ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸಲು ಒತ್ತಾಯಿಸಿ ಪ್ರತಿಭಟನೆ

0 48

ಚಿಕ್ಕಮಗಳೂರು: ‘ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ರಾಜ್ಯದ ಸಂಸದರು ಕೇಂದ್ರಕ್ಕೆ ಒತ್ತಡ ತರಬೇಕು. ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕು’ ಎಂದು ಒತ್ತಾಯಿಸಿ ರೈತ ಸಂಘ, ದಲಿತ ಸಂಘರ್ಷ ಸಮಿತಿ ಹಾಗೂ ಕನ್ನಡ ಪ್ರಗತಿಪರ ಸಂಘಟನೆಗಳ ಜಿಲ್ಲಾ ಮುಖಂಡರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

‘ರೈತ ಸಂಘದ ರಾಜ್ಯ ಸಮಿತಿ ಮುಖಂಡ ಕೃಷ್ಣೇಗೌಡ ಮಾತನಾಡಿ, ಈ ಬಾರಿ ವಾಡಿಕೆಯಂತೆ ಮಳೆಯಾಗದೆ ರಾಜ್ಯದಲ್ಲಿ ನೀರಿನ ಅಭಾವ ಎದುರಾಗಿದೆ. ಹಾರಂಗಿ, ಕಬಿನಿ, ಕೆಆರ್‌ಎಸ್‌, ಹೇಮಾವತಿ ಜಲಾಶಯಗಳು ಭರ್ತಿಯಾಗಿಲ್ಲ. ಬರಗಾಲದ ಛಾಯೆ ಆವರಿಸಿದ್ದು, ಜನ, ಜಾನುವಾರುಗಳು ಕುಡಿಯುವ ನೀರಿಗೆ ಹಾಹಾಕಾರ ಎದುರಿಸುಂತಾಗಿದೆ. ಈ ನಡುವೆ ರಾಜ್ಯ ಸರ್ಕಾರ ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ನಿತ್ಯ 5,000 ಕ್ಯೂಸೆಕ್ ನೀರು ಹರಿಸಲು ಮುಂದಾಗಿರುವುದು ಸರಿಯಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಮಂಡ್ಯ, ಮೈಸೂರು, ಬೆಂಗಳೂರು ಭಾಗಕ್ಕೆ ನೀರೊದಗಿಸುವ ಮೂಲಕ ಕಾವೇರಿ ರೈತರ ಜೀವನಾಡಿಯಾಗಿದೆ. ಆದರೆ, ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆ ಇದ್ದರೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ನಿರ್ದೇಶನದಂತೆ ಸುಪ್ರೀಂ ಕೋರ್ಟ್ ಕೂಡ ನೀರು ಹರಿಸಲು ಹೇಳಿರುವುದು ಸಮಂಜಸವಲ್ಲ’ ಎಂದರು..

ಸಂಕಷ್ಟದ ಸಮಯದಲ್ಲಿ ಎರಡೂ ರಾಜ್ಯಗಳ ಜನಪ್ರತಿನಿಧಿಗಳು ಚರ್ಚಿಸಿ ನಿಯಮ ರೂಪಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಏಕಪಕ್ಷೀಯ ನಿರ್ಧಾರ ಸರಿಯಲ್ಲ. ಜಲವಿವಾದವನ್ನು ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಬಗೆಹರಿಸಬೇಕು. ಈ ನಿಟ್ಟಿನಲ್ಲಿ ರಾಜ್ಯದಿಂದ ಆಯ್ಕೆಯಾಗಿರುವ ಸಂಸದರು ಮತ್ತು ರಾಜ್ಯ ಸರ್ಕಾರ ಒತ್ತಡ ಹೇರಬೇಕು. ಎರಡೂ ರಾಜ್ಯಗಳು ಒಪ್ಪುವಂತಹ ನಿಯಮ ರೂಪಿಸಿ ನೀರು ಹಂಚಿಕೆ ವಿವಾದ ಬಗೆಹರಿಸಬೇಕು ಎಂದು ಆಗ್ರಹಿಸಿದರು.

ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಗುರುಶಾಂತಪ್ಪ, ಮುಖಂಡರಾದ ಕೆ.ಟಿ.ರಾಧಾಕೃಷ್ಣ, ಮರ್ಲೆ ಅಣ್ಣಯ್ಯ, ಕನ್ನಡ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಸಿ.ರಾಜೇಗೌಡ, ಎಂ.ಬಿ.ಚಂದ್ರಶೇಖರ್, ಮಲ್ಲುಂಡಪ್ಪ, ಪರ್ವತೇಗೌಡ, ಮಂಜು, ಪರಮೇಶ್, ಕಳವಾಸೆ ರವಿ ಇದ್ದರು.

Leave A Reply

Your email address will not be published.

error: Content is protected !!