾಲಿಕವಾಗಿ ನೀಡಿದ್ದು, ಆ ಸ್ಥಳ ದುರ್ವಾಸನೆಯಿಂದ ಕೂಡಿರುವುದರಿಂದ ವಾಸಯೋಗ್ಯವಾಗಿಲ್ಲ. ಆದ್ದರಿಂದ ಶಾಶ್ವತವಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಒಂದು ವಾರದೊಳಗೆ ವರದಿ ನೀಡಲು ಮತ್ತು ಆಶ್ರಯ ಸಮಿತಿ ಮುಂದೆ ಮಂಡಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಚೈತ್ರಾ ಮಾತನಾಡಿ, ಚಿಕ್ಕಮಗಳೂರು ನಗರಸಭೆ ವ್ಯಾಪ್ತಿಯಲ್ಲಿ ಮತ್ತು ಕಡೂರು ಪುರಸಭೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿದ್ದ ಸಫಾಯಿ ಕರ್ಮಾಚಾರಿಗಳಿಗೆ ಮತ್ತು ಅವರ ಅವಲಂಬಿತರಿಗೆ ಗುರುತಿನ ಚೀಟಿಗಳನ್ನು ನೀಡಲಾಗಿದೆ. ಕಡೂರು ಪುರಸಭಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿವೇಶನ/ವಸತಿರಹಿತ 6 ಜನ ಖಾಯಂ ಪೌರಕಾರ್ಮಿಕರಿಗೆ ಮನೆ ಕಟ್ಟಿಸಿಕೊಡಲಾಗಿದ್ದು, ಉಳಿದ ಕಾರ್ಮಿಕರಿಗೆ ಸೂಕ್ತ ಸ್ಥಳ ನಿವೇಶನ ಗುರುತಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಎಚ್ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
Related