ಕಡಿಮೆ ಮತದಾನ ಪ್ರದೇಶಗಳಲ್ಲಿ ಹೆಚ್ಚು ಜಾಗೃತಿ ಮೂಡಿಸಿ

0 41

ಚಿಕ್ಕಮಗಳೂರು : ಭಾರತದ ಸಂವಿಧಾನವು ರಾಷ್ಟ್ರದ ನಾಗರಿಕರಿಗೆ ನೀಡಿರುವ ಅಮೂಲ್ಯವಾದ ಹಕ್ಕು ಮತದಾನವಾಗಿದೆ. ತಪ್ಪದೇ ಮತದಾನ ಮಾಡುವುದು ಪ್ರತಿಯೊಬ್ಬ ವಯಸ್ಕ ಪ್ರಜೆಯ ಕರ್ತವ್ಯವಾಗಿದ್ದು ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ .ಬಿ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಮತದಾನ ಪ್ರಮಾಣ ಹೆಚ್ಚಿಸಲು ಜಿಲ್ಲಾ ಸ್ವೀಪ್ ಸಮಿತಿಯಿಂದ ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಗ್ರಾಮೀಣ ಭಾಗದ ಎಲ್ಲಾ ಅರ್ಹ ಮತದಾರರು ಏಪ್ರಿಲ್ 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಕೇಂದ್ರಗಳಿಗೆ ತೆರಳಿ ಮತದಾನ ಮಾಡುವಂತೆ ಅರಿವು ಮೂಡಿಸಬೇಕು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತಗಟ್ಟೆಗಳಿಗೆ ಗುಣಮಟ್ಟದ ಮೂಲ ಸೌಕರ್ಯವನ್ನು ಸಕಾಲಕ್ಕೆ ಒದಗಿಸಬೇಕು ಮತಗಟ್ಟೆ ಅಧಿಕಾರಿಗಳ ಜೊತೆ ಚರ್ಚಿಸಿ ಅವರಿಗೆ ಅಗತ್ಯವಿರುವ ವಸ್ತುಗಳನ್ನು ನಿಗದಿತ ಸಮಯಕ್ಕೆ ಪೂರೈಸಲು ಕ್ರಮವಹಿಸುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಗ್ರಾಮ ಪಂಚಾಯಿತಿ ಪಿ ಡಿ ಓ ಗಳಿಗೆ ನಿರ್ದೇಶನ ನೀಡಬೇಕು ಎಂದರು.

ಮತಗಟ್ಟೆ ವ್ಯಾಪ್ತಿಯಲ್ಲಿ ಸುಸಜ್ಜಿತವಾದ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ನೆರಳು, ಪ್ರಾಥಮಿಕ ಚಿಕಿತ್ಸಾ ಪೆಟ್ಟಿಗೆ ಸೇರಿದಂತೆ ಅಗತ್ಯ ಸೌಲಭ್ಯಕ್ಕಾಗಿ ಮತಗಟ್ಟೆಗೆ ಭೇಟಿ ನೀಡಿ ಪರಿಶೀಲಿಸಬೇಕು. ವಿಶ್ರಾಂತಿ ಕೊಠಡಿ ಮೀಸಲಿರಿಸಲು ಕ್ರಮ ವಹಿಸಬೇಕು ವಿಶೇಷ ಮತಗಟ್ಟೆಗಳನ್ನು ಆಕರ್ಷಕವಾಗಿ ಸಿದ್ದಪಡಿಸಬೇಕು ಅಲ್ಲದೆ ಅಂಗವಿಕಲರು ವಯಸ್ಸಾದವರು ಮತಗಟ್ಟೆಗೆ ಬಂದು ಮತ ಚಲಾಯಿಸಲು ವಾಹನದ ವ್ಯವಸ್ಥೆ ಮಾಡುವಂತೆ ಹೇಳಿದರು.
 
ಹಿಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಜಿಲ್ಲೆಯ 85 ಮತಗಟ್ಟೆಗಳಲ್ಲಿ ಶೇಕಡ 65ಕ್ಕಿಂತ ಕಡಿಮೆ ಮತದಾನವಾಗಿದ್ದು, ಈ ಚುನಾವಣೆಯಲ್ಲಿ ಮತದಾನದ ಪ್ರಮಾಣ ಶೇ. 85ಕ್ಕಿಂತಲೂ ಹೆಚ್ಚು ಆಗುವಂತೆ ಮಾಡಲು ಕಡಿಮೆ ಮತದಾನವಾದ ಮತಗಟ್ಟೆಗಳನ್ನು ಮತ್ತು ಅವುಗಳ ಸುತ್ತಲಿನ ಮತಗಟ್ಟೆಗಳನ್ನು ಕೇಂದ್ರೀಕರಿಸಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ತಿಳಿಸಿದರು.
 
ನಗರ ಪ್ರದೇಶದಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಎಲ್ಲ ಮನೆ ಮನೆಗೆ ಮತದಾನದ ಮಹತ್ವ ಸಾರುವ ಸಂದೇಶ ತಲುಪುವಂತೆ ಕ್ರಮವಹಿಸಿ ಎಂದ ಅವರು ಪ್ರತಿಯೊಬ್ಬರೂ ಸಿ ವಿಜಿಲ್ ಆಪ್ ಡೌನ್‌ಲೋಡ್ ಮಾಡಿಕೊಳ್ಳುವಂತೆ ತಿಳಿಸಬೇಕು. ಚುನಾವಣಾ ಅಕ್ರಮಗಳು ಕಂಡು ಬಂದರೆ ಕೂಡಲೇ ಆಪ್ ಮೂಲಕ ದೂರು ಸಲ್ಲಿಸಿ ನಿಮ್ಮ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಇಂದು ತಿಳಿಸಿ ಎಂದ ಅವರು ಹಿರಿಯ ನಾಗರಿಕರ ಸಹಾಯಕ್ಕಾಗಿ ಸ್ವಯಂಸೇವಕರನ್ನು ನೇಮಿಸಿಕೊಳ್ಳಿ, ಏಪ್ರಿಲ್ 21ರಂದು ಮತದಾರರ ದಿನವನ್ನು ಎಲ್ಲಾ ಮತಗಟ್ಟೆಗಳಲ್ಲಿ ವಿಜೃಂಭಣೆಯಿಂದ ಆಚರಿಸುವಂತೆ ಹೇಳಿದರು.

ಸಭೆಯಲ್ಲಿ ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ಶಿವಕುಮಾರ್, ತಾಲ್ಲೂಕುಗಳ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಸ್ವೀಪ್ ಸಮಿತಿ ನೋಡಲ್ ಅಧಿಕಾರಿಗಳು ಹಾಜರಿದ್ದರು.

Leave A Reply

Your email address will not be published.

error: Content is protected !!