ತೀರ್ಥಹಳ್ಳಿ : ವಿದ್ಯಾರ್ಥಿಗಳು ಉತ್ತಮ ಆರೋಗ್ಯ ಹೊಂದಲು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ರಾಜ್ಯ ಎಸ್ಸಿ, ಎಸ್ಟಿ ಹಾಗೂ ಅಲೆಮಾರಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ತಿಳಿಸಿದರು.
ಇತ್ತೀಚಿಗೆ ತಾಲೂಕಿನ ಆರಗ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿರೇಗದ್ದೆ ಸರ್ಕಾರಿ ಶಾಲಾ ಆವರಣದಲ್ಲಿ ಶಿಕ್ಷಣ ಇಲಾಖೆ ಹಾಗು ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ನಡೆದ 2025-26ನೇ ಸಾಲಿನ 14 ವರ್ಷದೊಳಗಿನ ತಾಲೂಕು ಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಜ್ಯೋತಿ ಬೆಳಗಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ತಮ್ಮ ಶಾಲಾ ದಿನಗಳನ್ನು ಮೆಲುಕು ಹಾಕಿದ ಅವರು, ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸುವ ಜೊತೆಗೆ ದೈಹಿಕ ಆರೋಗ್ಯ ಹೊಂದುವುದು ಸಹ ಅತಿ ಮುಖ್ಯ. ಇದು ಮಾನಸಿಕ ಬೆಳವಣಿಗೆಗೆ ಸಹಕಾರಿ ಆಗಿದೆ. ಕ್ರೀಡಾಕೂಟದಲ್ಲಿ ಗೆಲುವು ಸೋಲು ಸಹಜ, ಆದರೆ, ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ ಎಂದರು.
ಮುಖ್ಯ ಶಿಕ್ಷಕಿ ಲೀಲಾವತಿ ಪ್ರಾಸ್ತಾವಿಕ ಮಾತನಾಡಿ, ದಾನಿಗಳು, ಪೋಷಕರ ಸಹಕಾರಿದಿಂದ ಶಾಲೆ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಪ್ರಸ್ತುತ 130 ವಿದ್ಯಾರ್ಥಿಗಳು ವ್ಯಾಸಂಗ ನಿರತರಾಗಿದ್ದು, ಶಾಲೆಯು ಸುಸಜ್ಜಿತ ಗ್ರಂಥಾಲಯದ ಜೊತೆಗೆ ಹೆಣ್ಣು ಮಕ್ಕಳ ಸ್ವಯಂ ರಕ್ಷಣೆಗೆ ಕರಾಟೆ ತರಬೇತಿ, ಸಂಗೀತ ಶಿಕ್ಷಣ ನೀಡುತ್ತಿದ್ದು ಈ ಭಾಗದ ಉತ್ತಮ ಶಾಲೆ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದರು.
ಗ್ರಾಮ ಪಂಚಾಯತಿ ಅಧ್ಯಕ್ಷ ಎನ್. ಚಂದ್ರಶೇಖರ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಜಿ.ಉಮೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ (ಅಭಿವೃದ್ಧಿ) ಹೆಚ್.ಆರ್. ಕೃಷ್ಣಮೂರ್ತಿ, ಬಿಇಒ ವೈ.ಗಣೇಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಪ್ರವೀಣ್ ಕುಮಾರ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ, ಇಸಿಓ ಸೇರಿದಂತೆ ಗ್ರಾಮ ಪಂಚಾಯತಿ ಸದಸ್ಯರು ಉಪಸ್ಥಿತರಿದ್ದರು. ಶಿಕ್ಷಕ ಕೆ.ಆರ್. ಮಂಜುನಾಥ ಸ್ವಾಗತಿಸಿ, ಶಿಕ್ಷಕ ಜಿ.ಕೆ.ಶಿವಮೂರ್ತಿ ನಿರೂಪಿಸಿದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.