ರಿಪ್ಪನ್‌ಪೇಟೆ: ದಿನಪತ್ರಿಕೆಗಳನ್ನು ಸಾಗಿಸುತ್ತಿದ್ದ ಮಾರುತಿ ಓಮ್ನಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಇಲ್ಲಿನ ಸಮೀಪದ ಹೆದ್ದಾರಿಪುರದ ಜಂಬಳ್ಳಿ ತಿರುವಿನಲ್ಲಿ ಸಂಭವಿಸಿದೆ.
ಮೃತರನ್ನು ಶಿವಮೊಗ್ಗ ಮೂಲದ ಶಿವಕುಮಾರ್ (45) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿಯನ್ನು ತೀರ್ಥಹಳ್ಳಿ ಮೂಲದ ಶಿವಕುಮಾರ್ ಎಂದು ತಿಳಿದುಬಂದಿದ್ದು, ಇವರು ರಿಪ್ಪನ್‌ಪೇಟೆಯ ಕೋಳಿ ಫಾರಂ ಒಂದರಲ್ಲಿ ಕೆಲಸ ಮಾಡುತ್ತಿದ್ದರು.
ಘಟನೆಯ ವಿವರ:
ಶಿವಮೊಗ್ಗದಿಂದ ವಿಜಯವಾಣಿ ದಿನಪತ್ರಿಕೆಗಳನ್ನು ತೀರ್ಥಹಳ್ಳಿಗೆ ತಲುಪಿಸಿ, ಅಲ್ಲಿಂದ ರಿಪ್ಪನ್‌ಪೇಟೆಗೆ ಬರುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಜಂಬಳ್ಳಿ ತಿರುವಿನ ಬಳಿ ಓಮ್ನಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಅಪಘಾತದ ತೀವ್ರತೆಗೆ ಶಿವಮೊಗ್ಗದ ಶಿವಕುಮಾರ್ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಗಂಭೀರವಾಗಿ ಗಾಯಗೊಂಡ ಮತ್ತೊಬ್ಬರಿಗೆ ರಿಪ್ಪನ್‌ಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.
ಈ ಸಂಬಂಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
