ಶಿವಮೊಗ್ಗ: ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಯನ್ನು ರದ್ದುಪಡಿಸುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ.
ತೀರ್ಥಹಳ್ಳಿಯಲ್ಲಿ ನಡೆದ ಪ್ರತಿಭಟನಾ ಪಾದಯಾತ್ರೆಯಲ್ಲಿ ಮಾತನಾಡಿದ ಅವರು, ಹೊಸನಗರ ಮತ್ತು ಸಾಗರದ ನಂತರ ತೀರ್ಥಹಳ್ಳಿಯಲ್ಲಿಯೂ ಜನರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿರುವುದು ಮಲೆನಾಡಿನ ಆತಂಕವನ್ನು ತೋರಿಸುತ್ತದೆ ಎಂದರು.
ಕಸ್ತೂರಿ ರಂಗನ್ ವರದಿ ಈಗಿನ ರೂಪದಲ್ಲಿ ಜಾರಿಯಾದರೆ ಮಲೆನಾಡಿನ ರೈತರು, ಶರಾವತಿ ಸಂತ್ರಸ್ತರು, ಕೂಲಿ ಕಾರ್ಮಿಕರು ಹಾಗೂ ಸಾಮಾನ್ಯ ಜನರ ಬದುಕಿಗೆ ತೀವ್ರ ತೊಂದರೆ ಉಂಟಾಗಲಿದೆ. ಗ್ರಾಮಗಳಲ್ಲಿರುವ ಮನೆಗಳು, ಶಾಲೆಗಳು, ಆಸ್ಪತ್ರೆಗಳು, ದೇವಸ್ಥಾನಗಳು ಮತ್ತು ಕೃಷಿ ಭೂಮಿಗಳ ಮೇಲೆಯೂ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಮಲೆನಾಡಿನ ಜನರು ಕಾಡಿನೊಂದಿಗೆ ಬದುಕುತ್ತಿದ್ದಾರೆ. ಪಶ್ಚಿಮ ಘಟ್ಟದ ಸಂರಕ್ಷಣೆ ಅಗತ್ಯವೇ ಸರಿ, ಆದರೆ ಅದರ ಹೆಸರಿನಲ್ಲಿ ಜನರ ಜೀವನೋಪಾಯಕ್ಕೆ ತೊಂದರೆ ಆಗಬಾರದು. ರೈತರ ಬದುಕಿಗೆ ಕುತ್ತು ತರುವ ಯಾವುದೇ ನಿರ್ಧಾರವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಬೇಳೂರು ಗೋಪಾಲಕೃಷ್ಣ ಹೇಳಿದರು.
ಇದೇ ವೇಳೆ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಸ್ತೂರಿ ರಂಗನ್ ವರದಿ ಕುರಿತು ಈಗಾಗಲೇ ಹಲವು ಕರಡು ಅಧಿಸೂಚನೆಗಳು ಬಂದಿದ್ದರೂ ಬಿಜೆಪಿ ಸಂಸದರು ರೈತರ ಪರವಾಗಿ ಗಟ್ಟಿಯಾಗಿ ಧ್ವನಿ ಎತ್ತಿಲ್ಲ ಎಂದು ಆರೋಪಿಸಿದರು.
ವಿಜಯೇಂದ್ರ ಅವರ ಪಾದಯಾತ್ರೆ ರೈತರಿಗಾಗಿ ಅಲ್ಲ, ರಾಜಕೀಯ ಅಸ್ತಿತ್ವ ಮತ್ತು ಅಧ್ಯಕ್ಷ ಸ್ಥಾನ ಉಳಿಸಿಕೊಳ್ಳುವುದಕ್ಕಾಗಿ ಮಾತ್ರ ಎಂದು ಬೇಳೂರು ಟೀಕಿಸಿದರು. “ಅಧ್ಯಕ್ಷಗಿರಿ ಕೈತಪ್ಪಬಹುದು ಎಂಬ ಭಯದಿಂದ ಪಾದಯಾತ್ರೆಯ ನಾಟಕ ಮಾಡುತ್ತಿದ್ದಾರೆ. ರೈತರ ಹೆಸರಿನಲ್ಲಿ ಮೊಸಳೆ ಕಣ್ಣೀರು ಸುರಿಸುವುದು ಸರಿಯಲ್ಲ” ಎಂದು ಹೇಳಿದರು.
ಬಳ್ಳಾರಿಯ ರೆಡ್ಡಿ ಸಹೋದರರ ರಾಜಕೀಯ ಅಸ್ತಿತ್ವ ಮತ್ತು ಹಣದ ಬಲ ಉಳಿಸಲು ಬಿಜೆಪಿ ಈ ಪಾದಯಾತ್ರೆ ನಡೆಸುತ್ತಿದೆ ಎಂದು ಆರೋಪಿಸಿದ ಅವರು, ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ರೈತರ ಸಾಲ ಮನ್ನಾ ಮಾಡಲು ಖಜಾನೆಯಲ್ಲಿ ಹಣವಿಲ್ಲ ಎಂದಿದ್ದರು. ಈಗ ವಿಜಯೇಂದ್ರ ಸಾಲ ಮನ್ನಾ ಕೇಳುವುದಕ್ಕೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.
ಸೆಪ್ಟೆಂಬರ್ 21, 22 ಮತ್ತು 23ರಂದು ನಡೆಯಲಿರುವ ವಿಶೇಷ ಅಧಿವೇಶನದಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ಚರ್ಚೆಗೆ ಅವಕಾಶ ದೊರೆಯಲಿದೆ. ಕರಡು ಅಧಿಸೂಚನೆಯನ್ನು ಸಂಪೂರ್ಣವಾಗಿ ರದ್ದುಪಡಿಸುವ ನಿರ್ಣಯ ಕೈಗೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು ಬೇಳೂರು ಗೋಪಾಲಕೃಷ್ಣ ತಿಳಿಸಿದರು.
ವರದಿ ವಿರುದ್ಧ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಅವಕಾಶವಿದ್ದು, ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ತಮ್ಮ ಬಳಿ ಈ ವಿಷಯಕ್ಕೆ ಸಂಬಂಧಿಸಿದ ದಾಖಲೆಗಳಿವೆ ಎಂದು ಅವರು ಹೇಳಿದರು.
ಮಲೆನಾಡಿನ ರೈತರ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ವರದಿ ರದ್ದಾಗುವವರೆಗೆ ಹೋರಾಟ ಮುಂದುವರೆಯಲಿದೆ ಎಂದು ಬೇಳೂರು ಗೋಪಾಲಕೃಷ್ಣ ಸ್ಪಷ್ಟಪಡಿಸಿದರು.

