ಹೊಸನಗರ

ಹುಲಿಕಲ್ ಘಾಟ್‌ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ

ಶಿವಮೊಗ್ಗ : ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52 ರ ಹುಲಿಕಲ್ ಘಾಟ್ ಭಾಗದಲ್ಲಿ ಜೂನ್ 12ರಿಂದ ಲಘು ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಅನುಮತಿ ನೀಡಿದೆ. ಈ ಸಂಬಂಧ ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಹುಲಿಕಲ್ ಘಾಟ್‌ನ ಹೇರ್‌ಪಿನ್ ತಿರುವಿನಲ್ಲಿ ಈ ವರ್ಷದ ಏಪ್ರಿಲ್ 9 ರಂದು ಸುಮಾರು 12 ಮೀಟರ್ ಎತ್ತರದ ಕಾಂಕ್ರೀಟ್ ರಸ್ತೆಯ ಕೆಳಭಾಗದಲ್ಲಿ ಭೂಕುಸಿತ ಸಂಭವಿಸಿತು. ಅದೇ ವೇಳೆ ರಸ್ತೆಯ ಮೇಲ್ಭಾಗದಲ್ಲೂ ಬಿರುಕುಗಳು ಕಾಣಿಸಿಕೊಂಡಿದ್ದುದರಿಂದ ಭದ್ರತೆಗಾಗಿ ಸಂಪೂರ್ಣ ವಾಹನ ಸಂಚಾರ ನಿಷೇಧಿಸಿ ಬದಲಿ ಮಾರ್ಗದ ವ್ಯವಸ್ಥೆ ಮಾಡಲಾಯಿತು. ನಂತರ ಚಂಡಿಕಾಂಬ ದೇವಸ್ಥಾನದ ಬಳಿ ಮೆಟ್ಟಿಲುಗಳನ್ನು ಉಪಯೋಗಿಸಿ ವಾಹನಗಳ ಅದಲು ಬದಲು (ಶಟಲ್ ಸರ್ವೀಸ್) ಮೂಲಕ ಸಂಚಾರಕ್ಕೆ ಅವಕಾಶ ಕಲ್ಪಿಸಿತ್ತು.

ಈಗ ಘಾಟ್ ರಸ್ತೆಯ ತಿರುವಿನಲ್ಲಿ ತಡೆಗೋಡೆ ನಿರ್ಮಿಸಿ, ಲೀನ್ ಕಾಂಕ್ರೀಟ್ ಹಾಕುವ ಮೂಲಕ ತಾತ್ಕಾಲಿಕ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಲಾಗಿದೆ. ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್, ಪೊಲೀಸ್ ಅಧೀಕ್ಷಕರು ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ವರದಿ ಮತ್ತು ಪ್ರಸ್ತಾವನೆಗಳ ಆಧಾರದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಘಾಟ್‌ನಲ್ಲಿ ಭವಿಷ್ಯದಲ್ಲೂ ಭೂಕುಸಿತ ಸಂಭವಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ವಿವಿಧ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಸ್ತೆಯಲ್ಲಿ ತಡೆಗೋಡೆ, ಎಚ್ಚರಿಕೆ ಫಲಕಗಳನ್ನು ಅಳವಡಿಸಲಾಗಿದ್ದು, ಮಾಹಿತಿ ಮತ್ತು ಸೂಚನಾ ಫಲಕಗಳೂ ಹಾಕಲಾಗಿದೆ. ರಾತ್ರಿ ಸಮಯದಲ್ಲಿ ವಾಹನ ಸವಾರರ ಸುರಕ್ಷತೆಗೆ ‘ಕ್ಯಾಟ್ ಐ’ ಮತ್ತು ಸೋಲಾರ್ ಸ್ಟಡ್ಸ್‌ಗಳನ್ನು ಸ್ಥಾಪಿಸಲಾಗಿದೆ.

ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ಅವರ ಆದೇಶದಲ್ಲಿ, “ಮೋಟಾರು ವಾಹನ ಕಾಯ್ದೆ 1988 ರ ಸೆಕ್ಷನ್ 115 ಮತ್ತು 116 ರ ಅನುಸಾರ ಹಿಂದಿನ ಸಂಪೂರ್ಣ ವಾಹನ ಸಂಚಾರ ನಿಷೇಧ ಆದೇಶವನ್ನು ರದ್ದು ಮಾಡಲಾಗಿದೆ. ಜೂನ್ 12, 2026 ರಿಂದ ಬಾಳೆಬರೆ ಘಾಟ್ (ಹುಲಿಕಲ್ ಘಾಟ್) ಮೂಲಕ ಕೇವಲ ಲಘು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗಿದೆ” ಎಂದು ತಿಳಿಸಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]