ಕರಪತ್ರ, ಬ್ಯಾನರ್, ಪೋಸ್ಟರ್ ಮುದ್ರಿಸಲು ಅನುಮತಿ ಕಡ್ಡಾಯ ; ಡಿಸಿ ಮೀನಾ ನಾಗರಾಜ್

0 93

ಚಿಕ್ಕಮಗಳೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳ ಮತ್ತು ರಾಜಕೀಯ ಅಭ್ಯರ್ಥಿಗಳ ಕರಪತ್ರ, ಪೋಸ್ಟರ್‍ಸ್ ಮತ್ತು ಬ್ಯಾನರ್ ಗಳನ್ನು ಮುದ್ರಿಸುವ ಮೊದಲು ಜಿಲ್ಲಾ ಚುನಾವಣಾಧಿಕಾರಿಗಳ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಮೀನಾ ನಾಗರಾಜ್ ಸಿ.ಎನ್. ತಿಳಿಸಿದರು.

ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಿನ್ನೆ ನಡೆದ ಮುದ್ರಣ ಮಾಲೀಕರು, ಹೋಟೆಲ್, ರೆಸಾರ್ಟ್, ಹೋಂ ಸ್ಟೇ ಹಾಗೂ ಲಿಕ್ಕರ್ ಶಾಪ್ ಮಾಲೀಕರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯಾವುದೇ ರೀತಿಯ ಅಪಪ್ರಚಾರ, ಸುಳ್ಳು ಮಾಹಿತಿ, ಕೋಮುಗಲಭೆ, ಸೃಷ್ಟಿಸುವಂತಹ ಕರಪತ್ರ, ಪೋಸ್ಟರ್ ಮತ್ತು ಬ್ಯಾನರ್ ಗಳನ್ನು ಮುದ್ರಿಸಲು ಅವಕಾಶವಿರುವುದಿಲ್ಲ. ಮುದ್ರಕರು ಪಾಂಪ್ಲೇಟ್‌ಗಳು, ಪೋಸ್ಟರ್‌ಗಳನ್ನು ಮುದ್ರಿಸುವ ಮೊದಲು ಪ್ರಕಾಶನದ ಗುರುತಿನ ಬಗ್ಗೆ ದೃಢೀಕರಣವನ್ನು ಇಬ್ಬರು ಅನುಮೋದಕರೊಂದಿಗೆ ಪಡೆದಿರಬೇಕು. ಗುರುತಿನ ದೃಢೀಕರಣವಿಲ್ಲದೆ ಮುದ್ರಣ ಮಾಡಬಾರದು. ಕರಪತ್ರದ ಕೆಳಗೆ ಮುದ್ರಕರ ಹೆಸರು ವಿಳಾಸವನ್ನು ಕಡ್ಡಾಯವಾಗಿ ನಮೂದಿಸಬೇಕು. ದಾಖಲೆ ಇಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಮುದ್ರಣ ಮಾಡಿದರೆ ಕ್ರಮ ಜರುಗಿಸಲಾಗುವುದು. ತಾವು ಮುದ್ರಿಸುವ ಒಂದು ಪ್ರತಿಯ ಮಾಹಿತಿಯನ್ನು ನಿಗಧಿತ ನಮೂನೆಯಲ್ಲಿ ಪ್ರಿಂಟಿಂಗ್ ಪ್ರೆಸ್ ಮಾಲೀಕರು, ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸಲ್ಲಿಸಬೇಕು. ಯಾವುದೇ ಜಾತ್ರೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳಿಗೆ ಮುದ್ರಣವಾಗುವ ಕರಪತ್ರಗಳಲ್ಲಿ ಅಭ್ಯರ್ಥಿಗಳ ಭಾವಚಿತ್ರವನ್ನು ಹಾಕಬಾರದು ಎಂದು ಸೂಚಿಸಿದರು.

ಹೋಟೆಲ್, ರೆಸಾರ್ಟ್, ಹೋಂ ಸ್ಟೇ ಮಾಲೀಕರು ರಾಜಕೀಯಕ್ಕೆ ಸಂಬಂಧಿಸಿದ ಯಾವುದೇ ಸಮಾರಂಭಗಳಿಗೆ ಅವಕಾಶ ನೀಡಬಾರದು. ಹೋಟೆಲ್, ರೆಸಾರ್ಟ್, ಹೋಂ ಸ್ಟೇ ಗಳಿಗೆ ವಾಸ್ತವ್ಯಕ್ಕೆ ಬರುವವರ ಮಾಹಿತಿಯನ್ನು ಕಡ್ಡಾಯವಾಗಿ ದಾಖಲಿಸಬೇಕು. ಗುಂಪುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಸ್ತವ್ಯಕ್ಕೆ ಬಂದರೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಸಿಸಿ ಕ್ಯಾಮರಾಗಳನ್ನು ಕಡ್ಡಾಯವಾಗಿ ಆಳವಡಿಸಬೇಕು. ಆ ದಿನದ ವ್ಯಾಪಾರದ ವಹಿವಾಟುಗಳನ್ನು ದಾಖಲೆಗಳಲ್ಲಿ ನಮೂದಿಸಬೇಕು ಎಂದರು.

ಮದ್ಯ ಮಾರಾಟಗಾರರು ಪ್ರತಿದಿನದ ವಹಿವಾಟನ್ನು ರಿಜಿಸ್ಟರ್‌ನಲ್ಲಿ ನಮೂದಿಸಬೇಕು. ಅನಿಧೀಕೃತವಾಗಿ ಮದ್ಯ ಮಾರಾಟ ಮಾಡುವುದು ಕಂಡು ಬಂದರೆ ಅಂತಹ ಮದ್ಯದಂಗಡಿ ವಿರುದ್ಧ ಕ್ರಮ ಜರುಗಿಸಲಾಗುವುದು  ಎಂದ ಅವರು. ರೂ. 50,000ಕ್ಕಿಂತ ಹೆಚ್ಚು ಹಣವನ್ನು ಕೊಂಡೊಯ್ಯುವಂತಿಲ್ಲ, ಹಣಕ್ಕೆ ವ್ಯವಹಾರದ ರಸೀದಿ, ಪರವಾನಗಿ ಪತ್ರವನ್ನು ಕಡ್ಡಾಯವಾಗಿ ತೋರಿಸಬೇಕು. ದಾಖಲೆಗಳಿಲ್ಲದ ಹಣವನ್ನು ಸಾಗಿಸುತ್ತಿದ್ದರೆ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದರು.
ಭಾರತ ಚುನಾವಣಾ ಆಯೋಗದ ಮಾರ್ಗಸೂಚಿ ಅನುಸಾರ ನಿಯಮಗಳನ್ನು ಉಲ್ಲಂಘಿಸಿದ್ದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ ಅನ್ವಯ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಅಬಕಾರಿ ಉಪ ಆಯುಕ್ತರು ಸೆಲೀನಾ ಸಿ., ಪ್ರವಾಸೋದ್ಯಮ ಸಹಾಯಕ ನಿರ್ದೇಶಕ ಲೋಹಿತ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಪ್ರಿಂಟಿಂಗ್ ಪ್ರೆಸ್ ಮಾಲೀಕರು, ಮದ್ಯದಂಗಡಿ ಮಾಲೀಕರು ಉಪಸ್ಥಿತರಿದ್ದರು.

Leave A Reply

Your email address will not be published.

error: Content is protected !!