ಹೊಸನಗರ ; ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್ ರವರು ಕರೆ ನೀಡಿದ ಮೇರೆಗೆ ಹೊಸನಗರ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಫೆ. 3ರಂದು ಅಂಗನವಾಡಿಗಳನ್ನು ಬಂದ್ ಮಾಡಿ ರಾಜ್ಯ ಫೆಡರೇಷನ್ ಅವರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಅಹೋರಾತ್ರಿ ನಡೆಸುತ್ತಿರುವ ಧರಣಿ ಮುಷ್ಕರದಲ್ಲಿ ಪಾಲ್ಗೊಳ್ಳಲು ಫೆ.2ರಂದು ರಾಜಧಾನಿಗೆ ತೆರಳುತ್ತಿದ್ದಾರೆ.
ಈ ಸಂಬಂಧ ಅಂಗನವಾಡಿ ಕಾರ್ಯಕರ್ತೆಯರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ತೆರಳಿ ತಮ್ಮ ಬೇಡಿಕೆಗಳ ಬಗ್ಗೆ ಹಾಗೂ ಫೆ.3ರಿಂದ ಅಂಗನವಾಡಿ ಬಂದ್ ಮಾಡುವ ಬಗ್ಗೆ ಮನವಿ ಸಲ್ಲಿಸಿದರು.
ಮಹಿಳೆಯರು, ಮಕ್ಕಳು, ಗರ್ಭಿಣಿಯರು, ಬಾಣಂತಿಯರು ಎದುರಿಸುತ್ತಿರುವ ಅಪೌಷ್ಟಿಕತೆ, ರಕ್ತ ಹೀನತೆ, ಆರೋಗ್ಯ ಸಮಸ್ಯೆಗಳನ್ನು ತೊಡೆದು ಹಾಕಲು 1975 ರಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯನ್ನು ಪ್ರಾರಂಭಿಸಲಾಗಿದ್ದು ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲು ಅಂಗನವಾಡಿ ಕಾರ್ಯಕರ್ತೆಯರು ಶ್ರಮ ಹಾಕುತ್ತಿದ್ದಾರೆ. ಆದರೆ ಇವರಿಗೆ ಯಾವುದೇ ಸೌಲಭ್ಯ ಕಲ್ಪಿಸಲಾಗಿಲ್ಲ ಎಂದು ಕಾರ್ಯಕರ್ತೆಯರು ನೋವನ್ನು ಈ ವೇಳೆ ತೋಡಿಕೊಂಡರು.
ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಅಧ್ಯಕ್ಷೆ ಶಶಿಕಲಾ ಎನ್.ಎಸ್, ಗೀತಾ, ದಿವ್ಯ, ಮಧು, ಸುಜಾತ, ಉಮಾ, ನೀಲಾವತಿ, ವೀಣಾ, ಸತ್ಯ, ನಾಗರತ್ನ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.