ಹೊಸನಗರ

ಹೊಸನಗರ ಸರ್ಕಾರಿ ಆಸ್ಪತ್ರೆಯಲ್ಲಿ ಕುಡುಕ ಆ್ಯಂಬುಲೆನ್ಸ್ ಚಾಲಕನ ಕರ್ಮಕಾಂಡ; ಮದ್ಯದ ಅಡ್ಡೆಯಾದ ವಿಶ್ರಾಂತಿ ಕೊಠಡಿ!

ಹೊಸನಗರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆ್ಯಂಬುಲೆನ್ಸ್ ಚಾಲಕನೊಬ್ಬ ಕಂಠಪೂರ್ತಿ ಮದ್ಯ ಸೇವಿಸಿ ಕರ್ತವ್ಯ ನಿರ್ವಹಿಸುತ್ತಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದ್ದು, ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Hosanagara hospital ambulance

ಹೊಸನಗರ: ತುರ್ತು ಸಂದರ್ಭದಲ್ಲಿ ರೋಗಿಗಳ ಪಾಲಿಗೆ ಸಂಜೀವಿನಿಯಾಗಬೇಕಿದ್ದ ಸರ್ಕಾರಿ ಆಸ್ಪತ್ರೆಯ ಆ್ಯಂಬುಲೆನ್ಸ್ ಸೇವೆಯೇ ಈಗ ರೋಗಿಗಳ ಪ್ರಾಣಕ್ಕೆ ಸಂಚಕಾರ ತರುವಂತಾಗಿದೆ. ಹೊಸನಗರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆ್ಯಂಬುಲೆನ್ಸ್ ಚಾಲಕನೊಬ್ಬ ಕಂಠಪೂರ್ತಿ ಮದ್ಯ ಸೇವಿಸಿ ಕರ್ತವ್ಯ ನಿರ್ವಹಿಸುತ್ತಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದ್ದು, ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

WhatsApp Group Join Now
Telegram Group Join Now
Instagram Group Join Now

ಬಾರ್ ಆಗಿ ಬದಲಾದ ವಿಶ್ರಾಂತಿ ಕೊಠಡಿ:

ಆಸ್ಪತ್ರೆಯ ಆವರಣದಲ್ಲಿರುವ ಚಾಲಕರ ವಿಶ್ರಾಂತಿ ಕೊಠಡಿಯು ಅಕ್ಷರಶಃ ಅನಧಿಕೃತ ಬಾರ್ ಆಗಿ ಮಾರ್ಪಟ್ಟಿದೆ. ಕೊಠಡಿಯ ಮೂಲೆ ಮೂಲೆಯಲ್ಲೂ ರಾಶಿ ರಾಶಿ ಖಾಲಿ ಮದ್ಯದ ಬಾಟಲಿಗಳು, ಪ್ಲಾಸ್ಟಿಕ್ ಲೋಟಗಳು ಹಾಗೂ ತಿಂಡಿಯ ಪೊಟ್ಟಣಗಳು ಪತ್ತೆಯಾಗಿವೆ. ಚಾಲಕ ಗಿರೀಶ್ ಎಂಬಾತ ಕರ್ತವ್ಯದ ಅವಧಿಯಲ್ಲೇ ಆಸ್ಪತ್ರೆಯ ಆವರಣದಲ್ಲಿ ರಾಜಾರೋಷವಾಗಿ ಮದ್ಯ ಸೇವಿಸಿ ಮತ್ತೇರುತ್ತಿರುವ ದೃಶ್ಯಗಳು ಸಾರ್ವಜನಿಕರ ಎದುರು ಬಯಲಾಗಿವೆ.

ರೋಗಿಗಳ ಜೀವದ ಜೊತೆ ಚೆಲ್ಲಾಟ:

ಮಲೆನಾಡಿನ ಹೃದಯ ಭಾಗವಾದ ಹೊಸನಗರದ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದ ಬಡ ರೋಗಿಗಳು ಮತ್ತು ಗರ್ಭಿಣಿಯರು ತುರ್ತು ಚಿಕಿತ್ಸೆಗಾಗಿ ಇದೇ ಆ್ಯಂಬುಲೆನ್ಸ್ ಅನ್ನು ಅವಲಂಬಿಸಿದ್ದಾರೆ. ಅಲ್ಲದೆ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರೋಗಿಗಳನ್ನು ಕರೆದೊಯ್ಯುವ ಜವಾಬ್ದಾರಿಯೂ ಈತನ ಮೇಲಿದೆ. ಆದರೆ, ಚಾಲಕ ಗಿರೀಶ್ ಹಗಲು-ರಾತ್ರಿ ಎನ್ನದೆ ಪಾನಮತ್ತನಾಗಿ ವಾಹನ ಚಲಾಯಿಸುತ್ತಿರುವುದು ರೋಗಿಗಳು ಮತ್ತು ಅವರ ಕುಟುಂಬಸ್ಥರಲ್ಲಿ ತೀವ್ರ ಭೀತಿ ಹುಟ್ಟಿಸಿದೆ. “ಚಾಲಕನ ಈ ಬೇಜವಾಬ್ದಾರಿ ವರ್ತನೆಯಿಂದ ದಾರಿಯಲ್ಲಿ ಏನಾದರೂ ಅನಾಹುತ ಸಂಭವಿಸಿದರೆ ಯಾರು ಹೊಣೆ?” ಎಂದು ಸ್ಥಳೀಯರು ಕಿಡಿಕಾರಿದ್ದಾರೆ.

ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಕಿಡಿ:

ಸರ್ಕಾರಿ ಆಸ್ಪತ್ರೆಯಂತಹ ಸೂಕ್ಷ್ಮ ಪ್ರದೇಶದಲ್ಲಿ, ಅದರಲ್ಲೂ ಆಸ್ಪತ್ರೆಯ ಆವರಣದಲ್ಲೇ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಮದ್ಯದ ಬಾಟಲಿಗಳು ಪತ್ತೆಯಾಗಿದ್ದರೂ ಆಸ್ಪತ್ರೆ ಆಡಳಿತ ಮಂಡಳಿ ಮತ್ತು ವೈದ್ಯಾಧಿಕಾರಿಗಳು ಏನು ಮಾಡುತ್ತಿದ್ದರು ಎಂಬ ಪ್ರಶ್ನೆ ಎದ್ದಿದೆ. “ಅಧಿಕಾರಿಗಳ ಮೂಗಿನ ನೇರಕ್ಕೇ ಇಂತಹ ಕೃತ್ಯ ನಡೆಯುತ್ತಿದ್ದರೂ ಕಣ್ಮುಚ್ಚಿ ಕುಳಿತಿರುವುದು ಅವರ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ” ಎಂದು ಸಾರ್ವಜನಿಕರು ದೂರಿದ್ದಾರೆ.

ವಜಾಗೊಳಿಸಲು ಸಾರ್ವಜನಿಕರ ಆಗ್ರಹ:

ರೋಗಿಗಳ ಸುರಕ್ಷತೆ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ, ಕರ್ತವ್ಯ ಲೋಪ ಎಸಗಿರುವ ಚಾಲಕ ಗಿರೀಶ್‌ನನ್ನು ತಕ್ಷಣವೇ ಸೇವೆಯಿಂದ ಅಮಾನತುಗೊಳಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಮತ್ತು ವಿವಿಧ ಸಂಘಟನೆಗಳು ಒತ್ತಾಯಿಸಿವೆ. ಸದ್ಯ ಈ ಪ್ರಕರಣ ತಾಲೂಕಿನಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ತಾಲೂಕು ವೈದ್ಯಾಧಿಕಾರಿಗಳು (THO) ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳು (DHO) ಈ ಕುಡುಕ ಚಾಲಕನ ವಿರುದ್ಧ ಯಾವ ರೀತಿಯ ಕಠಿಣ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]