ರಿಪ್ಪನ್‌ಪೇಟೆ: ನಾಡಿನ ಭಾಷೆ, ಸಾಹಿತ್ಯ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವ ಹೊಣೆಗಾರಿಕೆ ಪ್ರತಿಯೊಬ್ಬ ಕನ್ನಡಿಗನ ಮೇಲಿದೆ. ಮಾತೃಭಾಷೆಯ ರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಇಲ್ಲಿನ ಕಸ್ತೂರಿ ಕನ್ನಡ ಸಂಘದ 6ನೇ ವರ್ಷದ ವಾರ್ಷಿಕೋತ್ಸವ ಹಾಗೂ 71ನೇ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಹಿಂದೆ ನಾನು ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದ ಸಂದರ್ಭದಲ್ಲಿ, ಕೆಲವರು ನನ್ನನ್ನು ರಾಜ್ಯೋತ್ಸವ ವೇದಿಕೆಯಿಂದ ದೂರವಿಡಲು ಯತ್ನಿಸಿದ್ದರು. ಆದರೆ, ನನ್ನ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಛಲಬಿಡದೆ ಆಹ್ವಾನಿಸಿ, ಈ ಸಂಘಟನೆಯ ಮೂಲಕ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸುವಂತೆ ಮಾಡಿದರು. ಅಂದಿನಿಂದ ಇಂದಿನವರೆಗೂ ಕಸ್ತೂರಿ ಕನ್ನಡ ಸಂಘವು ನಾಡಹಬ್ಬವನ್ನು ಜನಮಾನಸದಲ್ಲಿ ಅಚ್ಚಳಿಯದೆ ಉಳಿಯುವಂತೆ ಸಂಘಟಿಸುತ್ತಾ ಬಂದಿದೆ,” ಎಂದು ಸ್ಮರಿಸಿದರು.
ಇದೇ ವೇಳೆ ಬರ ಪರಿಸ್ಥಿತಿಯ ಕುರಿತು ಮಾತನಾಡಿದ ಅವರು, “ಮಳೆ ಕೊರತೆಯಿಂದ ಎದುರಾಗಿರುವ ಬರಗಾಲವನ್ನು ಸಮರ್ಥವಾಗಿ ನಿಭಾಯಿಸಲು ರಾಜ್ಯ ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ವಹಿಸಿದೆ. ಕುಡಿಯುವ ನೀರಿಗೆ ಕೊರತೆಯಾಗದಂತೆ ಹಾಗೂ ಬರ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲೇ ಸೂಕ್ತ ಸಿದ್ಧತೆ ಮಾಡಿಕೊಳ್ಳಲಾಗಿದೆ,” ಎಂದು ಭರವಸೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಕೆ. ದೇವರಾಜ್ ವಹಿಸಿದ್ದರು.
ವೇದಿಕೆಯಲ್ಲಿ ಪ್ರಮುಖರಾದ ಜಿ.ಪಂ. ಮಾಜಿ ಸದಸ್ಯ ರಾಮಚಂದ್ರ ಬಂಡಿ, ಜೆಡಿಎಸ್ ತಾಲೂಕು ಅಧ್ಯಕ್ಷ ಎನ್. ವರ್ತೇಶ್, ಗ್ರಾ.ಪಂ. ಮಾಜಿ ಸದಸ್ಯ ಆಸಿಫ್‌ಭಾಷಾ, ಎನ್. ಚಂದ್ರೇಶ್, ಆರ್.ಎ. ಚಾಬುಸಾಬ್, ಆರ್.ಎಚ್. ಶ್ರೀನಿವಾಸ್ ಆಚಾರ್, ನರಸಿಂಹ ಸೇರಿದಂತೆ ಹಲವು ಗಣ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು.

