ಹೊಸನಗರ ; ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ರಾಷ್ಟ್ರವ್ಯಾಪಿ 23 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದರ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು ಎಂದು ಕಾಂಗ್ರೆಸ್ ಪಕ್ಷದ ಕಾರ‍್ಯಕರ್ತರು ಆಗ್ರಹಿಸಿದ್ದಾರೆ.

ಇಲ್ಲಿನ ತಾಲೂಕು ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ನಂತರ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ, ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯುವಲ್ಲಿ ಕೇಂದ್ರ ವಿಫಲವಾಗಿದೆ. ಇದನ್ನು ಪ್ರಶ್ನಿಸಿದ ವಿದ್ಯಾರ್ಥಿಗಳ ಮೇಲೆ ದೆಹಲಿಯಲ್ಲಿ ಮನಸೋ ಇಚ್ಚೆ ಹಲ್ಲೆ ನಡೆಸಲಾಗಿದೆ. ಲೋಕಭವನ ಚಲೋ ಕೈಗೊಂಡಿದ್ದ ಕಾಂಗ್ರೆಸ್ ಕಾರ‍್ಯಕರ್ತರ ಮೇಲೆ ಲಾಠಿ ಪ್ರಹಾರ ನಡೆಸಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದು ಕಪ್ಪು ಚುಕ್ಕೆಯಾಗಿದೆ. ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಸಹ ಬಂಧಿಸಿ ಹಲ್ಲೆ ನಡೆಸಲಾಗಿದೆ. ವಿದ್ಯಾರ್ಥಿಗಳು ಯುವ ಜನತೆಯ ಅಹವಾಲನ್ನು ಆಲಿಸದ ಬಿಜೆಪಿ ಸರ್ಕಾರ ತೊಲಗಬೇಕಿದೆ. ಯುವಜನತೆಯ ಧ್ವನಿ ಇನ್ನಷ್ಟು ಗಟ್ಟಿಯಾಗಬೇಕಿದೆ. ಬಿಜೆಪಿ ಸರ್ಕಾರದ ವೈಫಲ್ಯ ಹಾಗೂ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ತಕ್ಕ ಬೆಲೆ ತೆರುವ ದಿನ ಸನ್ನಿಹಿತವಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಮುಖರಾದ ಸುಮಾ ಸುಬ್ರಮಣ್ಯ, , ಎಚ್.ಬಿ.ಚಿದಂಬರ, ಡಿ.ಎಂ.ಸದಾಶಿವ, ಎಂ.ಪಿ.ಸುರೇಶ್, ಬಂಡಿ ರಾಮಚಂದ್ರ, ಈಶ್ವರಪ್ಪಗೌಡ, ಡಿ.ಆರ್.ವಿನಯಕುಮಾರ್, ವಿಶ್ವನಾಥ್ ನಾಗೋಡಿ, ಆಸೀಫ್, ನಾಗೇಂದ್ರ ಜೋಗಿ, ಸಾಕಮ್ಮ ಮನೋಹರ, ದೀಪಿಕಾ, ರಾಧಿಕಾ ಶೆಟ್ಟಿ, ಜಯನಗರ ಗುರು, ಸೇರಿದಂತೆ ನೂರಾರು ಕಾರ‍್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





