ಶಿವಮೊಗ್ಗ: ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ನೀಡಲು ಹಣವಿಲ್ಲದೆ ಕಾಂಗ್ರೆಸ್ ಸರ್ಕಾರ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಸಂಪೂರ್ಣ ದಿವಾಳಿಯಾಗಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.
ಗುರುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಪ್ರಮುಖ ವೈಫಲ್ಯಗಳನ್ನು ಪಟ್ಟಿ ಮಾಡಿ ಆಡಳಿತಾರೂಢ ಸರ್ಕಾರದ ವಿರುದ್ಧ ಹರಿಹಾಯ್ದರು.
ಬೆಳೆ ನಷ್ಟ ಮತ್ತು ರೈತರ ಅಸಮಾಧಾನ:
ಕಂದಾಯ ಸಚಿವರ ಪ್ರಕಾರವೇ ರಾಜ್ಯದಲ್ಲಿ ಶೇ. 82ರಷ್ಟು ಬೆಳೆ ಹಾನಿಯಾಗಿದೆ. ಎಸ್‌ಡಿಆರ್‌ಎಫ್ ನಿಯಮಗಳಡಿ ಎಕರೆಗೆ ಕನಿಷ್ಠ ₹25,000 ಪರಿಹಾರ ಒದಗಿಸಬೇಕೆಂದು ವಿಪಕ್ಷಗಳು ಒತ್ತಾಯಿಸಿದ್ದರೂ, ಸರ್ಕಾರ ಘೋಷಿಸಿದ್ದು ಕೇವಲ ₹2,500 ಮಾತ್ರ. ಆದರೆ ಆ ಅಲ್ಪ ಮೊತ್ತವೂ ಇನ್ನೂ ಅನ್ನದಾತರ ಬ್ಯಾಂಕ್ ಖಾತೆ ತಲುಪಿಲ್ಲ. ಅನ್ನದಾತರ ಬಿಕ್ಕಟ್ಟನ್ನು ಗಂಭೀರವಾಗಿ ಪರಿಗಣಿಸಿ ಚರ್ಚಿಸಲು ಸರ್ಕಾರ ಕೂಡಲೇ ವಿಶೇಷ ಅಧಿವೇಶನ ಕರೆಯಬೇಕು ಎಂದು ಆಗ್ರಹಿಸಿದರು.
ಮೀಸಲಾತಿ ರಕ್ಷಿಸುವಲ್ಲಿ ವೈಫಲ್ಯ:
ಹಿಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಎಸ್‌ಸಿ ಸಮುದಾಯಕ್ಕೆ ಶೇ. 15ರಿಂದ 17ಕ್ಕೆ ಹಾಗೂ ಎಸ್‌ಟಿ ಸಮುದಾಯಕ್ಕೆ ಶೇ. 3ರಿಂದ 7ಕ್ಕೆ ಮೀಸಲಾತಿ ಹೆಚ್ಚಿಸಿ ಐತಿಹಾಸಿಕ ತೀರ್ಮಾನ ಕೈಗೊಂಡಿತ್ತು. ಆದರೆ ಪ್ರಸ್ತುತ ಕಾಂಗ್ರೆಸ್ ಆಡಳಿತವು ನ್ಯಾಯಾಲಯದಲ್ಲಿ ಈ ನಿರ್ಧಾರವನ್ನು ಕಾನೂನಾತ್ಮಕವಾಗಿ ಸಮರ್ಥಿಸಿಕೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದರು.

ಪಿಂಚಣಿ ಸ್ಥಗಿತ:
ದಲಿತರು, ಅಂಗವಿಕಲರು, ಹಿರಿಯ ನಾಗರಿಕರು ಮತ್ತು ವಿಧವೆಯರಿಗೆ ನೀಡಲಾಗುತ್ತಿದ್ದ ಮಾಸಿಕ ಪಿಂಚಣಿಯನ್ನು ಕಳೆದ ಆರು-ಏಳು ತಿಂಗಳುಗಳಿಂದ ಸ್ಥಗಿತಗೊಳಿಸಲಾಗಿದೆ. ಸಾಮಾಜಿಕ ಭದ್ರತಾ ಯೋಜನೆಗಳ ಹಣವನ್ನು ತಕ್ಷಣವೇ ಫಲಾನುಭವಿಗಳಿಗೆ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಜನರ ಅಸಮಾಧಾನವೇ ಚುನಾವಣಾ ಫಲಿತಾಂಶ:
ಇತ್ತೀಚೆಗೆ ನಡೆದ ವಿಧಾನ ಪರಿಷತ್‌ನ ನಾಲ್ಕು ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮುಖಭಂಗವಾಗಿದೆ. ಇದು ಸರ್ಕಾರದ ಜನವಿರೋಧಿ ಧೋರಣೆಯ ವಿರುದ್ಧ ವ್ಯಕ್ತವಾದ ಜನಾದೇಶವಾಗಿದೆ. ಜನಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸುವುದನ್ನು ಬಿಟ್ಟು ಆಡಳಿತ ಪಕ್ಷ ಕೇವಲ ಇವಿಎಂ, ಎಸ್‌ಐಆರ್ ಮುಂತಾದ ರಾಜಕೀಯ ವಿವಾದಗಳಲ್ಲೇ ಮುಳುಗಿದೆ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎನ್. ಜಗದೀಶ್, ಜಿಲ್ಲಾ ವಕ್ತಾರ ಎಸ್.ಎಸ್. ಜ್ಯೋತಿಪ್ರಕಾಶ್ ಹಾಗೂ ಪ್ರಮುಖರಾದ ಹರಿಕೃಷ್ಣ, ಮಾಲತೇಶ್, ಪೆರುಮಾಳ್ ಮತ್ತು ಚಂದ್ರಶೇಖರ್ ಉಪಸ್ಥಿತರಿದ್ದರು.

