ರಿಪ್ಪನ್‌ಪೇಟೆ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಕ್ಕಳ ಸಮಗ್ರ ಬೆಳವಣಿಗೆಗೆ ಕೇವಲ ಪುಸ್ತಕದ ಜ್ಞಾನವಷ್ಟೇ ಸಾಲದು, ಪಠ್ಯೇತರ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳೂ ಅಷ್ಟೇ ಮುಖ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಗಣೇಶ್ ಅಭಿಪ್ರಾಯಪಟ್ಟರು.
ಇಲ್ಲಿನ ಶ್ರೀ ಬಸವೇಶ್ವರ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ 2026-27ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ‘ಪ್ರತಿಭಾ ಕಾರಂಜಿ’ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣದ ಜೊತೆಗೆ ಒಳ್ಳೆಯ ಸಂಸ್ಕಾರವನ್ನು ಮೈಗೂಡಿಸಿಕೊಂಡು, ಕಲಿತ ಶಾಲೆಗೆ ಹಾಗೂ ನಾಡಿಗೆ ಕೀರ್ತಿ ತರಬೇಕು. ಯಾವುದೇ ದುಶ್ಚಟಗಳಿಗೆ ದಾಸರಾಗದೆ, ಸದಾ ಚಟುವಟಿಕೆಯಿಂದಿದ್ದು ನಿತ್ಯ ಹೊಸ ವಿಷಯಗಳನ್ನು ಕಲಿಯುವ ಮೂಲಕ ತಮ್ಮ ಜ್ಞಾನದ ಪರಿಧಿಯನ್ನು ವಿಸ್ತರಿಸಿಕೊಳ್ಳಬೇಕು. ಮಕ್ಕಳಲ್ಲಿ ಅಡಗಿರುವ ಸೂಕ್ಷ್ಮ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಸದುದ್ದೇಶದಿಂದ ಸರ್ಕಾರ ಪ್ರತಿಭಾ ಕಾರಂಜಿಯಂತಹ ಉತ್ತಮ ಕಾರ್ಯಕ್ರಮಗಳನ್ನು ರೂಪಿಸಿದೆ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಗುರು ಬಸವೇಶ್ವರ ವಿದ್ಯಾಪೀಠದ ನಿರ್ದೇಶಕರಾದ ಹೆಚ್.ಎಂ. ವರ್ತೇಶ್‌ಗೌಡ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಗುರು ಬಸವೇಶ್ವರ ವಿದ್ಯಾಪೀಠದ ನಿರ್ದೇಶಕ ಎಲ್.ವೈ. ದಾನೇಶಪ್ಪ, ಇಸಿಓ ಕರಿಬಸಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷೆ ಲೀಲಾವತಿ, ಸರ್ಕಾರಿ ನೌಕರರ ಸಂಘದ ಸದಸ್ಯ ಜಗದೀಶ್ ಕಾಗಿನಲ್ಲಿ, ಬಡ್ತಿ ಮುಖ್ಯ ಶಿಕ್ಷಕರಾದ ದುರ್ಗಪ್ಪ, ಶಿವಪ್ಪ ಹಾಗೂ ಮಾಲತೇಶ್, ಶಿವಮೂರ್ತಿ, ಗುರುಪ್ರಕಾಶ್, ತಾಜುನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ರೀತಮ್ ಕಾಮತ್ ಮತ್ತು ತಂಡದವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಮುಖ್ಯ ಶಿಕ್ಷಕ ಚಂದ್ರಪ್ಪ ಸ್ವಾಗತಿಸಿದರು. ಸಿಆರ್‌ಪಿ ಎನ್. ಮಂಜುನಾಥ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಹ ಶಿಕ್ಷಕ ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು ಹಾಗೂ ಮುಖ್ಯ ಶಿಕ್ಷಕ ಗುರುಪ್ರಕಾಶ್ ವಂದಿಸಿದರು.

