ಶಿವಮೊಗ್ಗ: ಸರ್ಕಾರಿ ಶಾಲೆಗಳ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ. ಸಮಾಜದ ಸಹಭಾಗಿತ್ವದಿಂದ ಸರ್ಕಾರಿ ಶಾಲೆಗಳನ್ನು ಗುಣಮಟ್ಟದ ಶಿಕ್ಷಣ ಕೇಂದ್ರಗಳನ್ನಾಗಿ ರೂಪಿಸಬಹುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು.
ಶಿವಮೊಗ್ಗದ ಬಿ.ಹೆಚ್. ರಸ್ತೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಎಜಾಕ್ಸ್ ಇಂಜಿನಿಯರಿಂಗ್ ಚಾರಿಟಬಲ್ ಟ್ರಸ್ಟ್ ಸಿಎಸ್‌ಆರ್ ನಿಧಿಯಡಿ ನಿರ್ಮಾಣವಾಗಲಿರುವ ನೂತನ ಕಟ್ಟಡ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
“ನಮ್ಮ ಶಾಲೆ ನಮ್ಮ ಜವಾಬ್ದಾರಿ” ಎಂಬ ಪರಿಕಲ್ಪನೆಯಡಿ ಸರ್ಕಾರಿ ಶಾಲೆಗಳನ್ನು ಬಲಪಡಿಸುವ ಕಾರ್ಯ ನಡೆಯುತ್ತಿದೆ. ಮಕ್ಕಳಿಗೆ ಉತ್ತಮ ಭವಿಷ್ಯ ನೀಡುವುದು ಶಿಕ್ಷಣ ಇಲಾಖೆಯ ಮುಖ್ಯ ಗುರಿ ಎಂದು ಸಚಿವರು ಹೇಳಿದರು.
ಕರ್ನಾಟಕ ಪಬ್ಲಿಕ್ ಸ್ಕೂಲ್ ಮಾದರಿ ಶಿಕ್ಷಣ ವ್ಯವಸ್ಥೆ ಗ್ರಾಮೀಣ ಮತ್ತು ನಗರ ಪ್ರದೇಶದ ಮಕ್ಕಳಿಗೆ ದೊಡ್ಡ ಅನುಕೂಲವಾಗಲಿದೆ. ಎಲ್‌ಕೆಜಿಯಿಂದ ದ್ವಿತೀಯ ಪಿಯುಸಿವರೆಗೆ ಒಂದೇ ಆವರಣದಲ್ಲಿ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ದೊರೆಯುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.
ಸಿಎಸ್‌ಆರ್ ನಿಧಿಯಡಿ ರಾಜ್ಯದಾದ್ಯಂತ 1,000 ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳನ್ನು ಅಭಿವೃದ್ಧಿಪಡಿಸುವ ಯೋಜನೆ ಕೈಗೊಳ್ಳಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ 35 ಕೆಪಿಎಸ್ ಶಾಲೆಗಳ ಗುರಿ ಹೊಂದಲಾಗಿದ್ದು, ಈಗಾಗಲೇ 11 ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಮತ್ತಷ್ಟು 24 ಶಾಲೆಗಳು ಮಂಜೂರಾಗಿರುವುದು ಜಿಲ್ಲೆಯ ಶಿಕ್ಷಣ ಕ್ಷೇತ್ರಕ್ಕೆ ಬಲ ನೀಡಲಿದೆ ಎಂದು ಅವರು ತಿಳಿಸಿದರು.
ಎಜಾಕ್ಸ್ ಇಂಜಿನಿಯರಿಂಗ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಕೆ. ವಿಜಯ್ ಕುಮಾರ್ ಮಾತನಾಡಿ, ಪ್ರತಿಯೊಬ್ಬರೂ ತಾವು ಓದಿದ ಶಾಲೆಯನ್ನು ತಮ್ಮ ಮನೆಯಂತೆ ಕಾಣಬೇಕು. ಶಾಲೆಗಳ ಅಭಿವೃದ್ಧಿಗೆ ಸಮಾಜ ಕೈಜೋಡಿಸಿದರೆ ಮಕ್ಕಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಾಣವಾಗುತ್ತದೆ ಎಂದು ಹೇಳಿದರು.
ಎಜಾಕ್ಸ್ ಸಂಸ್ಥೆಯು ಮುಂದಿನ ಐದು ವರ್ಷಗಳಲ್ಲಿ ರಾಜ್ಯದ 10 ಜಿಲ್ಲೆಗಳಲ್ಲಿ ಪಬ್ಲಿಕ್ ಶಾಲೆಗಳನ್ನು ನಿರ್ಮಿಸುವ ಗುರಿ ಹೊಂದಿದೆ. ಗೌರಿಬಿದನೂರು, ಬಾಣಾವರ ಸೇರಿದಂತೆ ಹಲವು ಕಡೆಗಳಲ್ಲಿ ಶಾಲಾ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, ಶಿವಮೊಗ್ಗದಲ್ಲಿ ನಿರ್ಮಾಣವಾಗುತ್ತಿರುವುದು ಸಂಸ್ಥೆಯ ಐದನೇ ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆ ಎಂದು ಅವರು ಹೇಳಿದರು.
ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ಅಗತ್ಯವಿದೆ. ಕನ್ನಡ ಮಾಧ್ಯಮ ಶಾಲೆಗಳ ಭವಿಷ್ಯದ ಬಗ್ಗೆ ಗಂಭೀರ ಚಿಂತನೆ ನಡೆಯಬೇಕು. ಶಾಲೆಗಳಿಗೆ ಅಗತ್ಯವಿರುವ ಶಿಕ್ಷಕರ ನೇಮಕಾತಿ ಶೀಘ್ರವಾಗಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ವಿಧಾನ ಪರಿಷತ್ ಸದಸ್ಯೆ ಬಾಲ್ಕೀಶ್ ಬಾನು ಮಾತನಾಡಿ, ಎಲ್ಲ ದಾನಗಳಿಗಿಂತ ವಿದ್ಯಾದಾನ ಶ್ರೇಷ್ಠ. ಮಕ್ಕಳ ಭವಿಷ್ಯ ರೂಪಿಸುವ ಕಾರ್ಯದಲ್ಲಿ ಪಾಲ್ಗೊಳ್ಳುವುದು ಸಮಾಜದ ದೊಡ್ಡ ಸೇವೆ ಎಂದು ಹೇಳಿದರು.
ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಮಾತನಾಡಿ, ರಾಜಕೀಯ ಚುನಾವಣೆಗಳವರೆಗೆ ಮಾತ್ರ; ಚುನಾವಣೆಯ ನಂತರ ಅಭಿವೃದ್ಧಿಯೇ ಮುಖ್ಯ. ಸಚಿವ ಮಧು ಬಂಗಾರಪ್ಪ ಅವರ ಮಾರ್ಗದರ್ಶನದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗಳು ಆಗುತ್ತಿವೆ ಎಂದು ಹೇಳಿದರು.
ಶ್ರಾವಣ ಮಾಸದಲ್ಲಿ ಈ ಯೋಜನೆಗೆ ಚಾಲನೆ ದೊರೆತಿರುವುದು ಶುಭ ಸಂಕೇತ. ಈ ಶಾಲಾ ಕಟ್ಟಡ ಶೀಘ್ರ ಪೂರ್ಣಗೊಂಡು ವಿದ್ಯಾರ್ಥಿಗಳಿಗೆ ಉತ್ತಮ ಸೌಲಭ್ಯ ಒದಗಿಸಲಿ ಎಂದು ಶಾಸಕರು ಆಶಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ, ಶಾಸಕ ಎಸ್.ಎನ್. ಚನ್ನಬಸಪ್ಪ, ಎಜಾಕ್ಸ್ ಇಂಜಿನಿಯರಿಂಗ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಕೆ. ವಿಜಯ್ ಕುಮಾರ್, ಕಲ್ಯಾಣಿ ವಿಜಯ್, ವಿಧಾನ ಪರಿಷತ್ ಸದಸ್ಯರು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒ, ಪೊಲೀಸ್ ವರಿಷ್ಠಾಧಿಕಾರಿ ಹಾಗೂ ವಿವಿಧ ಗಣ್ಯರು ಭಾಗವಹಿಸಿದ್ದರು.

