ಭದ್ರಾವತಿ ; ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಉರುಳಿ ಬಿದ್ದಿದ್ದು, ಅಪಘಾತದಲ್ಲಿ 36 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಮಧ್ಯಾಹ್ನ 1.30 ರ ಸುಮಾರಿಗೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ವೀರಾಪುರ ಗ್ರಾಮದ ಕಾಗೆಹಳ್ಳ ಬಳಿ ಈ ಅಪಘಾತ ಸಂಭವಿಸಿದೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿಯಿಂದ ಭದ್ರಾವತಿಗೆ ತೆರಳುತ್ತಿದ್ದ ಖಾಸಗಿ ಬಸ್, ಕಾಗೇಹಳ್ಳದ ಬಳಿ ಬಸ್ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದು, ಸೇತುವೆಯಿಂದ ಹಳ್ಳಕ್ಕೆ ಬಿದ್ದಿದೆ. ಅಪಘಾತದಲ್ಲಿ ಚಾಲಕ ಮತ್ತು ಕಂಡಕ್ಟರ್ ಸೇರಿದಂತೆ ಒಟ್ಟು 36 ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವರಲ್ಲಿ 25 ಜನರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಈ ಘಟನೆ ಸಂಬಂಧ ಭದ್ರಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

