HOSANAGARA | ಬೆಲೆ ಏರಿಕೆ ಖಂಡಿಸಿ ಬಿಜೆಪಿ (BJP) ನಡೆಸುತ್ತಿರುವ ಪ್ರತಿಭಟನೆ ಹಾಸ್ಯಾಸ್ಪದ ಸಂಗತಿಯಾಗಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ (Beluru Gopalakrishna) ಹೇಳಿದ್ದಾರೆ.
ಇಲ್ಲಿನ ಶಾಸಕರ ಕಛೇರಿಯಲ್ಲಿ ಅವರು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿದಾಗ ಬಿಜೆಪಿ ಕಾರ್ಯಕರ್ತರು ಮೌನ ವಹಿಸಿದ್ದರು.
ಅಂದು ಪೆಟ್ರೋಲ್ ಉತ್ಪನ್ನಗಳು ಏಕಾಏಕಿ 10 ರೂ. ಏರಿಸಲಾಗಿತ್ತು. 400 ರೂ. ಇದ್ದ ಅಡುಗೆ ಅನಿಲ ಬೆಲೆ ಸಾವಿರ ರೂ. ದಾಟಿದೆ. ಬಿಜೆಪಿ ಕಾರ್ಯಕರ್ತರಿಗೆ ನಿಜವಾದ ಜನಪರ ಕಾಳಜಿ ಇದ್ದಿದ್ದರೆ, ಆ ಸಮಯದಲ್ಲಿಯೂ ವಿರೋಧ ವ್ಯಕ್ತಪಡಿಸಬೇಕಿತ್ತು. ಈಗ ರಾಜ್ಯ ಸರ್ಕಾರ ಅಭಿವೃದ್ಧಿ ಕಾಮಗಾರಿಗೆ ಬಳಸಿಕೊಳ್ಳಲು ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ತೆರಿಗೆ ಏರಿಸುತ್ತಿದ್ದಂತೆ ಬಿಜೆಪಿಯವರು ಬೀದಿಗಿಳಿದಿರುವುದು ವಿಚಿತ್ರವಾಗಿದೆ ಎಂದರು.
ವಿರೋಧ ಪಕ್ಷಗಳು ರಾಜ್ಯದ ಬೊಕ್ಕಸ ಖಾಲಿಯಾಗಿದೆ ಎಂದು ಅಪಪ್ರಚಾರ ನಡೆಸುತ್ತಿದ್ದಾರೆ. ಸುಂಕ ಏರಿಕೆಯಿಂದ ದೊರೆಯುವ ಹೆಚ್ಚುವರಿ ಆದಾಯ ರಾಜ್ಯದ ಅಭಿವೃದ್ಧಿಗೆ ಬಳಕೆಯಾಗಲಿದೆ. ಅನ್ಯ ರಾಜ್ಯಗಳಲ್ಲಿನ ದರಕ್ಕಿಂತ ನಮ್ಮಲ್ಲಿ ಕಡಿಮೆ ದರವಿತ್ತು. ಅಲ್ಲದೇ ಗ್ಯಾರಂಟಿ ಯೋಜನೆಗಳಿಗಾಗಿ ತೆರಿಗೆ ಏರಿಸಿಲ್ಲ. ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ. ಈ ಬಗ್ಗೆ ಸಾರ್ವಜನಿಕರಿಗೆ ಯಾವುದೇ ಅನುಮಾನ ಬೇಡ. ಬಿಜೆಪಿಯವರಿಗೆ ಹೇಗಾದರೂ ಮಾಡಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕಾಗಿದೆ. ಅದಕ್ಕಾಗಿ ಇನ್ನಿಲ್ಲದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.
ಈ ಪತ್ರಿಕಾಘೋಷ್ಠಿಯಲ್ಲಿ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು, ಕಾಂಗ್ರೆಸ್ ಕಾರ್ಯಕರ್ತರು ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.