ರಿಪ್ಪನ್‌ಪೇಟೆ: ಇಲ್ಲಿನ ಕಸ್ತೂರಿ ಕನ್ನಡ ಸಂಘದ 5ನೇ ವಾರ್ಷಿಕೋತ್ಸವ, 71ನೇ ಕನ್ನಡ ರಾಜ್ಯೋತ್ಸವ ಹಾಗೂ ದಿ. ನಟ ಪುನೀತ್‌ರಾಜ್‌ಕುಮಾರ್ ಅವರ ನುಡಿನಮನ ಸಮಾರಂಭವನ್ನು ನವೆಂಬರ್ 1 ರಂದು ಅತ್ಯಂತ ವಿಜೃಂಭಣೆಯಿಂದ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ.ದೇವರಾಜ್ ಹಾಗೂ ಕಾರ್ಯದರ್ಶಿ ನಿರಂಜನ್ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೆರವಣಿಗೆ ಮತ್ತು ಧ್ವಜಾರೋಹಣ:
ನವೆಂಬರ್ 1ರ ಭಾನುವಾರ ಬೆಳಿಗ್ಗೆ 8:30ಕ್ಕೆ ಶ್ರೀ ಭುವನೇಶ್ವರಿ ದೇವಿಯ ಭಾವಚಿತ್ರದ ಭವ್ಯ ಮೆರವಣಿಗೆ ರಾಜಬೀದಿಯಲ್ಲಿ ಸಾಗಲಿದೆ. ಬಳಿಕ 10 ಗಂಟೆಗೆ ಸಾಗರ-ಹೊಸನಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ನಂತರ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ‘ಕನ್ನಡ ಹಬ್ಬ’ದ ಅಧಿಕೃತ ಉದ್ಘಾಟನಾ ಸಮಾರಂಭ ನಡೆಯಲಿದೆ.
ಸಮಾರೋಪ ಹಾಗೂ ಗಣ್ಯರ ಉಪಸ್ಥಿತಿ:
ಅಂದು ಸಂಜೆ ನಡೆಯುವ ಸಮಾರೋಪ ಸಮಾರಂಭಕ್ಕೂ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ ನೀಡಲಿದ್ದು, ಸಂಘದ ಅಧ್ಯಕ್ಷ ಕೆರೆಹಳ್ಳಿ ದೇವರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅಧ್ಯಕ್ಷ ಆರ್.ಎ.ಚಾಬುಸಾಬ್, ಶಿಮುಲ್ ಅಧ್ಯಕ್ಷ ವಿದ್ಯಾಧರ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಹಾಗೂ ಮಾಜಿ ಸದಸ್ಯ ಬಂಡಿ ರಾಮಚಂದ್ರ ಸೇರಿದಂತೆ ಪ್ರಮುಖರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳ ವಿಜೇತರಿಗೆ ಮಾಜಿ ಸಚಿವ ಹರತಾಳು ಹಾಲಪ್ಪ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ವಿದ್ಯಾರ್ಥಿಗಳಿಗೆ ಕ್ರೀಡೆ ಮತ್ತು ನೃತ್ಯ ಸ್ಪರ್ಧೆ:
ರಾಜ್ಯೋತ್ಸವದ ಅಂಗವಾಗಿ ಅಕ್ಟೋಬರ್ 31ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಸರ್ಕಾರಿ ಬಾಲಕರ ಶಾಲಾ ಆವರಣದಲ್ಲಿ ಆಟೋಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಜರುಗಲಿವೆ. ನವೆಂಬರ್ 1ರ ಸಂಜೆ 4 ಗಂಟೆಗೆ ಇಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನೃತ್ಯ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಘದ ಪದಾಧಿಕಾರಿಗಳು ಕೋರಿದ್ದಾರೆ.

