CHIKKAMAGALURU ; ಸಮಾಜದ ಉನ್ನತ ಸ್ಥಾನ ತಲುಪಲು ಶಿಕ್ಷಣ ಅವಶ್ಯಕವಾಗಿದೆ. ಪ್ರತಿಯೊಂದು ಮಗುವಿಗೂ ಉತ್ತಮ ಶಿಕ್ಷಣ ಒದಗಿಸಿಕೊಡುವುದು ನಮ್ಮೆಲ್ಲರ ಕರ್ತವ್ಯ ಎಂದು ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.
ಕಡೂರು ತಾಲ್ಲೂಕು ಸಿಂಗಟಗೆರೆ ಹೋಬಳಿ ಬಿ. ಮಲ್ಲೇನಹಳ್ಳಿಯಲ್ಲಿ ಮಂಗಳವಾರ ಡಾ. ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ನಿಲಯದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬರಿಗೂ ಕಡ್ಡಾಯ ಮತ್ತು ಸಮಾನ ಶಿಕ್ಷಣ ನೀಡುವುದು ಸಂವಿಧಾನದ ಆಶಯ. ಸರ್ಕಾರವು ರಾಜ್ಯದ ಪ್ರತಿ ಮಗುವಿಗೂ ಉತ್ತಮ ಹಾಗೂ ಗುಣ ಮಟ್ಟದ ಶಿಕ್ಷಣ ನೀಡುವಲ್ಲಿ ಅನೇಕ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಸರ್ಕಾರಿ ಶಾಲೆಗಳಲ್ಲಿ ಓದುವಂತ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಮಧ್ಯಾಹ್ನದ ಉಪಹಾರದೊಂದಿಗೆ ಪೂರಕವಾದ ಪೌಷ್ಠಿಕ ಆಹಾರವನ್ನು ನೀಡಿ ಪ್ರೋತ್ಸಾಹಿಸುತ್ತಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಅವರನ್ನು ಸಮಾಜದ ಉನ್ನತ ಸ್ಥಾನಗಳಿಗೆ ತಲುಪಿಸುವಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯವಾದದ್ದು ಎಂದರು.
ಸರ್ಕಾರವು ರಾಜ್ಯದ ಅನೇಕ ಬಡ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ವಸತಿ ಶಾಲೆಗಳನ್ನು ನಿರ್ಮಿಸಿ ಯಾವ ಮಗುವು ಶಿಕ್ಷಣದಿಂದ ವಂಚಿತರಾಗದಂತೆ ಪ್ರತಿಯೊಂದು ಮಗುವಿಗೂ ಗುಣ ಮಟ್ಟದ ಶಿಕ್ಷಣ ಒದಗಿಸಲಾಗುತ್ತಿದೆ. ಪೋಷಕರು ತಮ್ಮ ಸಮಸ್ಯೆಗಳಿಂದ ಮಕ್ಕಳ ಶಿಕ್ಷಣಕ್ಕೆ ಯಾವುದೇ ದುಷ್ಪರಿಣಾಮ ಉಂಟಾಗದಂತೆ ಗಮನ ಹರಿಸಿ ಅವರನ್ನು ವಸತಿ ಶಾಲೆಗಳಲ್ಲಿ ದಾಖಲಿಸಿ ಉತ್ತಮ ಶಿಕ್ಷಣ ಒದಗಿಸಿ ಕೊಡುವುದು ಪ್ರತಿಯೊಬ್ಬ ಪೋಷಕರ ಜವಾಬ್ದಾರಿಯಾಗಿದೆ ಎಂದ ಅವರು, ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ಕಡೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಆನಂದ್ ಮಾತನಾಡಿ, ವಸತಿ ಶಾಲೆಗಳಿಂದ ಅನೇಕ ಬಡ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಶಿಕ್ಷಣ ಪ್ರತಿಯೊಬ್ಬರ ಹಕ್ಕು. ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸುವುದು ನಮ್ಮ ಜವಾಬ್ದಾರಿಯಾಗಿದೆ. ಗ್ರಾಮ ವ್ಯಾಪ್ತಿಯಲ್ಲಿ ವಸತಿ ಶಾಲೆ ನಿರ್ಮಿಸಿರುವುದರಿಂದ ಕಲಿಕೆಗೆ ಉತ್ತಮ ವಾತಾವರಣ ಸೃಷ್ಠಿಸಿದಂತಾಗಿದೆ. ವಸತಿ ಶಾಲೆಗಳಲ್ಲಿ ಹೆಚ್ಚಿನ ಶಿಸ್ತುಕ್ರಮದಿಂದ ಮಕ್ಕಳನ್ನು ಬೆಳೆಸುವುದರಿಂದ ಮಕ್ಕಳು ಸಮಾಜದ ಉತ್ತಮ ಪ್ರಜೆಗಳಾಗಿ ಹೊರಹೊಮ್ಮುತ್ತಾರೆ. ಸರ್ಕಾರವು ಬಡ ಹಾಗೂ ಹಿಂದುಳಿದ ವರ್ಗದ ಜನರ ಏಳಿಗೆಗಾಗಿ ಹಲವಾರು ಯೋಜನೆಗಳನ್ನು ಜಾರಿ ಮಾಡಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಶ್ರಮಿಸುತ್ತಿದೆ. ಸಂವಿಧಾನದ ಮೂಲಕ ಅವಕಾಶ ವಂಚಿತರು ತಮ್ಮ ಹಕ್ಕುಗಳನ್ನು ಪಡೆಯಲು ಸಹಕಾರಿಯಾಗಿದೆ. ಪ್ರತಿಯೊಬ್ಬರು ಸಂವಿಧಾನವನ್ನು ತಿಳಿದು ತಮಗೆ ದೊರಕಬೇಕಾದ ಹಕ್ಕು, ಸೌಲಭ್ಯಗಳನ್ನು ಪಡೆದುಕೊಂಡು ವಿದ್ಯಾವಂತರಾಗಿ ಎಂದರು.
ಸಭೆಯಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಬೆಂಗಳೂರು ಹಾಗೂ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ, ಭದ್ರಾ ಕಾಡಾ ಶಿವಮೊಗ್ಗ ಅಧ್ಯಕ್ಷರಾದ ಡಾ. ಅಂಶುಮಂತ್, ಕ.ರಾ. ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷರಾದ ಬಿ.ಹೆಚ್. ಹರೀಶ್, ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್., ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಎಸ್. ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮ್ಟೆ, ತರೀಕೆರೆ ಉಪವಿಭಾಗಾಧಿಕಾರಿ ಕಾಂತರಾಜು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಜನ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.