ಹೊಸನಗರ ; ನಾಲ್ವರು ಅಂತರ್ ಜಿಲ್ಲಾ ಮನೆಗಳ್ಳರನ್ನು ಬಂಧಿಸುವಲ್ಲಿ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತರಿಂದ ಸುಮಾರು 7.90 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಕ್ಕೆ ಪಡೆಯಲಾಗಿದೆ.
ಕಳೆದ 2025ರ ಡಿ. 27ರಂದು ಹೊಸನಗರ ತಾಲೂಕಿನ ನಾಗೋಡಿ (ನಿಟ್ಟೂರು) ಗ್ರಾಮದ ನಿವಾಸಿ ರಾಜೇಂದ್ರ ಶೆಟ್ಟಿ ಎಂಬುವವರ ಮನೆಯಲ್ಲಿ ಈ ಕಳವು ನಡೆದಿತ್ತು. ಮನೆಯವರು ಇಲ್ಲದ ಸಮಯ ನೋಡಿ ಮುಂಬಾಗಿಲ ಬೀಗ ಮುರಿದು ಒಳನುಗ್ಗಿದ್ದ ಕಳ್ಳರು, ಲಾಕರ್‌ನಲ್ಲಿದ್ದ ಬೆಲೆಬಾಳುವ ಆಭರಣಗಳನ್ನು ದೋಚಿ ಪರಾರಿಯಾಗಿದ್ದರು. ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದ ಬೆನ್ನತ್ತಿದ ಪಿಎಸ್ಐ ಶಿವಾನಂದ ಕೋಳಿ ನೇತೃತ್ವದ ವಿಶೇಷ ತಂಡವು, ತಾಂತ್ರಿಕ ವಿಶ್ಲೇಷಣೆ ಹಾಗೂ ಬೆರಳಚ್ಚು ತಜ್ಞರ ನೆರವಿನಿಂದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ.
ಬಂಧಿತರನ್ನು ಭಟ್ಕಳ ಮೂಲದ ಮಹಮ್ಮದ್ ಇಮ್ರಾನ್ ಇಕ್ಕೇರಿ (25), ಮಹಮ್ಮದ್ ಅಖೀಲ್ (24), ಅಮೀರ್ ಹಸನ್ ಬ್ಯಾರಿ (29) ಮತ್ತು ಬೇಬಿ ಹಾಜಿರ (55) ಎಂದು ಗುರುತಿಸಲಾಗಿದೆ.
ಬಂಧಿತರಿಂದ ಒಟ್ಟು 3.87 ಲಕ್ಷ ರೂ. ಮೌಲ್ಯದ 30 ಗ್ರಾಂ ತೂಕದ ಚಿನ್ನದ ನೆಕ್ಲಸ್, 93 ಸಾವಿರ ರೂ. ಮೌಲ್ಯದ 6 ಗ್ರಾಂ ಬ್ರೇಸ್‌ಲೆಟ್, 50 ಗ್ರಾಂ ಬೆಳ್ಳಿ ಪದಾರ್ಥಗಳು, ಮೊಬೈಲ್ ಫೋನ್ ಹಾಗೂ ಕಳ್ಳತನಕ್ಕೆ ಬಳಸಿದ್ದ ಇಟಿಯೋಸ್ ಕಾರನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





