ಎಲ್ಲಾ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಬಳಕೆ ಕಡ್ಡಾಯ

0 143

ಚಿಕ್ಕಮಗಳೂರು : ಕನ್ನಡ ಭಾಷಾ ಸಮಗ್ರ ಅಭಿವೃದ್ಧಿಗೆ ಅನುಗುಣವಾಗಿ ರಾಜ್ಯ ಸರ್ಕಾರದ ಇಲಾಖೆಗಳು, ಉದ್ಯಮಗಳು, ಸ್ವಯತ್ತ ಸಂಸ್ಥೆಗಳು, ಸಹಕಾರ ಮತ್ತು ಸಾರ್ವಜನಿಕ ಉದ್ಯಮಗಳು, ಶೈಕ್ಷಣಿಕ ಸಂಸ್ಥೆಗಳು, ಬ್ಯಾಂಕ್‌ಗಳು, ಇತರೆ ಹಣಕಾಸು ಸಂಸ್ಥೆಗಳು, ಖಾಸಗಿ ಕೈಗಾರಿಕೆಗಳು, ಹೋಟೆಲ್‌ಗಳ ನಾಮಫಲಕಗಳು ಮತ್ತು ಫಲಕದಲ್ಲಿರುವ ಹೆಸರುಗಳು ಹಾಗೂ ಸದರಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ಹೆಸರು ಮತ್ತು ಪದನಾಮಗಳನ್ನು ಸೂಚಿಸುವ ಫಲಕಗಳಲ್ಲಿನ ಮೇಲಿನ ಅರ್ಧಭಾಗವು ಕಡ್ಡಾಯವಾಗಿ ಕನ್ನಡದಲ್ಲಿ ಶೇ. 60, ಇತರೆ ಭಾಷೆ ಶೇ. 40 ಇರತಕ್ಕದ್ದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ತಿಳಿಸಿದರು.

ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಇಂದು ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಕಡ್ಡಾಯ ಬಳಕೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಕರ್ನಾಟಕದಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುವ ಕುರಿತು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ – 2022 ಮತ್ತು ತಿದ್ದುಪಡಿ 2024ನ್ನು ಸಮರ್ಪಕವಾಗಿ ಜಾರಿಗೊಳಿಸುವಂತೆ ಸರ್ಕಾರ ಆದೇಶ ಮಾಡಿದ್ದು, ಪ್ರತಿಯೊಬ್ಬರು ತಪ್ಪದೆ ಪಾಲಿಸಬೇಕೆಂದು ತಿಳಿಸಿದರು.

ರಸ್ತೆಗಳು ಮತ್ತು ಬಡಾವಣೆ ಪ್ರದೇಶಗಳ ಹೆಸರುಗಳು ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳ ಮತ್ತು ಸ್ಥಳೀಯ ಪ್ರಾಧಿಕಾರಗಳ ಮೇಲ್ವಿಚಾರಣೆಯಲ್ಲಿ ಹಾಕಲಾಗಿರುವ ಫಲಕಗಳ ಮೇಲೆ ಪ್ರದರ್ಶಿಸಲಾಗುವ ವಿವರಗಳು ಕಡ್ಡಾಯವಾಗಿ ಕನ್ನಡದಲ್ಲಿರಬೇಕು. ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರ ಪ್ರಕಟಣೆಗಾಗಿ ಹೊರಡಿಸಿದ ಎಲ್ಲಾ ಟೆಂಡರ್ ಅಧಿಸೂಚನೆ, ಜಾಹೀರಾತು, ಅರ್ಜಿ ನಮೂನೆ, ಡಿಜಿಟಲ್ ನಮೂನೆ, ಪ್ರಮಾಣ ಪತ್ರ ಮತ್ತು ಅಧಿಸೂಚನೆಗಳು, ಸರ್ಕಾರ, ಸ್ಥಳೀಯ ಪ್ರಾಧಿಕಾರ, ಅನುದಾನಿತ ಅಥವಾ ಅನುದಾನ ರಹಿತ ಸಂಸ್ಥೆಗಳು ನಡೆಸುವ ಕಾರ್ಯಕ್ರಮಗಳ ಕುರಿತ ಕರಪತ್ರ, ಬ್ಯಾನರ್, ಪ್ಲೆಕ್ಸ್, ಎಲೆಕ್ಟ್ರಾನಿಕ್ ಪ್ರದರ್ಶನ ಫಲಕ, ಮಾಹಿತಿಗಳು, ನೋಟೀಸ್‌ಗಳು ಮುಂತಾದವು ಕನ್ನಡದಲ್ಲಿಯೇ ಇರಬೇಕು ಎಂದರು.

ಸಾಧ್ಯವಾದಷ್ಟು ಮಟ್ಟಿಗೆ ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲಾ ಕೈಗಾರಿಕ, ಮತ್ತು ಇತರೆ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆ ಕುರಿತಾದ ನಿದರ್ಶನಗಳು ಯಾವುದಾದರೂ ಇದ್ದಲ್ಲಿ ಇತರೆ ಭಾಷೆ ಜೊತೆಗೆ ಕನ್ನಡದಲ್ಲಿ ಇರತಕ್ಕದ್ದು ಎಂದು ಹೇಳಿದ ಅವರು. ರಾಜ್ಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾದ ಜಾಹೀರಾತು, ಸೂಚನೆಗಳನ್ನು ಪ್ರದರ್ಶಿಸುವ ಎಲ್ಲಾ ಫಲಕಗಳಲ್ಲಿ ವಿಷಯಗಳ ನಿಗದಿತ ಶೇಕಡವಾರು ಪ್ರಮಾಣವು ಕನ್ನಡ ಭಾಷೆಯಲ್ಲಿರಬೇಕು ಎಂದು ಹೇಳಿದರು.

ತಪ್ಪಿದ್ದಲ್ಲಿ ಯಾವುದೇ ಕೈಗಾರಿಕೆ, ಅಂಗಡಿ, ಫಾರ್ಮ್ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕ ಅಥವಾ ಉಸ್ತುವಾರಿ ವ್ಯಕ್ತಿಗಳು ಕನ್ನಡ ಭಾಷೆ ಅನುಷ್ಠಾನಗೊಳಿಸುವಲ್ಲಿ ವಿಫಲರಾದರೆ ಸಂಬಂಧಪಟ್ಟ ಸಂಸ್ಥೆ ಹಾಗೂ ವ್ಯಕ್ತಿಯ ವಿರುದ್ಧ ನಿಯಮಾನುಸಾರ ದಂಡವನ್ನು ವಿಧಿಸಲಾಗುವುದು ಅಥವಾ ಲೈಸೆನ್ಸ್ ಅನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಜಿ. ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಗೋಪಾಲಕೃಷ್ಣ ಬಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರಮೇಶ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್, ನಗರಸಭೆ ಪೌರಾಯುಕ್ತ ಕೃಷ್ಣಮೂರ್ತಿ ಮುಂತಾದ ಅಧಿಕಾರಿಗಳು ಹಾಜರಿದ್ದರು. 

Leave A Reply

Your email address will not be published.

error: Content is protected !!