ಶಿವಮೊಗ್ಗ :2025ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಹಾಗೂ ಶಾಂತಿಯುತವಾಗಿ ಆಚರಿಸುವ ಕುರಿತು ಸರ್ಕಾರ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸೂಕ್ತ ನಿರ್ದೇಶನಗಳು ಹೊರಡಿಸಲ್ಪಟ್ಟಿವೆ. ಇದರಂತೆ ಜಿಲ್ಲಾ ಆಡಳಿತವು ಸಾರ್ವಜನಿಕರಿಗೆ ಹಲವು ಮುನ್ನೆಚ್ಚರಿಕಾ ಸೂಚನೆಗಳನ್ನು ನೀಡಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.
ಪ್ಲಾಸ್ಟರ್ ಆಫ್ ಪ್ಯಾರೀಸ್ನಿಂದ ತಯಾರಿಸಿದ ವಿಗ್ರಹಗಳ ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ. ಅನಧಿಕೃತವಾಗಿ ತಯಾರಿಕೆ ಅಥವಾ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅದೇ ರೀತಿ ಪ್ಲಾಸ್ಟರ್ ಆಫ್ ಪ್ಯಾರೀಸ್ ಅಥವಾ ಕೆಮಿಕಲ್ ಬಣ್ಣ ಹಚ್ಚಿರುವ ವಿಗ್ರಹಗಳನ್ನು ನದಿ, ಕಾಲುವೆ, ಬಾವಿ ಮುಂತಾದ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ತಡೆಯಲಾಗಿದೆ. ಬದಲಿಗೆ ಮಣ್ಣು, ನೈಸರ್ಗಿಕ ವಸ್ತುಗಳು ಹಾಗೂ ಹಸಿರು ಬಣ್ಣಗಳಿಂದ ತಯಾರಿಸಿದ ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ವೈಜ್ಞಾನಿಕ ವಿಧಾನದಲ್ಲಿ ವಿಸರ್ಜನೆ ಮಾಡುವಂತೆ ಸೂಚಿಸಲಾಗಿದೆ.
ವಿಸರ್ಜನೆ ಸಂದರ್ಭದಲ್ಲಿ ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ ಮುಂತಾದ ಹಸಿಕಸವನ್ನು ಪ್ರತ್ಯೇಕವಾಗಿ ವಿಲೇವಾರಿ ಮಾಡಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ವಿಗ್ರಹ ಪ್ರತಿಷ್ಠಾಪನೆಗೆ ಸ್ಥಳೀಯ ಸಂಸ್ಥೆ ಮತ್ತು ಪೊಲೀಸ್ ಇಲಾಖೆಯಿಂದ ಅನುಮತಿ ಕಡ್ಡಾಯ. ಏಕಬಳಕೆ ಪ್ಲಾಸ್ಟಿಕ್ಗಳನ್ನು ನಿಷೇಧಿಸಲಾಗಿದ್ದು, ರಾತ್ರಿ 10ರಿಂದ ಬೆಳಿಗ್ಗೆ 6ರವರೆಗೆ ಧ್ವನಿವರ್ಧಕ ಬಳಕೆಗೆ ಅನುಮತಿ ಇರುವುದಿಲ್ಲ. ಹಸಿರು ಪಟಾಕಿಗಳ ಹೊರತಾಗಿ ಬೇರೆ ಯಾವುದೇ ಪಟಾಕಿಯನ್ನು ಸುಡುವುದನ್ನೂ ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಗಣೇಶ ಮೂರ್ತಿ ವಿಸರ್ಜನೆ ವೇಳೆ ತೆಪ್ಪ ಬಳಸುವಂತಾದರೆ ಕೇವಲ 2-3 ಜನರಿಗೆ ಮಾತ್ರ ಅವಕಾಶವಿದ್ದು, ಲೈಫ್ ಜಾಕೆಟ್ ಧರಿಸುವುದು ಕಡ್ಡಾಯ. ಜೊತೆಗೆ ನುರಿತ ಈಜುಗಾರರ ಸಮ್ಮುಖದಲ್ಲಿ ಮಾತ್ರ ವಿಸರ್ಜನೆ ನಡೆಯಬೇಕು.
ಇದೇ ವೇಳೆ, ಆಗಸ್ಟ್ 27ರಿಂದ ಸೆಪ್ಟೆಂಬರ್ 15ರವರೆಗೆ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, DJ ಸಿಸ್ಟಂ ಬಳಕೆ, ಕಲರ್ ಪೇಪರ್ ಬ್ಲಾಸ್ಟಿಂಗ್ ಹಾಗೂ ಸಿಡಿಮದ್ದು ಸಿಡಿಸುವ ಕ್ರಿಯೆಯನ್ನು ನಿಷೇಧಿಸುವ ಆದೇಶವನ್ನು ಜಿಲ್ಲಾಧಿಕಾರಿ ಹೊರಡಿಸಿದ್ದಾರೆ.
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.