Hosanagara

ಇತಿಹಾಸ ಅರಿಯದವನು ಇತಿಹಾಸ ಸೃಷ್ಟಿಸಲಾರ : ಹಾಲಪ್ಪ ಸಂಕೂರು

InShot 20260815 182417570

ರಿಪ್ಪನ್‌ಪೇಟೆ : ದೇಶಾದ್ಯಂತ 80ನೇ ಸ್ವಾತಂತ್ರ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆದರೆ ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟ, ತ್ಯಾಗ ಮತ್ತು ಬಲಿದಾನಗಳ ಇತಿಹಾಸವನ್ನು ಅರಿಯದಿದ್ದರೆ ಸ್ವಾತಂತ್ರ್ಯದ ಮಹತ್ವವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಭಾರ ಪ್ರಾಚಾರ್ಯ ಹಾಲಪ್ಪ ಎಂ. ಸಂಕೂರು ಹೇಳಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಕಾಲೇಜ್‌ನಲ್ಲಿ ಶನಿವಾರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸುಮಾರು ಒಂದು ಶತಮಾನ ಕಾಲ ನಡೆದ ಉಗ್ರ ಹಾಗೂ ಅಹಿಂಸಾತ್ಮಕ ಹೋರಾಟಗಳ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಮತ್ತು ಹೋರಾಟದ ಹಾದಿಯನ್ನು ಇಂದಿನ ಯುವಜನತೆ ಅರಿತುಕೊಳ್ಳಬೇಕು. ಇತಿಹಾಸದ ಅರಿವಿದ್ದಾಗ ಮಾತ್ರ ಅದರ ನೆಲೆಗಟ್ಟಿನ ಮೇಲೆ ಹೊಸ ಇತಿಹಾಸವನ್ನು ಸೃಷ್ಟಿಸಲು ಸಾಧ್ಯ ಎಂದರು.

ದೇಶ ಭ್ರಷ್ಟಾಚಾರ, ನಶೆ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯದಿಂದ ಮುಕ್ತವಾದಾಗ ಮಾತ್ರ ಸ್ವಾತಂತ್ರ್ಯದ ನಿಜವಾದ ಆಶಯ ಸಾಕಾರಗೊಳ್ಳುತ್ತದೆ. ಅಂದು ಮಾತ್ರ ಸ್ವಾತಂತ್ರ್ಯಕ್ಕಾಗಿ ತ್ಯಾಗ ಮಾಡಿದ ಮಹನೀಯರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಹೇಳಿದರು.

ಶಿಕ್ಷಣವು ಕೇವಲ ಅಂಕ ಗಳಿಕೆಗೆ ಸೀಮಿತವಾಗಬಾರದು. ಅದು ಜೀವನದ ಸವಾಲುಗಳನ್ನು ಎದುರಿಸುವ ಸಾಮರ್ಥ್ಯವನ್ನು ಬೆಳೆಸಬೇಕು. ಬದುಕಿನ ಸಂಕೀರ್ಣ ಸಂದರ್ಭಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವ ಶಕ್ತಿ ನೀಡಿದಾಗ ಮಾತ್ರ ಶಿಕ್ಷಣಕ್ಕೆ ನಿಜವಾದ ಅರ್ಥ ಬರುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಹೋರಾಟಗಾರರ ಕೊಡುಗೆ ಸ್ಮರಿಸಿದ ಪ್ರಕಾಶ್

ಕಾರ್ಯಕ್ರಮದ ಪ್ರಧಾನ ಭಾಷಣಕಾರರಾಗಿದ್ದ ಇತಿಹಾಸ ಉಪನ್ಯಾಸಕ ಪ್ರಕಾಶ್, ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಳ್ಳದ ಅನೇಕ ಅನಾಮಿಕ ಹಾಗೂ ಅಸಂಘಟಿತ ಹೋರಾಟಗಾರರ ಕೊಡುಗೆಯನ್ನು ವಿವರಿಸಿದರು. ಅನ್ನ-ನೀರು, ನೆಲೆ ಯಾವುದನ್ನೂ ಲೆಕ್ಕಿಸದೆ ಕಾಡುಮೇಡುಗಳಲ್ಲಿ ಬದುಕುತ್ತಾ ತಮ್ಮದೇ ಆದ ರೀತಿಯಲ್ಲಿ ಹೋರಾಟ ರೂಪಿಸಿ, ಸ್ವಾತಂತ್ರ್ಯದ ಕಿಚ್ಚನ್ನು ದೇಶದಾದ್ಯಂತ ವಿಸ್ತರಿಸಿದ ಹೋರಾಟಗಾರರ ತ್ಯಾಗವನ್ನು ಸ್ಮರಿಸಿದರು.

ಇತಿಹಾಸದ ಪುಟಗಳಲ್ಲಿ ಹೆಚ್ಚು ಕಾಣಿಸಿಕೊಳ್ಳದ ಇಂತಹ ಅನೇಕ ಮಹನೀಯರ ಕೊಡುಗೆಯೂ ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹತ್ವದ್ದಾಗಿದೆ ಎಂದು ಹೇಳುವ ಮೂಲಕ ವಿದ್ಯಾರ್ಥಿಗಳಲ್ಲಿ ಸ್ವಾತಂತ್ರ್ಯ ಹೋರಾಟದ ಕುರಿತು ಅರಿವು ಮೂಡಿಸಿದರು.

ಈ ಸಂದರ್ಭದಲ್ಲಿ ಬಾಲ್ಯವಿವಾಹ, ಪೋಕ್ಸೋ ಕಾಯ್ದೆ, ಮಾದಕ ವಸ್ತುಗಳ ಬಳಕೆ ಸೇರಿದಂತೆ ವಿವಿಧ ಸಾಮಾಜಿಕ ಪಿಡುಗುಗಳ ವಿರುದ್ಧ ಜಾಗೃತಿ ಮೂಡಿಸುವ ಪ್ರಮಾಣವಚನ ಬೋಧಿಸಲಾಯಿತು. ಕಾರ್ಯಕ್ರಮವನ್ನು ಕಾಲೇಜಿನ ವಿದ್ಯಾರ್ಥಿಗಳೇ ನಿರ್ವಹಿಸಿದ್ದು ವಿಶೇಷವಾಗಿತ್ತು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>