ಹೊಸನಗರ ; ರಾಜ್ಯದಲ್ಲಿ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಸಹಿತ ಇಲ್ಲಿಯವರೆಗೆ ಅತಿಥಿ ಉಪನ್ಯಾಸಕರ ನೇಮಕಾತಿ ಆಗದೇ ಇದ್ದು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ABVP) ಹೊಸನಗರ ಶಾಖೆಯ ವತಿಯಿಂದ ಸರ್ಕಾರಿ ಕೊಡಚಾದ್ರಿ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿನಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಗ್ರೇಡ್2 ತಹಸೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರೀಟ್ಟೋರಿಗೆ ಮನವಿ ಪತ್ರ ಸಲ್ಲಿಸಿದರು.
ಮನವಿ ಪತ್ರ ಸಲ್ಲಿಸಿ ಮಾತನಾಡಿದ ತಾಲ್ಲೂಕು ಎಬಿವಿಪಿ ಸಂಚಾಲಕ ಪ್ರಮೋದ್ ವೈ.ಪಿ, ನಮ್ಮ ಕೊಡಚಾದ್ರಿ ಕಾಲೇಜಿನ ವಿದ್ಯಾರ್ಥಿಗಳು ಸಂಪೆಕಟ್ಟೆ, ನಿಟ್ಟೂರು, ನಾಗೋಡಿ, ಅರಳಿಸುರಳಿ, ನಗರ, ಕೊಡೂರು ಹೀಗೆ ಸುಮಾರು 40 ಕಿ.ಮೀ. ಸುತ್ತಳತೆಯಿಂದ ಹಾಗೂ ಗ್ರಾಮಾಂತರ ಭಾಗದಿಂದ ಬೆಳಗ್ಗೆ ಬೇಗ ಎದ್ದು 9 ಗಂಟೆಯ ಒಳಗೆ ಕಾಲೇಜಿಗೆ ಬರುತ್ತಾರೆ. ಇಲ್ಲಿ ಬಂದು ನೋಡಿದರೆ ಕಾಲೇಜಿನಲ್ಲಿ ಪಾಠ ನಡೆಯುವುದಿಲ್ಲ ಉಪನ್ಯಾಸಕರ ಕೊರತೆಯಿಂದ ಖಾಯಂ ಉಪನ್ಯಾಸಕರು ಒಂದೆರಡು ಪೀರಿಯಡ್ ಪಾಠ ಮಾಡಿ ಹೋಗುತ್ತಾರೆ. ನಾವು ನೂರಾರು ರೂಪಾಯಿ ಬಸ್ ಟಿಕೇಟ್ ನೀಡಿ ಇಲ್ಲಿಗೆ ಬಂದರೆ ಪಾಠ ನಡೆಯದೇ ಇರುವುದರಿಂದ ನಮಗೆ ತೊಂದರೆಯಾಗುತ್ತಿದೆ. ಸರ್ಕಾರಿ ಕಾಲೇಜ್‌ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಇದರಿಂದ ಬಹಳಷ್ಟು ತೊಂದರೆಯಾಗುತ್ತಿದೆ. ಸರ್ಕಾರಿ ಕಾಲೇಜ್‌ಗಳು ಅತಿಥಿ ಉಪನ್ಯಾಸಕರಿಂದ ಅವಲಂಬಿತವಾಗಿರುವ ಕಾರಣ ಹಲವಾರು ಸರ್ಕಾರಿ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಬಹಳಷ್ಟು ತೊಂದರೆಯಾಗುತ್ತಿದೆ ಎಂದರು.
ಬಡ, ಕೂಲಿ ಕಾರ್ಮಿಕರ ಮಕ್ಕಳು ಸರ್ಕಾರಿ ಕ್ಯಾಂಪಸ್‌ಗಳಲ್ಲಿ ಅಧ್ಯಯನ ಮಾಡುವ ಉದ್ದೇಶದಿಂದ ದಾಖಲಾತಿ ಮಾಡಿರುತ್ತಾರೆ. ಆದರೆ ಪ್ರತಿ ವರ್ಷ ಈ ರೀತಿಯ ವ್ಯವಸ್ಥೆಯಿಂದ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಹಿಂದುಳಿಯುತ್ತಿದ್ದಾರೆ. ಖಾಸಗಿ ಕಾಲೇಜುಗಳಲ್ಲಿ ಸರಿಯಾಗಿ ತರಗತಿಗಳು ನಡೆದು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದುಕೊಳ್ಳಲು ಅನುಕೂಲವಾಗುತ್ತದೆ. ಆದರೆ ಶೇ. 50%ರಷ್ಟು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿರುವ ಸರ್ಕಾರಿ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಸರ್ಕಾರ ಅನ್ಯಾಯ ಮಾಡಿದಂತಾಗಿದೆ. ಕೂಡಲೇ ರಾಜ್ಯ ಸರ್ಕಾರ ಈ ಕುರಿತು ಗಂಭೀರವಾಗಿ ಪರಿಗಣಿಸಿ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಹುಡುಕಿಕೊಡಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.
ಎಬಿವಿಪಿ ಜಿಲ್ಲಾ ಸಂಚಾಲಕ ಲೋಹಿತ್, ಅವಿನಾಶ್ ಎಬಿವಿಪಿ ಕಾರ್ಯಕರ್ತರು ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಬಾಗವಹಿಸಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.