ಸಾಗರ: ರಾಜ್ಯದಲ್ಲಿ ನವೆಂಬರ್ ಕೊನೆಯ ವಾರದಲ್ಲಿ 1,250 ಕೆಪಿಎಸ್‌ಎಸ್ ಶಾಲೆಗಳನ್ನು ಆರಂಭಿಸಲಾಗುವುದು. ಮೊದಲ ಹಂತದಲ್ಲಿ ₹4,300 ಕೋಟಿ ವೆಚ್ಚದಲ್ಲಿ 500 ಶಾಲೆಗಳಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಸಾಗರದ ನಗರಸಭೆ ರಂಗಮಂದಿರದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿನ ಶೈಕ್ಷಣಿಕ ಸೌಲಭ್ಯಗಳನ್ನು ಬಲಪಡಿಸುವ ಮೂಲಕ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಸೂರಿನಡಿ ಶಿಕ್ಷಣ
ಕೆಪಿಎಸ್‌ಎಸ್ ಶಾಲೆಗಳಲ್ಲಿ ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಸೂರಿನಡಿ ಶಿಕ್ಷಣ ದೊರೆಯಲಿದೆ. ಒಂದನೇ ತರಗತಿಯಿಂದಲೇ ಆಂಗ್ಲ ಮಾಧ್ಯಮದಲ್ಲಿ ಕಲಿಕೆಗೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.
ಪ್ರತಿ ತರಗತಿಗೆ ಒಬ್ಬ ಶಿಕ್ಷಕರ ಜೊತೆಗೆ ದೈಹಿಕ ಶಿಕ್ಷಣ ಹಾಗೂ ಸಂಗೀತ ಶಿಕ್ಷಕರನ್ನೂ ನೇಮಕ ಮಾಡಲಾಗುತ್ತಿದೆ. ಮಕ್ಕಳ ಶೈಕ್ಷಣಿಕ ಬೆಳವಣಿಗೆಯೊಂದಿಗೆ ಇತರ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡಲಾಗುವುದು ಎಂದು ಹೇಳಿದರು.
ಗ್ರಾಮೀಣ ಮಕ್ಕಳಿಗೆ ವಾಹನ ಸೌಲಭ್ಯ
ಗ್ರಾಮಗಳಿಂದ ಮಕ್ಕಳನ್ನು ಶಾಲೆಗೆ ಕರೆತರಲು ವಾಹನ ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.
ಈ ಹಿಂದೆ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ಹಿಂದೇಟು ಹಾಕುತ್ತಿದ್ದ ಪೋಷಕರು, ಕೆಪಿಎಸ್‌ಎಸ್ ಶಾಲೆಗಳಲ್ಲಿನ ಶೈಕ್ಷಣಿಕ ವ್ಯವಸ್ಥೆಯನ್ನು ತಿಳಿದು ದಾಖಲಾತಿಗೆ ಆಸಕ್ತಿ ತೋರಿಸುತ್ತಿದ್ದಾರೆ ಎಂದರು. ಸರ್ಕಾರ ಒದಗಿಸುತ್ತಿರುವ ಸೌಲಭ್ಯಗಳನ್ನು ಬಳಸಿಕೊಂಡು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವಂತೆ ಪೋಷಕರಿಗೆ ಮನವಿ ಮಾಡಿದರು.

