ಅಮೃತ ಕೆಪಿಎಸ್ ವಾರ್ಷಿಕೋತ್ಸವ  | ಖಾಸಗಿ ಶಾಲೆಗಳ ವ್ಯಾಮೋಹ ಬಿಡಿ ಸರ್ಕಾರಿ ಶಾಲೆಗಳಿಗೆ ಆದ್ಯತೆ ನೀಡಿ ; ಶಾಸಕ ಆರಗ ಜ್ಞಾನೇಂದ್ರ

Written by Mahesha Hindlemane

Published on:

ರಿಪ್ಪನ್‌ಪೇಟೆ ; ಖಾಸಗಿ ಶಾಲೆಗಳ ವ್ಯಾಮೋಹ ಬಿಡಿ ಸರ್ಕಾರಿ ಶಾಲೆಗಳಿಗೆ ಆದ್ಯತೆ ನೀಡಿ,
ಭಾರತದಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ ಜಗತ್ತಿನಾದ್ಯಂತ ಅಪಾರ ಗೌರವವಿದೆ. ಅದರಲ್ಲೂ ಕರ್ನಾಟಕದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಇಂದಿನ ದಿನಗಳಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸಲಾಗುತ್ತಿದೆ ಎಂದು ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಅವರು ಗರ್ತಿಕೆರೆ ಗ್ರಾಮದ ಅಮೃತ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಹೊಸನಗರ, ಶಾಲಾ ಶಿಕ್ಷಣ ಇಲಾಖೆ, ಗ್ರಾಮ ಪಂಚಾಯತ್ ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಮೃತ ಪಬ್ಲಿಕ್ ಸ್ಕೂಲ್ ನೂತನ ಕಟ್ಟಡ ಉದ್ಘಾಟನೆ ಹಾಗೂ 2025-26ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇಂದು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಂದ ಹಿಡಿದು ಉಪನ್ಯಾಸಕರವರೆಗೆ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಬ್ಬರು ಅತ್ಯುನ್ನತ ಪದವಿಯನ್ನು ಪಡೆದು, ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ಬರೆದು ಶಿಕ್ಷಕರಾಗಿ ಉಪನ್ಯಾಸಕರಾಗಿ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ, ಸ್ವಾತಂತ್ರ್ಯ ದೊರಕಿದ ಆರಂಭಿಕ ದಿನಗಳಲ್ಲಿ ದೇಶದಲ್ಲಿ ಹೆಬ್ಬೆಟ್ಟು ಒತ್ತುವವರ ಸಂಖ್ಯೆ ಹೆಚ್ಚಾಗಿತ್ತು. ಆದರೆ ಕಾಲ ಬದಲಾಗುತ್ತಿದ್ದಂತೆ ಇಂದು ಶೇ. 88 ಕ್ಕಿಂತ ಹೆಚ್ಚು ಜನರು ವಿದ್ಯಾವಂತರಾಗಿದ್ದಾರೆ. ಶಿಕ್ಷಣದ ಮಹತ್ವವನ್ನು ಅರಿತ ಪೋಷಕರು ಗುಣಮಟ್ಟದ ಶಿಕ್ಷಣ ನೀಡುವ ಸರ್ಕಾರಿ ಶಾಲೆಗಳತ್ತ ಹೆಚ್ಚಿನ ಗಮನ ಹರಿಸುತ್ತಿದ್ದಾರೆ. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಾಲಾ ಶಿಕ್ಷಕರಿಗೂ ಪೋಷಕರಷ್ಟೇ ಕಾಳಜಿ ಇದೆ. ಆದ್ದರಿಂದ ಓದಿನ ಜೊತೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಮಕ್ಕಳಿಗೆ ಅವಕಾಶ ಕಲ್ಪಿಸಬೇಕು ಎಂದು ಅವರು ಸಲಹೆ ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಧಾನಪರಿಷತ್ ಸದಸ್ಯೆ ಬಿಲ್ಕೀಶ್ ಬಾನು ಮಾತನಾಡಿ, ಸರ್ಕಾರಿ ಶಾಲೆಗಳು ಇಂದು ಮೂಲಸೌಕರ್ಯ, ಶಿಕ್ಷಕರ ಗುಣಮಟ್ಟ ಮತ್ತು ಪಠ್ಯೇತರ ಚಟುವಟಿಕೆಗಳ ಮೂಲಕ ಖಾಸಗಿ ಶಾಲೆಗಳ ಮಟ್ಟಕ್ಕೆ ತಲುಪುತ್ತಿವೆ. ಗ್ರಾಮೀಣ ಪ್ರದೇಶದ ಮಕ್ಕಳಿಗೂ ಉತ್ತಮ ಶಿಕ್ಷಣ ದೊರಕಬೇಕು ಎಂಬ ಉದ್ದೇಶದಿಂದ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಪಾಲಕರು ಸರಕಾರಿ ಶಿಕ್ಷಣ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಇನ್ನಷ್ಟು ಹೆಚ್ಚಿಸಬೇಕು ಎಂದರು.

ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡ ಮಾತನಾಡಿ, ಮಲೆನಾಡು ಭಾಗದ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸರ್ಕಾರ ನಿರಂತರ ಅನುದಾನ ಒದಗಿಸುತ್ತಿದೆ. ನೂತನ ಶಾಲಾ ಕಟ್ಟಡಗಳು ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ಸೃಷ್ಟಿಸುತ್ತವೆ. ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಭದ್ರವಾದ ಅಡಿಪಾಯವಾಗಿದ್ದು, ಗ್ರಾಮೀಣ ಮಕ್ಕಳನ್ನು ಸ್ಪರ್ಧಾತ್ಮಕ ಜಗತ್ತಿಗೆ ತಯಾರಿಸುವ ಹೊಣೆ ಎಲ್ಲರ ಮೇಲಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಬಂಡಿ ರಾಮಚಂದ್ರ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಸರ್ಕಾರಿ-ಸಹಕಾರಿ ಮನೋಭಾವದಿಂದ ನಡೆದ ಕಾರ್ಯಗಳು ಶ್ಲಾಘನೀಯವೆಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಗಣೇಶ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಗುಣಮಟ್ಟ ಹೆಚ್ಚಿಸಲು ಶಿಕ್ಷಕರು ಶ್ರಮಿಸುತ್ತಿದ್ದು, ಪೋಷಕರ ಸಹಕಾರ ಅಗತ್ಯವೆಂದು ತಿಳಿಸಿದರು.

ಅಮೃತ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸಚಿನ್ ಗೌಡ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಇಂತಹ ಶಿಕ್ಷಣ ಸಂಸ್ಥೆಗಳು ಬೆಳೆದು ಬರಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಮಹಮ್ಮದ್ ನಜ್ಹತ್ ಉಲ್ಲಾ ವಹಿಸಿದ್ದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಂಚಾಲಕರು ಹಾಗೂ ಹಿರಿಯ ಉಪನ್ಯಾಸಕ ಹಾಲಪ್ಪ ಸಂಕೂರ್ ಸ್ವಾಗತಿಸಿದರು. ಫ್ರಾನ್ಸಿಸ್ ಬೆಂಜಮಿನ್ ಕಾರ್ಯಕ್ರಮವನ್ನು ನಿರೂಪಿಸಿ ಸಂಯೋಜಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯ್ತಿ ಜನಪ್ರತಿನಿಧಿಗಳು, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸೋಮಶೇಖರ್, ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಬಷೀರ್ ಅಹಮದ್, ಹೆಚ್‌.ಎಸ್ ಅನಂತಮೂರ್ತಿ ಸೇರಿದಂತೆ ಎಸ್.ಡಿ.ಎಂ.ಸಿ ಹಾಗೂ ಸಿಡಿಸಿ ಸದಸ್ಯರು, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Leave a Comment