ರಿಪ್ಪನ್‌ಪೇಟೆ ; ಹೊಸನಗರ ವಿಧಾನಸಭಾ ಕ್ಷೇತ್ರದ ಸ್ಥಾನಮಾನ ಮರುಸ್ಥಾಪನೆಗೆ ರಾಜ್ಯಮಟ್ಟದಲ್ಲಿ ಬಲವಾದ ಒತ್ತಾಯ ಮೂಡಿದ್ದು, ಈ ಸಂಬಂಧ ನಡೆದ ಭಾರೀ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ರಾಜಕೀಯ ನಾಯಕರು, ಮಠಾಧೀಶರು ಹಾಗೂ ವಿವಿಧ ಧರ್ಮಗಳ ಮುಖಂಡರು ಏಕಮತದಿಂದ ಬೆಂಬಲ ವ್ಯಕ್ತಪಡಿಸಿದರು.

ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ಹೊಸನಗರ ಕ್ಷೇತ್ರ ಮರುಸ್ಥಾಪನೆಗೆ ತಮ್ಮ ಸಂಪೂರ್ಣ ಬೆಂಬಲವಿರುವುದಾಗಿ ಸ್ಪಷ್ಟಪಡಿಸಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಮಲೆನಾಡಿನ ಹಿಂದಿನ ವೈಭವ ಮರುಕಳಿಸುವ ನಿಟ್ಟಿನಲ್ಲಿ ಈ ಹೋರಾಟ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.
ಲೇಖನವನ್ನು ಮುಂದುವರಿಸಿ ಓದಿ
ಸಂಸತ್ತಿನಲ್ಲಿ ಕ್ಷೇತ್ರ ವಿಂಗಡಣೆ ಹಾಗೂ ಮಹಿಳಾ ಮೀಸಲಾತಿ ಕುರಿತ ವಿಶೇಷ ಅಧಿವೇಶನ ನಡೆಯಲಿದ್ದು, ಇದು ಹೊಸನಗರ ಕ್ಷೇತ್ರದ ಮರುಸ್ಥಾಪನೆಗೆ ಪೂರಕವಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಪಶ್ಚಿಮ ಘಟ್ಟಗಳ ಪರಿಸರದಲ್ಲಿ ಜನಸಂಖ್ಯೆ ಆಧಾರಿತ ಕ್ಷೇತ್ರ ವಿಂಗಡಣೆ ಮಾಡಿರುವುದು ಅವೈಜ್ಞಾನಿಕವಾಗಿದ್ದು, ಈ ಅನ್ಯಾಯದ ವಿರುದ್ಧ ಪಕ್ಷಾತೀತವಾಗಿ ನಡೆಯುತ್ತಿರುವ ಹೋರಾಟ ಯಶಸ್ವಿಯಾಗಲಿದೆ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಾತನಾಡಿ, ಸರ್ಕಾರದ ಮಟ್ಟದಲ್ಲಿ ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಿದರು. “ಹೊಸನಗರ ಕ್ಷೇತ್ರದ ಮರುಸ್ಥಾಪನೆಗಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಕಾನೂನಾತ್ಮಕವಾಗಿ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು” ಎಂದು ಹೇಳಿದರು.

ಭಾನುವಾರ ಬೆಳಗ್ಗೆ ಹೊಸನಗರ ತಾಲ್ಲೂಕಿನ ನಗರದ ಚಿಕ್ಕಪೇಟೆಯಿಂದ ಆರಂಭವಾದ ಪಾದಯಾತ್ರೆ ಸೋಮವಾರ ಸಂಜೆ ರಿಪ್ಪನ್‌ಪೇಟೆಗೆ ಆಗಮಿಸಿತು. ಈ ವೇಳೆ ವಿನಾಯಕ ವೃತ್ತದಲ್ಲಿ ಪ್ರತಿಭಟನಾಕಾರರ ಘೋಷಣೆಗಳು ಮುಗಿಲು ಮುಟ್ಟಿದವು. ಕ್ಷೇತ್ರ ಮರುಸ್ಥಾಪನೆಗಾಗಿ ಉಗ್ರ ಮನವಿ ಜಿಲ್ಲಾಧಿಕಾರಿಗೆ ಸಲ್ಲಿಸಲಾಯಿತು.

ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿ, “ನಾಡಿಗೆ ಬೆಳಕು ನೀಡಿದ ಹೊಸನಗರ ತನ್ನ ಸರ್ವಸ್ವವನ್ನು ಕಳೆದುಕೊಂಡಿದೆ. ಈಗ ಅದರ ಹಕ್ಕು ಮರಳಿ ಸಿಗಬೇಕು. ಪಕ್ಷಾತೀತ ಹೋರಾಟದ ಮೂಲಕ ಜನತೆಗೆ ನ್ಯಾಯ ಒದಗಿಸುವುದು ನಮ್ಮ ಕರ್ತವ್ಯ” ಎಂದು ಹೇಳಿದರು.
ತೀರ್ಥಹಳ್ಳಿ ಶಾಸಕ ಹಾಗೂ ಮಾಜಿ ಗೃಹಮಂತ್ರಿ ಆರಗ ಜ್ಞಾನೇಂದ್ರ ಮಾತನಾಡಿ, ರಾಜ್ಯದಲ್ಲಿ ಅತಿ ಹೆಚ್ಚಿನ ವಿಸ್ತೀರ್ಣವುಳ್ಳ ತಾಲೂಕುಗಳಲ್ಲಿ ಹೊಸನಗರ ತಾಲೂಕು ಸಹ ಒಂದು ತಾಲೂಕ್ ಆಗಿದೆ, ತ್ವರಿತಗತಿಯ ಅಭಿವೃದ್ಧಿಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಹೊಸನಗರ ಪುನಹ ವಿಧಾನಸಭಾ ಕ್ಷೇತ್ರವನ್ನಾಗಿ ರಚನೆಯಾಗಬೇಕು, ಇದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದರು.

ಹೊಂಬುಜ ಮಠದ ಪೀಠಾಧಿಕಾರಿ ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿ, “ಭೌಗೋಳಿಕ ಹಿನ್ನೆಲೆಯಿಂದ ಹೊಸನಗರ ಕ್ಷೇತ್ರ ನಿರಂತರ ಶೋಷಣೆಗೆ ಒಳಗಾಗಿದೆ. ನ್ಯಾಯ ದೊರಕಿಸಲು ಹೋರಾಟ ಅನಿವಾರ್ಯ” ಎಂದು ಹೇಳಿದರು.

ನಿಟ್ಟೂರು ನಾರಾಯಣಗುರು ಮಠದ ರೇಣುಕಾನಂದ ಸ್ವಾಮೀಜಿ, ಪಾದಯಾತ್ರೆಯ ನೇತೃತ್ವ ವಹಿಸಿದ್ದ ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಸ್ವಾಮೀಜಿ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿದ್ದರು.

ಜುಮ್ಮಾ ಮಸೀದಿಯ ಧರ್ಮಗುರು ಮುನೀರ್ ಸಖಾಫಿ, ಮಾಜಿ ಶಾಸಕ ಬಿ. ಸ್ವಾಮಿರಾವ್, ಜಿಲ್ಲಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಆರ್. ಎಂ. ಮಂಜುನಾಥ ಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ ಸೇರಿದಂತೆ ಅನೇಕ ಗಣ್ಯರು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದರು.

ಸಮನ್ವಯಕಾಶಿ ನಿರೂಪಿಸಿ, ಎನ್. ವರ್ತೇಶ್ ಸ್ವಾಗತಿಸಿ, ಆಸಿಫ್ ವಂದಿಸಿದರು.

