ಮೂಡಿಗೆರೆ: ಮರಗಸಿ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಮರದಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಜಿ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗಣೇಶ್ ಪೂಜಾರಿ (38) ಮೃತ ದುರ್ದೈವಿಯಾಗಿದ್ದು, ಇವರು ಮೂಡಿಗೆರೆ ಪಪಂ ಮಾಜಿ ಸದಸ್ಯ ಕೆ.ಟಿ ಶ್ರೀಧರ್ ಎಂಬುವವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಇಂದು ಬೆಳಿಗ್ಗೆ ಮರಗಸಿ ಮಾಡಲು ಮರವೇರಿದ್ದ ಗಣೇಶ್ ಪೂಜಾರಿ ಆಯಾತಪ್ಪಿ ಕೆಳಗೆ ಬಿದ್ದಿದ್ದು ಅವರ ತೆಲೆ ಭಾಗಕ್ಕೆ ಪೆಟ್ಟಾಗಿತ್ತು ಎಂದು ತಿಳಿದುಬಂದಿದೆ. ತೀವ್ರ ಗಾಯಗೊಂಡಿದ್ದ ಅವರನ್ನು ಮೂಡಿಗೆರೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಅಂಬುಲೆನ್ಸ್ ಮೂಲಕ ಮಂಗಳೂರಿಗೆ ಕರೆದೊಯ್ಯಲಾಗುತ್ತಿತ್ತು. ಉಜಿರೆ ಸಮೀಪ ಹೋಗುವಾಗ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೂಡಿಗೆರೆ ಎಂ.ಜಿ.ಎಂ. ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಗೋಣಿಬೀಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಣೇಶ್ ಪೂಜಾರಿ ಪತ್ನಿ, ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದಾರೆ.
ಮರದಿಂದ ಬಿದ್ದು ಕಾರ್ಮಿಕರು ಮೃತಪಡುತ್ತಿರುವ ಘಟನೆಗಳು ಹೆಚ್ಚಾಗುತ್ತಿದ್ದು, ಈಗ್ಗೆ 15 ದಿನಗಳ ಹಿಂದೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಠಾಣಾ ವ್ಯಾಪ್ತಿಯಲ್ಲಿ ತಮಿಳುನಾಡು ಮೂಲದ ಕಾರ್ಮಿಕನೋರ್ವ ಸಾವನ್ನಪ್ಪಿದ್ದ.