ಸಾಗರ : ರೋಗಿಗಳಿಗೆ ಸರಿಯಾಗಿ ಸ್ಪಂದಿಸದೆ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲೆ ಸಾಗರ ಉಪವಿಭಾಗೀಯ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞ ಡಾ. ಎಂ.ಬಿ. ನಾಗೇಂದ್ರಪ್ಪ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.
ಕಳೆದ ಸುಮಾರು 5 ವರ್ಷಗಳಿಂದ ಸಾಗರ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರ ವಿರುದ್ಧ ರೋಗಿಗಳಿಗೆ ಸರಿಯಾಗಿ ಸ್ಪಂದಿಸದ ಬಗ್ಗೆ ಸಾಕಷ್ಟು ಸಾರ್ವಜನಿಕ ದೂರುಗಳು ಹಾಗೂ ಹಲವು ಪೊಲೀಸ್ ಪ್ರಕರಣಗಳು ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ವೈದ್ಯರನ್ನು ಬೇರೆ ಜಿಲ್ಲೆಗೆ ವರ್ಗಾವಣೆ ಮಾಡುವಂತೆ ಜೂನ್ ತಿಂಗಳಲ್ಲೇ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿದ್ದರು.
ಇತ್ತೀಚೆಗೆ ಗಂಗಮ್ಮ ಎಂಬುವವರು ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಜಿಲ್ಲಾ ಆರೋಗ್ಯಾಧಿಕಾರಿಗಳು (DHO) ವಿಚಾರಣೆ ನಡೆಸಿದ್ದರು. ವಿಚಾರಣಾ ವರದಿಯಲ್ಲಿ ವೈದ್ಯರು ಸರ್ಕಾರಿ ಸಮಯದಲ್ಲಿ ಸೂಕ್ತ ಚಿಕಿತ್ಸೆ ನೀಡಲು ವಿಫಲರಾಗಿದ್ದಾರೆ ಮತ್ತು ತೊಂದರೆಗಳಿಗೆ (Complications) ಕಾರಣವಾಗಿದ್ದಾರೆ ಎಂಬ ಅಂಶ ತಿಳಿದುಬಂದಿತ್ತು. ಜೊತೆಗೆ, ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ “ಇದು ಸಾಗರದ ವೈದ್ಯ ಡಾ. ನಾಗೇಂದ್ರಪ್ಪ ಎಡವಟ್ಟಿನ ಕಥೆ” ಎಂಬ ಶೀರ್ಷಿಕೆಯಡಿ ವಿಡಿಯೋ ಕೂಡ ವೈರಲ್ ಆಗಿ ಸಾರ್ವಜನಿಕರ ಟೀಕೆಗೆ ಗುರಿಯಾಗಿತ್ತು.

ಈ ಎಲ್ಲಾ ದೂರುಗಳು ಮತ್ತು ವರದಿಗಳನ್ನು ಆಧರಿಸಿ, ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಡಾ. ನಾಗೇಂದ್ರಪ್ಪ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಾಗರ ಆಸ್ಪತ್ರೆಯ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ. ತಕ್ಷಣವೇ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ‘ಆರೋಗ್ಯ ಸೌಧ’ದಲ್ಲಿರುವ ಆಯುಕ್ತಾಲಯಕ್ಕೆ ವರದಿ ಮಾಡಿಕೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಅಕ್ಟೋಬರ್ 07 ರಂದು ಅಧಿಕೃತ ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ವೈದ್ಯರನ್ನು ತಕ್ಷಣವೇ ಕರ್ತವ್ಯದಿಂದ ಬಿಡುಗಡೆ ಮಾಡಿ ವರದಿ ಸಲ್ಲಿಸುವಂತೆ ಶಿವಮೊಗ್ಗ ಡಿಎಚ್‌ಒ ಅವರಿಗೂ ಸೂಚಿಸಲಾಗಿದೆ.

