ಹೊಸನಗರ: ಕೋಡೂರು ಬ್ಲಾಸಮ್ ಅಕಾಡೆಮಿ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಕು. ಚುಕ್ಕಿ ಎಂ. ಬ್ಯಾಣದ 2026-27ನೇ ಸಾಲಿನ ರಾಜ್ಯ ಮಟ್ಟದ ‘ಕಲಾ ಶ್ರೀ’ ಪ್ರಶಸ್ತಿಗೆ ಭಾಜನಳಾಗಿದ್ದಾಳೆ.
ಕರ್ನಾಟಕ ಸರ್ಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಇಲಾಖೆ ಹಾಗೂ ಬೆಂಗಳೂರಿನ ಜವಾಹರ ಬಾಲ ಭವನ ಸೊಸೈಟಿ ಜಂಟಿ ಸಹಯೋಗದಲ್ಲಿ ನವೆಂಬರ್ 24 ಮತ್ತು 25ರಂದು ಬೆಂಗಳೂರಿನ ಬಾಲ ಭವನದಲ್ಲಿ ‘ಕಲಾ ಶ್ರೀ ಶಿಬಿರ 2026-27’ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಶಿವಮೊಗ್ಗ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಚುಕ್ಕಿ, ‘ಸೃಜನಾತ್ಮಕ ಕಲೆ ಪ್ರದರ್ಶನ’ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾಳೆ.
ಸ್ಪರ್ಧೆಯಲ್ಲಿ ‘ಲವ-ಕುಶ’ ಯಕ್ಷಗಾನ ಪ್ರಸಂಗದ ‘ಪೂರ್ವಂ ರಾಮಂ’ ಪದ್ಯವನ್ನು ಕೇವಲ ಮೂರು ನಿಮಿಷಗಳಲ್ಲಿ ಮನೋಜ್ಞವಾಗಿ ಅಭಿನಯಿಸಿ ತೀರ್ಪುಗಾರರ ಮೆಚ್ಚುಗೆಗೆ ಪಾತ್ರಳಾದಳು. ಇದಕ್ಕೂ ಮುನ್ನ, ನವೆಂಬರ್ 14ರಂದು ಮಕ್ಕಳ ದಿನಾಚರಣೆ ಅಂಗವಾಗಿ ಶಿವಮೊಗ್ಗ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲ ಭವನ ಸಮಿತಿ ವತಿಯಿಂದ ನಡೆದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಳು.
ಸಮಾರೋಪ ಸಮಾರಂಭದಲ್ಲಿ ಅಕಾಡೆಮಿ ಅಧ್ಯಕ್ಷ ಬಿ. ಆರ್. ನಾಯ್ಡು ಹಾಗೂ ಆಡಳಿತಾಧಿಕಾರಿ ಧನಲಕ್ಷ್ಮೀ ಸಾಂಕೇತಿಕವಾಗಿ ಪ್ರಶಸ್ತಿ ಪ್ರದಾನ ಮಾಡಿದರು. ಡಿಸೆಂಬರ್ ತಿಂಗಳಲ್ಲಿ ಮುಖ್ಯಮಂತ್ರಿ, ಸಂಬಂಧಪಟ್ಟ ಸಚಿವರು ಹಾಗೂ ಶಾಸಕರ ಸಮ್ಮುಖದಲ್ಲಿ ಅಧಿಕೃತ ಪ್ರಶಸ್ತಿ ವಿತರಣಾ ಸಮಾರಂಭ ಹಮ್ಮಿಕೊಳ್ಳಲಾಗುವುದು ಎಂದು ಅವರು ಇದೇ ವೇಳೆ ತಿಳಿಸಿದರು.

ಪ್ರಶಸ್ತಿ ವಿಜೇತ ವಿದ್ಯಾರ್ಥಿನಿ ಕು. ಚುಕ್ಕಿ ಎಂ. ಬ್ಯಾಣದ ಸಾಧನೆಗೆ ಶ್ರೀ ವ್ಯಾಸ ಮಹರ್ಷಿ ಗುರುಕುಲ ಆಶ್ರಮದ ಪರಮಪೂಜ್ಯ ಶ್ರೀ ಕುಮಾರ ದೇವರು, ಆಶ್ರಮದ ಆಡಳಿತ ಮಂಡಳಿ ಹಾಗೂ ಶಿಕ್ಷಕ ವರ್ಗ ಹರ್ಷ ವ್ಯಕ್ತಪಡಿಸಿದೆ. ಹಾಗೆಯೇ ಬ್ಲಾಸಮ್ ಅಕಾಡೆಮಿಯ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ, ಆಡಳಿತ ಮುಖ್ಯಸ್ಥ ಮಂಜುನಾಥ್ ಎಸ್. ಬ್ಯಾಣದ, ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ.
