ಶಿವಮೊಗ್ಗ

ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ: ರಿಪ್ಪನ್‌ಪೇಟೆ ಮೆಸ್ಕಾಂ ಕಚೇರಿಗೆ ಬೀಗ ಜಡಿದು ಬಿಜೆಪಿ ಆಕ್ರೋಶ

Condemning the irregular power cuts and the negligence of the department, a massive protest was staged—led by former minister and BJP State Vice-President Haratalu Halappa—involving the gherao of the MESCOM office in Ripponpete.

InShot 20261023 170755831

ರಿಪ್ಪನ್‌ಪೇಟೆ: ಕೆರೆಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಅನಿಯಮಿತ ವಿದ್ಯುತ್ ಕಡಿತ ಹಾಗೂ ಇಲಾಖೆಯ ನಿರ್ಲಕ್ಷ್ಯವನ್ನು ಖಂಡಿಸಿ, ಶುಕ್ರವಾರ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರ ನೇತೃತ್ವದಲ್ಲಿ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

WhatsApp Group Join Now
Telegram Group Join Now
Instagram Group Join Now

ಪಟ್ಟಣದ ಸಿದ್ಧಿವಿನಾಯಕ ದೇವಸ್ಥಾನದಿಂದ ಆರಂಭವಾದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಸಹಸ್ರಾರು ಕಾರ್ಯಕರ್ತರು ಹಾಗೂ ರೈತರು ಪಾಲ್ಗೊಂಡಿದ್ದರು.

ರಾಜ್ಯ ಸರ್ಕಾರ ಮತ್ತು ಮೆಸ್ಕಾಂ ಅಧಿಕಾರಿಗಳ ಜನವಿರೋಧಿ ನೀತಿಯ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗುತ್ತಾ ಸಾಗರ ರಸ್ತೆಯಲ್ಲಿರುವ ಮೆಸ್ಕಾಂ ಕಚೇರಿ ತಲುಪಿದ ಪ್ರತಿಭಟನಾಕಾರರು, ಕಚೇರಿಗೆ ಬೀಗ ಜಡಿದು ತಮ್ಮ ಆಕ್ರೋಶ ಹೊರಹಾಕಿದರು.

ಸರ್ಕಾರದ ವಿರುದ್ಧ ಹರತಾಳು ಹಾಲಪ್ಪ ವಾಗ್ದಾಳಿ:

ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಹರತಾಳು ಹಾಲಪ್ಪ, “ರಾಜ್ಯ ಸರ್ಕಾರ ಕೇವಲ ಗ್ಯಾರಂಟಿ ಯೋಜನೆಗಳ ಜಪ ಮಾಡುತ್ತಾ, ಸ್ಟಿಂಗ್ ಆಪರೇಷನ್‌ಗಳಂತಹ ರಾಜಕೀಯದಲ್ಲಿ ಕಾಲಹರಣ ಮಾಡುತ್ತಿದೆ. ಮಳೆಯಿಲ್ಲದೆ ಕಂಗಾಲಾಗಿರುವ ರೈತರ ಮತ್ತು ಜನಸಾಮಾನ್ಯರ ಗೋಳು ಕೇಳುವವರೇ ಇಲ್ಲದಂತಾಗಿದೆ. ಉಳಿದಿರುವ ಅಲ್ಪಸ್ವಲ್ಪ ಬೆಳೆಯನ್ನಾದರೂ ಉಳಿಸಿಕೊಳ್ಳಲು ರೈತರಿಗೆ ಸಮರ್ಪಕ ವಿದ್ಯುತ್ ನೀಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ,” ಎಂದು ಕಿಡಿಕಾರಿದರು. ಅಲ್ಲದೆ, ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡುವವರೆಗೂ ಸ್ಥಳದಿಂದ ಕದಲುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಶಾಸಕರ ನಿರ್ಲಕ್ಷ್ಯಕ್ಕೆ ವೀರೇಶ್ ಆಲವಳ್ಳಿ ಆಕ್ರೋಶ:

ತಾ.ಪಂ. ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ ಮಾತನಾಡಿ, “ಅರಸಾಳು ಗ್ರಾ.ಪಂ ವ್ಯಾಪ್ತಿಯ ಬಸವಾಪುರ, ಹಾರೋಹಿತ್ತಲು ಹಾಗೂ ಕೊಳವಂಕ ಭಾಗದಲ್ಲಿ ವಿದ್ಯುತ್ ತಂತಿಗಳು ಹಳೆಯದಾಗಿ ತುಂಡಾಗಿ ಬೀಳುವ ಸ್ಥಿತಿಯಲ್ಲಿವೆ. ಇದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳು ನಿತ್ಯ ಜೀವಭಯದಲ್ಲೇ ಸಂಚರಿಸುವಂತಾಗಿದೆ. ಸ್ಥಳೀಯ ಶಾಸಕರು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಬದಲು, ಅವಘಡ ಸಂಭವಿಸಿದ ನಂತರ ಬಂದು ಜೇಬಿನಿಂದ ಮೂರು-ನಾಲ್ಕು ಸಾವಿರ ರೂಪಾಯಿ ನೀಡಿ ಪ್ರಚಾರ ಪಡೆಯುವುದರಲ್ಲೇ ಮಗ್ನರಾಗಿದ್ದಾರೆ. ಇನ್ನು ಕೆಟ್ಟುಹೋದ ಟ್ರಾನ್ಸ್‌ಫಾರ್ಮರ್ (ಟಿ.ಸಿ) ಬದಲಾಯಿಸಲು ರೈತರೇ ಸ್ವಂತ ಖರ್ಚಿನಲ್ಲಿ ವಾಹನ ಮಾಡಿಕೊಂಡು ಸಾಗರ, ಹೊಸನಗರಕ್ಕೆ ಅಲೆಯಬೇಕಾದ ದುಸ್ಥಿತಿ ನಿರ್ಮಾಣವಾಗಿದೆ,” ಎಂದು ಅಧಿಕಾರಿಗಳ ಕಾರ್ಯವೈಖರಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಇದೇ ವೇಳೆ ಮಾತನಾಡಿದ ಜಿ.ಪಂ. ಮಾಜಿ ಸದಸ್ಯ ಹೊನಗೋಡು ರತ್ನಾಕರ್, ಬರಗಾಲದ ನಡುವೆಯೂ ವಿದ್ಯುತ್ ಕಣ್ಣಾಮುಚ್ಚಾಲೆಯಿಂದಾಗಿ ಪಂಪ್‌ಸೆಟ್ ಮೂಲಕ ಬೆಳೆಗಳಿಗೆ ನೀರು ಹಾಯಿಸಲು ರೈತರು ಹರಸಾಹಸ ಪಡುತ್ತಿದ್ದಾರೆ. ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ನಿರಂತರ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಪ್ರತಿಭಟನೆಯಲ್ಲಿ ಹೊಸನಗರ ಬಿಜೆಪಿ ಮಂಡಲ ಅಧ್ಯಕ್ಷ ಎನ್. ಸತೀಶ್, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಎನ್. ವರ್ತೇಶ್, ಪ್ರಮುಖರಾದ ಆರ್.ಎ. ಚಾಬುಸಾಬ್, ಶಿವಾನಂದಪ್ಪ, ಮೆಣಸೆ ಆನಂದ, ಜಿ.ಪಂ ಮಾಜಿ ಸದಸ್ಯೆ ಎ.ಟಿ. ನಾಗರತ್ನ ನಾಗರಾಜ್, ಎಂ. ಸುರೇಶ್‌ಸಿಂಗ್, ಎಂ.ಬಿ. ಮಂಜುನಾಥ, ಜಿ.ಡಿ. ಮಲ್ಲಿಕಾರ್ಜುನ, ರಾಜೇಶ್ ಬುಕ್ಕಿವರೆ, ನಾಗರತ್ನ ದೇವರಾಜ್, ರೇಖಾ ರವಿ ಕೆರೆಹಳ್ಳಿ, ಕೆ.ಬಿ. ಹೂವಪ್ಪ, ಬೆಳ್ಳೂರು ತಿಮ್ಮಪ್ಪ, ಮಂಜುಳಾ ಕೇತಾರ್ಜಿರಾವ್, ಬಿ.ಈ. ಕಿರಣ್ ಅಬ್ಬಿ, ಕುಶನ್ ದೇವರಾಜ್ ಸೇರಿದಂತೆ ನೂರಾರು ಕಾರ್ಯಕರ್ತರು ಹಾಗೂ ರೈತರು ಉಪಸ್ಥಿತರಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

error: Content is protected !!