ಹೊಸನಗರ

ಹೊಸನಗರಕ್ಕೆ ಕೂಡಿಬಂತು ಕಾಲ: ಶೀಘ್ರವೇ ಕೆಎಸ್‌ಆರ್‌ಟಿಸಿ ಬಸ್ ಹಾಗೂ ವಿದ್ಯುತ್ ಸಮಸ್ಯೆಗೆ ಮುಕ್ತಿ – ಹೆಚ್.ಬಿ. ಚಿದಂಬರ

The long-standing demand of the people of Hosanagara—a KSRTC bus depot and a new bus stand—is set to become a reality very soon.

KSRTC Depot In Hosanagara

ಹೊಸನಗರ: ತಾಲೂಕಿನ ಜನರ ದಶಕಗಳ ಬೇಡಿಕೆಯಾದ ಕೆಎಸ್‌ಆರ್‌ಟಿಸಿ ಬಸ್ ಡಿಪೋ ಮತ್ತು ನೂತನ ಬಸ್ ನಿಲ್ದಾಣದ ಕನಸು ಅತಿ ಶೀಘ್ರದಲ್ಲೇ ನನಸಾಗಲಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಹೆಚ್.ಬಿ. ಚಿದಂಬರ ತಿಳಿಸಿದರು.

WhatsApp Group Join Now
Telegram Group Join Now
Instagram Group Join Now

ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಆಯೋಜಿಸಲಾಗಿದ್ದ ಗ್ರಾಮ ಪಂಚಾಯಿತಿ ಹಾಗೂ ವಾರ್ಡ್ ಮಟ್ಟದ ನೂತನ ಗ್ಯಾರಂಟಿ ಅನುಷ್ಠಾನ ಸಮಿತಿಗಳ ಪೂರ್ವಸಿದ್ಧತಾ ಮತ್ತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಸ್ ಡಿಪೋ ಮತ್ತು ವಿದ್ಯುತ್ ಕೇಂದ್ರಕ್ಕೆ ಸ್ಥಳ ಪರಿಶೀಲನೆ:

ಉದ್ದೇಶಿತ ಕೆಎಸ್‌ಆರ್‌ಟಿಸಿ ಬಸ್ ಡಿಪೋ ಮಂಜೂರಾತಿಗಾಗಿ ಈಗಾಗಲೇ ಸ್ಥಳ ಪರಿಶೀಲನೆ ನಡೆಸಲಾಗಿದ್ದು, ಸಂಬಂಧಪಟ್ಟ ಕಡತವನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಕಳುಹಿಸಲಾಗಿದೆ. ಇದರೊಂದಿಗೆ ತಾಲೂಕಿನ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು 110 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರ ನಿರ್ಮಾಣಕ್ಕೂ ಜಾಗ ಗುರುತಿಸಿ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಂದಿನ ಒಂದೆರಡು ತಿಂಗಳುಗಳಲ್ಲಿ ತಾಲೂಕಿನ ಸರ್ಕಾರಿ ಬಸ್ ಹಾಗೂ ವಿದ್ಯುತ್ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದು ಅವರು ಭರವಸೆ ನೀಡಿದರು.

Guarantee Schemes Hosanagara1

ಗ್ಯಾರಂಟಿ ಯೋಜನೆಗಳ ಯಶಸ್ವಿ ಜಾರಿ:

2023ರಲ್ಲಿ ಜಾರಿಗೆ ಬಂದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಶಿವಮೊಗ್ಗ ಜಿಲ್ಲೆ ಮುಂಚೂಣಿಯಲ್ಲಿದೆ.

ಹೊಸನಗರ ತಾಲೂಕಿನಲ್ಲಿ ಯೋಜನೆಗಳ ಪ್ರಗತಿಯ ವಿವರ ಹೀಗಿದೆ:

  • ಗೃಹಲಕ್ಷ್ಮಿ ಯೋಜನೆ: ಸುಮಾರು 26,000 ಮಹಿಳೆಯರು ಪ್ರತಿ ತಿಂಗಳು 2,000 ರೂ. ಆರ್ಥಿಕ ನೆರವು ಪಡೆಯುತ್ತಿದ್ದಾರೆ.
  • ಗೃಹಜ್ಯೋತಿ ಯೋಜನೆ: ತಾಲೂಕಿನ 31,000 ಕುಟುಂಬಗಳು ಉಚಿತ ವಿದ್ಯುತ್ ಸೌಲಭ್ಯ ಪಡೆದುಕೊಳ್ಳುತ್ತಿವೆ.
  • ಅನ್ನಭಾಗ್ಯ ಯೋಜನೆ: ಒಟ್ಟು 26,900 ಫಲಾನುಭವಿಗಳು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ.

ಮುಂದಿನ ದಿನಗಳಲ್ಲಿ ತಾಲೂಕಿನಾದ್ಯಂತ ಹೆಚ್ಚಿನ ಸರ್ಕಾರಿ ಬಸ್‌ಗಳು ಸಂಚರಿಸಲಿದ್ದು, ಮಹಿಳೆಯರ ಉಚಿತ ಪ್ರಯಾಣದ ‘ಶಕ್ತಿ ಯೋಜನೆ’ಯೂ ಇಲ್ಲಿ ಸಂಪೂರ್ಣ ಯಶಸ್ವಿಯಾಗಲಿದೆ ಎಂದು ಚಿದಂಬರ ಹೇಳಿದರು.

ತಾಂತ್ರಿಕ ಸಮಸ್ಯೆಗಳ ಪರಿಹಾರಕ್ಕೆ ಸ್ಥಳೀಯ ಸಮಿತಿಗಳ ಶ್ರಮ ಅಗತ್ಯ:

ಮಾಹಿತಿಯ ಕೊರತೆ ಅಥವಾ ಆಧಾರ್ ಲಿಂಕ್, ಬ್ಯಾಂಕ್ ಖಾತೆಯ ತೊಂದರೆಯಂತಹ ತಾಂತ್ರಿಕ ಕಾರಣಗಳಿಂದ ಯಾವುದೇ ಅರ್ಹ ಬಡ ಫಲಾನುಭವಿಗಳು ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗಬಾರದು. ಇಂತಹ ತೊಡಕುಗಳನ್ನು ಸ್ಥಳೀಯ ಮಟ್ಟದಲ್ಲೇ ಗುರುತಿಸಿ, ಅಧಿಕಾರಿಗಳ ಸಮನ್ವಯದೊಂದಿಗೆ ತಕ್ಷಣವೇ ಪರಿಹರಿಸುವ ಉದ್ದೇಶದಿಂದ ಗ್ರಾಮ ಮತ್ತು ವಾರ್ಡ್ ಮಟ್ಟದ ಸಮಿತಿಗಳನ್ನು ರಚಿಸಲಾಗಿದೆ.

Guarantee Schemes Hosanagara.

ನೂತನವಾಗಿ ಆಯ್ಕೆಯಾಗಿರುವ ಸಮಿತಿ ಸದಸ್ಯರು ಕೇವಲ ಹುದ್ದೆಗೆ ಸೀಮಿತವಾಗದೆ, ತಮ್ಮ ಗ್ರಾಮಗಳಲ್ಲಿ ಯೋಜನೆಗಳ ಸೌಲಭ್ಯ ಪಡೆಯಲು ಜನರಿಗೆ ಏನಾದರೂ ತೊಂದರೆಯಾದಲ್ಲಿ ತಕ್ಷಣವೇ ತಾಲೂಕು ಸಮಿತಿಯ ಗಮನಕ್ಕೆ ತರಬೇಕು. ಪ್ರಾಮಾಣಿಕತೆಯಿಂದ ಬಡವರ ಸೇವೆ ಮಾಡುವ ಮೂಲಕ ಸರ್ಕಾರದ ಯೋಜನೆಗಳನ್ನು ತಳಮಟ್ಟದ ಜನರಿಗೆ ತಲುಪಿಸಬೇಕು ಎಂದು ಕರೆ ನೀಡಿದರು.

ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನರೇಂದ್ರ ಕುಮಾರ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸುರೇಶ್, ಪ್ರಮುಖರಾದ ಪವನ್ ಕುಮಾರ್, ಮಂಜುನಾಥ್ ಹಾಗೂ ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

error: Content is protected !!