ಶಿವಮೊಗ್ಗ: ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಿ ಎಂದಿನಂತೆ ವಿದ್ಯಾರ್ಥಿಗಳಿಗೆ ಬಸ್ಪಾಸ್ ಮೂಲಕ ಪ್ರಯಾಣಕ್ಕೆ ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘದ ವತಿಯಿಂದ ಇಂದು ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಕಳೆದ 4 ದಿನದಿಂದ ರಾಜ್ಯಾದ್ಯಂತ ಕೆಎಸ್ಆರ್ಟಿಸಿ ಸಾರಿಗೆ ನೌಕರರು 6ನೇ ವೇತನ ಆಯೋಗ ಶಿಫಾರಸು ಜಾರಿ ಮಾಡಬೇಕೆಂದು ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಈ ಮುಷ್ಕರದಿಂದಾಗಿ ಪ್ರಯಾಣಿಕರಿಗೆ ಅದರಲ್ಲೂ ಬಸ್ಪಾಸ್ ಹೊಂದಿದ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಸರ್ಕಾರಿ ಬಸ್ ಇಲ್ಲದ ಕಾರಣದಿಂದಾಗಿ ಖಾಸಗಿ ಬಸ್ ಹಾಗೂ ಇತರೆ ವಾಹನಗಳ ಮಾಲೀಕರು ದುಪ್ಪಟ್ಟು ದರವನ್ನು ನಿಗದಿ ಮಾಡಿದ್ದಾರೆ. ಈ ಕಾರಣದಿಂದಾಗಿ ಗ್ರಾಮಾಂತರ ಹಾಗೂ ಇತರೆ ಪ್ರದೇಶಗಳಿಂದ ಬರುವಂತಹ ವಿದ್ಯಾರ್ಥಿಗಳು ದೈನಂದಿನ ಶಾಲಾ-ಕಾಲೇಜುಗಳ ತರಗತಿಗಳಿಗೆ ಗೈರು ಹಾಜರಾಗುತ್ತಿದ್ದಾರೆ ಎಂದರು.
ಈಗಾಗಲೇ ಮಾರಕ ಕೊವಿಡ್ ಪರಿಣಾಮದಿಂದಾಗಿ ಶಾಲಾ-ಕಾಲೇಜುಗಳಲ್ಲಿ ತರಗತಿ ನಡೆಯುವುದು ತೀರಾ ವಿರಳವಾಗಿದೆ. ಎಸ್ಎಸ್ಎಲ್ಸಿ, ಪಿಯು ಸಮೀಪಿಸುತ್ತಿದ್ದು ಈಗಾಗಲೆ ಪದವಿ ಪರೀಕ್ಷೆಗಳು ಆರಂಭವಾಗಿದೆ.
ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ನ್ಯಾಯ ಸಮ್ಮತವಾಗಿರುವ ನೌಕರರ ಬೇಡಿಕೆಗಳು ಸರ್ಕಾರ ಕೂಡಲೇ ಈಡೇರಿಸಬೇಕೆಂದು ಒತ್ತಾಯಿಸಿದರು.
ಸಂಘದ ರಾಜ್ಯಾಧ್ಯಕ್ಷ ಡಿ.ಆರ್.ಗಿರೀಶ್, ಕೃಷ್ಣನಾಯ್ಕ, ಉಷಾನಾಯ್ಕ, ಪರಮೇಶ್ವರ ನಾಯ್ಕ, ಪೀರಾನಾಯ್ಕ, ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.