ಹೊಸನಗರ ; ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ರಸಮಂಜರಿ, ಕಾಗೋಡು ತಿಮ್ಮಪ್ಪಗೆ ಸನ್ಮಾನ

Written by malnadtimes.com

Published on:

ಹೊಸನಗರ ; ಜನಪ್ರಿಯ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಹುಟ್ಟು ಹಬ್ಬವನ್ನು ವೈಶಿಷ್ಠ ಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ ಹೇಳಿದರು.

WhatsApp Group Join Now
Telegram Group Join Now
Instagram Group Join Now

ಅವರು ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಹುಟ್ಟುಹಬ್ಬದ ಪ್ರಯುಕ್ತ ಫೆ. 22 ರಂದು ಇದೇ ಮೊದಲ ಬಾರಿ ಹೊಸನಗರ ಪಟ್ಟಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜನರೊಂದಿಗೆ ಬೆರೆಯುವ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಅಭಿಮಾನಿ ಬಳಗ ಎಲ್ಲಡೆ ಇದೆ. ಆದರೆ ಹೊಸನಗರ ಭಾಗದಲ್ಲಿ ಈ ಬಾರಿ ಕಾರ್ಯಕ್ರಮಗಳು ನಡೆಯಬೇಕು ಎನ್ನುವ ಆಶಯದಿಂದ ಹಮ್ಮಿಕೊಳ್ಳಲಾಗಿದೆ. ಅವರ ಅಭಿಮಾನಿ ಬಳಗ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಾರ್ಯಕ್ರಮವನ್ನು ಆಯೋಜಿಸಲಿದ್ದಾರೆ. ಕಾರ್ಯಕ್ರಮಕ್ಕೆ ತಗಲುವ ಸಂಪೂರ್ಣ ವೆಚ್ಚವನ್ನು ಕಾರ್ಯಕರ್ತರು ಹಾಗು ಅವರ ಅಭಿಮಾನಿಗಳೇ ಭರಿಸಲಿದ್ದಾರೆ ಎಂದರು.

ಹುಟ್ಟುಬ್ಬದ ಪ್ರಯುಕ್ತ ಅಂದು ಬೆಳಿಗ್ಗೆ 8 ಗಂಟೆಗೆ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಅಲ್ಲಿನ ಶಾಲಾ ಮಕ್ಕಳಿಗೆ ಸಿಹಿ ವಿತರಣೆ ಮಾಡಲಾಗುವುದು. ರಾತ್ರಿ 8 ಗಂಟೆಗೆ ಪಟ್ಟಣದ ನೆಹರೂ ಮೈದಾನದಲ್ಲಿ ನಡೆಯುವ ಸಭಾ ಕಾರ್ಯಕ್ರಮದ ಸಾನ್ನಿಧ್ಯವನ್ನು ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ ವಹಿಸಲಿದ್ದಾರೆ. ಶಾಸಕ ಗೋಪಾಲಕೃಷ್ಣ ಅವರು ಅಧ್ಯಕ್ಷತೆ ವಹಿಸಲಿದ್ದು, ಸಚಿವರಾದ ಮಧು ಬಂಗಾರಪ್ಪ, ಸಂತೋಷ್ ಲಾಡ್, ಮಾಜಿ ಸಚಿವ ಕಿಮ್ಮನೆ ರತ್ನಾಕರ, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ, ಶಾಸಕಿ ಬಲ್ಕೀಶ್ ಬಾನು ಮತ್ತಿತರರು ಉಪಸ್ಥಿತರಿರುವರು.

ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸ್ಥಳೀಯ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದರು.

ವೇದಿಕೆ ಕಾರ್ಯಕ್ರಮದ ಬಳಿಕ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿದೆ. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್‌ಜನ್ಯ, ಕಿರುತೆರೆ ನಿರೂಪಕಿ ಅನುಶ್ರೀ ಅವರ ತಂಡದಿಂದ ಮನರಂಜನಾ ಕಾರ್ಯಕ್ರಮ ನಡೆಸಿಕೊಡಲಿದೆ. ನಟರಾದ ರವಿಶಂಕರ್, ಯೋಗಿ, ವಿರಾಟ್ ಮೊದಲಾದ ಕಲಾವಿದರು ಭಾಗಿಯಾಗಲಿದ್ದಾರೆ. ರಾಮನಗರದ ಚಿರಾಗ್‌ ಅವರಿಂದ ಸ್ಟಂಟ್‌ಡ್ಯಾನ್ಸ್ ಹಾಗೂ ಸ್ಥಳೀಯ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ‍್ಯಕ್ರಮಗಳು ನಡೆಯಲಿವೆ. ಹೊಸನಗರ ಪಟ್ಟಣದಲ್ಲಿ ಇದೇ ಮೊದಲ ಬಾರಿಗೆ ಇಂತಹ ಬೃಹತ್‌ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಗೋಷ್ಠಿಯಲ್ಲಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಿ.ಜಿ.ಚಂದ್ರಮೌಳಿ, ಆಚರಣಾ ಸಮಿತಿ ಅಧ್ಯಕ್ಷ ಮಾಸ್ತಿಕಟ್ಟೆ ಸುಬ್ರಮಣ್ಯ, ಶಿಮುಲ್ ಅಧ್ಯಕ್ಷ ಗುರುಶಕ್ತಿ ವಿದ್ಯಾಧರ್, ಪ್ರಮುಖರಾದ ಎಂ.ಪಿ.ಸುರೇಶ, ಸಣ್ಣಕ್ಕಿ ಮಂಜುನಾಥ್, ಬಸವರಾಜ್ ಗಗ್ಗ, ಬಾವಿಕಟ್ಟೆ ಸತೀಶ್, ಸಂತೋಷ್ ಮತ್ತಿತರರು ಇದ್ದರು.

Leave a Comment