ಹೊಸನಗರ ; ತಾಲೂಕಿನ ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಿನಗೊಳ್ಳಿಯ ಶ್ರೀ ಮಾರಿಕಾಂಬಾ ದೇವಸ್ಥಾನದ 3ನೇ ವರ್ಷದ ವರ್ಧಂತ್ಯೋತ್ಸವವು ಅತ್ಯಂತ ಸಂಭ್ರಮ, ಸಡಗರ ಹಾಗೂ ಭಕ್ತಿಭಾವದಿಂದ ನಡೆಯಿತು.
ವರ್ಧಂತ್ಯೋತ್ಸವದ ಅಂಗವಾಗಿ ಬೆಳಿಗ್ಗೆಯಿಂದಲೇ ಶ್ರೀದೇವಿಗೆ ವಿಶೇಷ ಪೂಜೆ, ಹೋಮ-ಹವನ ಹಾಗೂ ಧಾರ್ಮಿಕ ವಿಧಿವಿಧಾನಗಳು ಜರುಗಿತು. ಮಧ್ಯಾಹ್ನ ನೂರಾರು ಭಕ್ತಾದಿಗಳಿಗೆ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು.
ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಗ್ರಾಮೀಣ ಭಾಗದ ದೇವಸ್ಥಾನಗಳು ಕೇವಲ ಪೂಜಾ ಕೇಂದ್ರಗಳಲ್ಲ. ಅವು ಸಮಾಜವನ್ನು ಒಗ್ಗೂಡಿಸುವ ಕೊಂಡಿಗಳಾಗಿವೆ. ಧಾರ್ಮಿಕ ಟ್ರಸ್ಟ್ಗಳ ಮೂಲಕ ಇಂತಹ ಸಾಮಾಜಿಕ ಕಳಕಳಿಯ ಕೆಲಸಗಳು ನಡೆಯುತ್ತಿರುವುದು ಶ್ಲಾಘನೀಯ. ದೇವಿಯ ಸನ್ನಿಧಿಯಲ್ಲಿ ನಾನು ಮುಂದಿನ ದಿನಗಳಲ್ಲಿ ಸಚಿವ ಸ್ಥಾನಕ್ಕಾಗಿ ಪ್ರಾರ್ಥಿಸಿದ್ದೇನೆ. ಇಲ್ಲಿ ನಿರ್ಮಾಣವಾಗಿರುವ ಭವ್ಯ ರಂಗಮಂದಿರವು ಊರಿನ ಅಭಿವೃದ್ಧಿಯ ಸಂಕೇತವಾಗಿದೆ. ಭಕ್ತಿಯೂ ನಂಬಿಕೆ ಮತ್ತು ವಿಶ್ವಾಸದ ಮೇಲೆ ಇರಬೇಕೇ ಹೊರತು ಮೂಢನಂಬಿಕೆಯಿಂದ ಕೂಡಿರಬಾರದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ದೇವಸ್ಥಾನದ ಅಧ್ಯಕ್ಷ, ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರವೀಣ್ ಜಿ.ಎನ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇವಸ್ಥಾನದ ಜೀರ್ಣೋದ್ದಾರ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿದ ಭಕ್ತರ ಸೇವೆ ಶ್ಲಾಘನೀಯ ಎಂದರು.
ವೇದಿಕೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ ಗೌಡ , ಮುಂಬಾರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎನ್. ಕುಮಾರ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್. ಚಿದಂಬರ, ಎಂ. ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ ಸದಸ್ಯರಾದ ಮಹೇಂದ್ರ ಬಿ.ಎನ್, ದಿವ್ಯ, ಶಶಿಕಲಾ ಅಣ್ಣಪ್ಪ ಸೇರಿದಂತೆ ಊರಿನ ಅನೇಕ ಗಣ್ಯರು ಹಾಜರಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





