ಶಿವಮೊಗ್ಗ ; ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಬಲಿಯಾಗಿರುವ ದುರ್ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಬಳ್ಳಾರಿ ಮೂಲದ ವಿದ್ಯಾರ್ಥಿ ಗಣೇಶ್ (21) ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೃತ ಗಣೇಶ್ ಶಿವಮೊಗ್ಗದ ಪೆಸಿಟ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದು, ನಗರದ ವಾಜಪೇಯಿ ಬಡಾವಣೆಯಲ್ಲಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ಹಾಸ್ಟೆಲ್‌ನಲ್ಲಿ ವಾಸವಾಗಿದ್ದನು.
ಇಂದು ಬೆಳಿಗ್ಗೆ ಹಾಸ್ಟೆಲ್‌ನ ಬಾತ್ ರೂಮ್‌ಗೆ ತೆರಳಿದ ವೇಳೆ ಅಚಾನಕ್ ಕುಸಿದು ಬಿದ್ದಿರುವುದು ಗಮನಕ್ಕೆ ಬಂದಿದೆ. ತಕ್ಷಣ ಆತನನ್ನು ಆಸ್ಪತ್ರೆಗೆ ಸಾಗಿಸಲು ಸಹಪಾಠಿಗಳು ಹಾಗೂ ಹಾಸ್ಟೆಲ್ ಸಿಬ್ಬಂದಿ ಮುಂದಾದರೂ, ಮಾರ್ಗ ಮಧ್ಯೆಯಲ್ಲೇ ಗಣೇಶ್‌ನ ಪ್ರಾಣ ಪಕ್ಷಿ ಹಾರಿಹೋಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಹೃದಯಾಘಾತವೇ ಸಾವಿಗೆ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ.
ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಗಣೇಶ್ 5ನೇ ವರ್ಷದ ಇಂಜಿನಿಯರಿಂಗ್ ಶಿಕ್ಷಣ ಪಡೆಯುತ್ತಿದ್ದು, ಅಕಾಲಿಕ ನಿಧನವು ಕಾಲೇಜು ವಲಯ ಹಾಗೂ ವಿದ್ಯಾರ್ಥಿ ಸಮೂಹದಲ್ಲಿ ತೀವ್ರ ದುಃಖ ಮೂಡಿಸಿದ್ದು, ಇತ್ತೀಚಿನ ದಿನಗಳಲ್ಲಿ ಯುವ ಸಮೂಹದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪವಿತ್ರಾನಂದನ್ ಪರಿಸ್ಥಿತಿಯನ್ನು ಪರಿಶೀಲಿಸಿ, ಮೃತ ವಿದ್ಯಾರ್ಥಿಯ ಸಹಪಾಠಿಗಳು ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಹಾಗೂ ನೆರೆದಿದ್ದ ವಿದ್ಯಾರ್ಥಿಗಳಿಗೆ ಆರೋಗ್ಯದ ಬಗ್ಗೆ ಕಾಣಿಸಿ ಕಾಳಜಿ ವಹಿಸುವಂತೆ ಕೇಳಿಕೊಂಡರು. ಈ ದುಃಖದ ಘಳಿಗೆಯಲ್ಲಿ ಧೈರ್ಯ ತುಂಬಿದರು. ಅಗತ್ಯವಿರುವ ಎಲ್ಲಾ ಸಹಕಾರವನ್ನು ಇಲಾಖೆ ವತಿಯಿಂದ ಒದಗಿಸಲಾಗುವುದೆಂದು ಅವರು ಭರವಸೆ ನೀಡಿದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





