ಶಿವಮೊಗ್ಗ: ಹೊಸನಗರ ತಾಲೂಕಿನ ಮಾಸ್ತಿಕಟ್ಟೆ ಸಮೀಪ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅಪಘಾತದ ವೇಳೆ ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದು, ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.
ಮಣಿಪಾಲದಿಂದ ಸಾಗರದ ಕಡೆಗೆ ತೆರಳುತ್ತಿದ್ದ ಕಾರು ನಗರ–ಮಾಸ್ತಿಕಟ್ಟೆ ಮಾರ್ಗದ ನೂಲಿಗೇರಿ ಬಳಿ ತಲುಪಿದಾಗ ಕಾಡುಪ್ರಾಣಿಯೊಂದು ಏಕಾಏಕಿ ರಸ್ತೆಗೆ ಬಂದಿತ್ತೆಂದು ತಿಳಿದುಬಂದಿದೆ. ಪ್ರಾಣಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಚಾಲಕ ಕಾರನ್ನು ತಿರುಗಿಸಿದಾಗ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಕಾರಿನ ಮೇಲೆಯೇ ಬಿದ್ದಿದೆ. ಕಾರಿನಲ್ಲಿ ಸಾಗರ ನಿವಾಸಿ ಪ್ರಕಾಶ್ ಹಾಗೂ ಮೂವರು ಮಕ್ಕಳು ಸೇರಿದಂತೆ ಒಟ್ಟು ಐವರು ಇದ್ದರು. ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಅಪಘಾತದ ಮಾಹಿತಿ ತಿಳಿದ ನಂತರ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಶಿವಾನಂದ ಕೋಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

