ಶಿವಮೊಗ್ಗ/ಚಿಕ್ಕಮಗಳೂರು ; ಜಿಲ್ಲೆಯ ಮಲೆನಾಡು ಭಾಗದ ಹಲವೆಡೆ ಶುಕ್ರವಾರ ಬೆಳಿಗ್ಗೆಯಿಂದ ಧಾರಾಕಾರ ಮಳೆ (Heavy Rain) ಆರಂಭವಾಗಿದ್ದು, ಬಿರುಗಾಳಿಯೊಂದಿಗೆ ಎಡಬಿಡದೆ ಸುರಿಯುತ್ತಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕೊಟ್ಟಿಗೆಹಾರ, ಮುಳ್ಳಯ್ಯನಗಿರಿ, ಕುದುರೆಮುಖ, ಕಳಸ, ಶೃಂಗೇರಿ, ಕೆರೆಕಟ್ಟೆ, ಬಾಳೆಹೊನ್ನೂರು, ಜಯಪುರ, ಕೊಪ್ಪ, ಆಲ್ದೂರು, ಎನ್.ಆರ್.ಪುರ, ಚಿಕ್ಕಮಗಳೂರು ನಗರ, ಕೆಮ್ಮಣ್ಣುಗುಂಡಿ ಸುತ್ತಮುತ್ತ ಮಳೆ ಸುರಿಯುತ್ತಿದೆ.
ಮಲೆನಾಡು ಭಾಗದಲ್ಲಿ ಮನೆಯಿಂದ ಜನ ಹೊರ ಬರಲು ಸಾಧ್ಯವಾಗದ ಸ್ಥಿತಿ ಇದೆ. ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ವಾಹನ ಸಂಚಾರ ದುಸ್ತರವಾಗಿದೆ. ಬೆಳಿಗ್ಗೆಯಿಂದ ಸುರಿದ ಮಳೆಗೆ ಚಿಕ್ಕಮಗಳೂರು ನಗರದ ಆಟದ ಮೈದಾನದಲ್ಲಿ ಮಳೆ ನೀರು ತುಂಬಿಕೊಂಡಿದೆ.

ಇತ್ತ ಶಿವಮೊಗ್ಗ ಜಿಲ್ಲೆಯ ಹೊಸನಗರ, ಸಾಗರ ಮತ್ತು ತೀರ್ಥಹಳ್ಳಿ ತಾಲ್ಲೂಕಿನ ಹಲವೆಡೆ ಇಂದು ಬೆಳಗ್ಗೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿಯ ಮೂರು ಜಿಲ್ಲೆಗಳು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮೇ 24ರ ನಾಳೆಯಿಂದ ಚಿಕ್ಕಮಗಳೂರು, ಶಿವಮೊಗ್ಗಕ್ಕೆ ಮುಂದಿನ ಎರಡು ದಿನಕ್ಕೆ ಹಾಗೂ ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಮುಂದಿನ 24 ಗಂಟೆಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.