ಹೊಸನಗರ : ಮಲೆನಾಡು ಭಾಗದಲ್ಲಿ ಈ ಬಾರಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವುದರಿಂದ, ಮುಂಬರುವ ದಿನಗಳಲ್ಲಿ ಎದುರಾಗಬಹುದಾದ ಕುಡಿಯುವ ನೀರಿನ ಸಮಸ್ಯೆಯನ್ನು ತಡೆಯಲು ಅಗತ್ಯ ಮುಂಜಾಗ್ರತೆ ವಹಿಸುವಂತೆ ಹೊಸನಗರ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ (ಇಒ) ನರೇಂದ್ರಕುಮಾರ್ ತಾಲೂಕಿನ 30 ಗ್ರಾಮ ಪಂಚಾಯಿತಿಗಳ ಪಿಡಿಒಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರದ ಪರಿಸ್ಥಿತಿ ದಟ್ಟವಾಗಿರುವುದರಿಂದ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಂದ ವರದಿ ಕೇಳಿದ್ದಾರೆ. ಹೀಗಾಗಿ, ಹಳ್ಳಿಗಳಲ್ಲಿ ಯಾವುದೇ ನೀರಿನ ಸಮಸ್ಯೆ ಎದುರಾದರೂ ತಕ್ಷಣವೇ ಟಾಸ್ಕ್ ಫೋರ್ಸ್ ಸಮಿತಿಯ ಗಮನಕ್ಕೆ ತರಬೇಕು. ನಿರ್ಲಕ್ಷ್ಯ ತೋರಿ ಕೊನೆ ಗಳಿಗೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾದರೆ ಅದಕ್ಕೆ ಆಯಾ ಗ್ರಾ.ಪಂ. ಅಧಿಕಾರಿಗಳೇ ನೇರ ಹೊಣೆಯಾಗಲಿದ್ದಾರೆ ಎಂದು ಎಚ್ಚರಿಸಿದರು.
ಸ್ಥಳೀಯ ವಾಸ್ತವ್ಯ ಕಡ್ಡಾಯ :
ಪ್ರತಿಯೊಬ್ಬ ಪಿಡಿಒ ಹಾಗೂ ಗ್ರಾ.ಪಂ. ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ಕಾರ್ಯಕ್ಷೇತ್ರದ ಹಳ್ಳಿಗಳಲ್ಲೇ ವಾಸವಿರಬೇಕು. ಜನರಿಗೆ ಯಾವುದೇ ರೀತಿಯ ಸಮಸ್ಯೆಯಾದರೂ ತಕ್ಷಣವೇ ಮೇಲಧಿಕಾರಿಗಳಿಗೆ ಮಾಹಿತಿ ನೀಡಬೇಕು. ಸಣ್ಣ ಲೋಪವಾದರೂ ಇಡೀ ತಾಲೂಕಿಗೆ ಕೆಟ್ಟ ಹೆಸರು ಬರುವುದರಿಂದ, ಎಲ್ಲರೂ ಅತ್ಯಂತ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಅವರು ನಿರ್ದೇಶನ ನೀಡಿದರು.

