ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಪ್ರಭಾವ ಬೀರಲಿವೆ ; ಹೆಚ್.ಬಿ.ಚಿದಂಬರ

0 448

ಹೊಸನಗರ ; ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಆಗಿರುವ ಪ್ರಗತಿಯು ಈ ಬಾರಿಯ ಲೋಕಸಭಾ ಚುನಾವಣೆಗಳ ಮೇಲೆ ಪ್ರಭಾವ ಬೀರಲಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಬಿ.ಚಿದಂಬರ ಹೇಳಿದರು.

ಅವರು ಇಲ್ಲಿನ ಕಾಂಗ್ರೆಸ್ ಕಛೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಸಮಿತಿಗಳು ಅಸ್ತಿತ್ವಕ್ಕೆ ಬಂದಿವೆ. ಯೋಜನೆಗಳ ಪ್ರಯೋಜನ ದೊರೆಯದವರಿಗೆ ಉಂಟಾಗಿರುವ ತಾಂತ್ರಿಕ ಸಮಸ್ಯೆಗಳನ್ನು ಬಗೆ ಹರಿಸುವ ನಿಟ್ಟಿನಲ್ಲಿ ಸಮಿತಿಯ ಪದಾಧಿಕಾರಿಗಳು ಗ್ರಾಮ ಪಟ್ಟದಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಬಳಿಕ ರಾಜ್ಯ ವ್ಯಾಪಿ ಈವರೆಗೆ ಶೇ.84 ರಷ್ಟು ಸಾಧನೆ ಮಾಡಲಾಗಿದೆ. ಯೋಜನೆಗಳ ಫಲ ಕಟ್ಟಕಡೆಯ ವ್ಯಕ್ತಿಯವರೆಗೂ ತಲುಪಬೇಕೆನ್ನುವುದು ಸರಕಾರದ ಆಶಯ ಎಂದು ಅವರು ತಿಳಿಸಿದರು.

ಕಾಂಗ್ರೆಸ್ ಪಕ್ಷ ಬಡವರ ಪರವಾಗಿದ್ದು, ತಳಹಂತದಲ್ಲಿ ಯೋಜನೆಗಳ ಅನುಷ್ಠಾನಕ್ಕೆ ಪ್ರಯತ್ತಿಸುತ್ತದೆ. ಇದು ಬಿಜೆಪಿ ಸರಕಾರದ ಕಾರ್ಯವೈಖರಿಯಲ್ಲಿ ಕಂಡು ಬರುವುದಿಲ್ಲ. ಕಪ್ಪು ಹಣ ಮರಳಿ ತರುವುದು, ಉದ್ಯೋಗ ಸೃಷ್ಠಿ, ರೈತರ ಆದಾಯ ದುಪ್ಪಟ್ಟುಗೊಳಿಸುವ ಆಶ್ವಾಸನೆಗಳನ್ನು ಈಡೇರಿಸುವಲ್ಲಿ ಹಾಗೂ ದಿನಬಳಕೆ ವಸ್ತುಗಳ ಬೆಲೆಏರಿಕೆಯಂತ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ನರೇಗಾ ಯೋಜನೆಗೆ ಅನುಷ್ಠಾನ ಕಡಿತಗೊಳಿಸುವ ಮೂಲಕ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹಿನ್ನೆಡೆಯಾಗಿದೆ. ಜಾತಿ, ಧರ್ಮದ ನಡುವೆ ಸಂಘರ್ಷ ಹುಟ್ಟು ಹಾಕಿ ಮತ ಪಡೆದು ಅಧಿಕಾರಕ್ಕೇರುವ ಬಿಜೆಪಿಯ ನೀತಿ ಈ ಬಾರಿ ಕೆಲಸ ಮಾಡುವುದಿಲ್ಲ ಎಂದು ಅವರು ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕಾಂಗ್ರೆಸ್ ಪಕ್ಷಕ್ಕೆ ಮತಗಳಾಗಿ ಪರಿವರ್ತನೆ ಆಗಲಿವೆ. ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಪ್ರತಿ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಪ್ರಚಾರ ನಡೆಸಲಿದ್ದಾರೆ. ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಟ್ಟು ಮತಯಾಚನೆ ಮಾಡಲಿದ್ದೇವೆ. ರಾಜ್ಯ ಸರ್ಕಾರದ ಯೋಜನೆಗಳು ಬಡವರ ಪರವಾಗಿದ್ದು, ಜನಸಾಮಾನ್ಯರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿರುವುದು, ಮುಂಬರುವ ಚುನಾವಣೆಗೆ ಪಕ್ಷಕ್ಕೆ ಅನುಕೂಲಕರ ವಾತಾವರಣ ನಿರ್ಮಾಣವಾಗಿದೆ ಎಂದರು.

ಗೋಷ್ಠಿಯಲ್ಲಿ ಬ್ಲಾಕ್‌ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸದಾಶಿವ ಶ್ರೇಷ್ಟಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಪದಾಧಿಕಾರಿಗಳಾದ ರವೀಂದ್ರ ಕೆರೆಹಳ್ಳಿ, ರಮೇಶ್, ಹುಲುಗಾರು ಕೃಷ್ಣಮೂರ್ತಿ, ಪೂರ್ಣಿಮಾ, ಎಂ.ಪಿ ಲೋಹಿತ್, ಸುಮಂಗಲ ದೇವರಾಜ್‌, ನಾಸೀರ್, ಉಬೇದುಲ್ಲಾ ಮತ್ತಿತರರು ಇದ್ದರು.

Leave A Reply

Your email address will not be published.

error: Content is protected !!