ಶಿವಮೊಗ್ಗ: ಕಳೆದ ವಾರ ವಿಧಾನಸಭೆ ಕಲಾಪಗಳು ನಿರೀಕ್ಷಿತ ರೀತಿಯಲ್ಲಿ ಸುಗಮವಾಗಿ ನಡೆದಿಲ್ಲ. ರಾಜ್ಯದ ಹಲವು ಪ್ರಮುಖ ವಿಷಯಗಳ ಬಗ್ಗೆ ಸದನದಲ್ಲಿ ಚರ್ಚೆ ನಡೆಯಬೇಕಿತ್ತು. ಮುಂದಿನ ಕಲಾಪಗಳಾದರೂ ಸರಿಯಾಗಿ ನಡೆಯಲು ವಿರೋಧ ಪಕ್ಷಗಳು ಸಹಕರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮನವಿ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರ ಹಿತಕ್ಕೆ ಸಂಬಂಧಿಸಿದ ವಿಷಯಗಳು ಸದನದಲ್ಲಿ ಚರ್ಚೆಯಾಗಬೇಕು. ಅಭಿವೃದ್ಧಿ, ಬರ ಪರಿಸ್ಥಿತಿ, ಶಿಕ್ಷಣ ಹಾಗೂ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲು ವಿಪಕ್ಷಗಳು ಸಹಕಾರ ನೀಡಬೇಕು ಎಂದು ಹೇಳಿದರು.
ರಾಜ್ಯದಲ್ಲಿ ತೀವ್ರ ಬರದ ಛಾಯೆ ಆವರಿಸಿದೆ. ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದೆ. ಮುಖ್ಯಮಂತ್ರಿ ಹಾಗೂ ಸರ್ಕಾರ ರಾಜ್ಯದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಮುಂದಿಟ್ಟುಕೊಂಡಿದೆ. ಇಂತಹ ಸಂದರ್ಭದಲ್ಲಿ ಸದನದಲ್ಲಿ ಗಂಭೀರ ಚರ್ಚೆ ನಡೆಯಬೇಕು ಎಂದು ಮಧು ಬಂಗಾರಪ್ಪ ತಿಳಿಸಿದರು.
ಸಚಿವ ನಾಗೇಂದ್ರ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸಂಸ್ಥೆಯು ರಾಜ್ಯಪಾಲರಿಗೆ ಮನವಿ ಸಲ್ಲಿಸಿರುವುದು ತನಿಖಾ ಪ್ರಕ್ರಿಯೆಯ ಒಂದು ಭಾಗವಾಗಿದೆ. ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ. ಈ ವಿಷಯದಲ್ಲಿ ಮಾತನಾಡುವುದಾದರೆ ಬಿಜೆಪಿಯ “ವಾಷಿಂಗ್ ಮೆಷಿನ್” ರಾಜಕಾರಣದ ಬಗ್ಗೆಯೂ ಮಾತನಾಡಬೇಕಾಗುತ್ತದೆ ಎಂದು ಸಚಿವರು ತಿರುಗೇಟು ನೀಡಿದರು.
ಇತ್ತೀಚೆಗೆ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಅತ್ಯಂತ ಮಹತ್ವದ ಬಿಲ್ ಪಾಸಾಗಿದೆ. ಇದರ ಮೂಲಕ ಶಾಲಾ-ಕಾಲೇಜುಗಳಲ್ಲಿ ತುರ್ತಾಗಿ ಅಗತ್ಯವಿರುವ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಹೆಚ್ಚಿನ ಗಮನ ನೀಡಲಾಗುವುದು ಎಂದು ಅವರು ಹೇಳಿದರು.
ಇದೇ ವೇಳೆ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರ ಆರೋಪಗಳ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ, ಅವರ ಮಾತುಗಳಿಗೆ ಉತ್ತರಿಸುವುದಿಲ್ಲ ಎಂದರು.
ಕುಮಾರ್ ಬಂಗಾರಪ್ಪ ಅವರು ಸ್ವಪಕ್ಷದಲ್ಲೇ ಡಮ್ಮಿಯಾಗಿ ಕುಳಿತಿದ್ದಾರೆ. ದಿಕ್ಕುದೆಸೆ ಇಲ್ಲದೆ ಮಾತನಾಡುವ ಮಾತುಗಳಿಗೆ ಪ್ರತಿಕ್ರಿಯೆ ನೀಡುವುದರಲ್ಲಿ ಅರ್ಥವಿಲ್ಲ ಎಂದು ಸಚಿವರು ಹೇಳಿದರು.
ತುಕ್ಕು ಹಿಡಿದ ಕಾರನ್ನು ಎಷ್ಟು ಬಾರಿ ಗ್ಯಾರೇಜ್‌ಗೆ ತೆಗೆದುಕೊಂಡು ಹೋಗಬಹುದು? ಕೊನೆಗೆ ಗ್ಯಾರೇಜ್‌ನವರೇ ಇದನ್ನು ರಿಪೇರಿ ಮಾಡಲು ಸಾಧ್ಯವಿಲ್ಲ ಎಂದು ಹೇಳುವ ಸ್ಥಿತಿ ಬರುತ್ತದೆ. ಇಂತಹ ವಿಚಾರಗಳ ಬಗ್ಗೆ ಮಾತನಾಡಿ ಸಮಯ ವ್ಯರ್ಥ ಮಾಡಿಕೊಳ್ಳುವುದಿಲ್ಲ ಎಂದು ಮಧು ಬಂಗಾರಪ್ಪ ವ್ಯಂಗ್ಯವಾಡಿದರು.
ಮಾಧ್ಯಮದವರೂ ಜನರಿಗೆ ಉಪಯೋಗವಾಗುವ, ರಾಜ್ಯ ಮತ್ತು ದೇಶದ ಅಭಿವೃದ್ಧಿಗೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಬೇಕು. ಸಾರ್ವಜನಿಕ ಹಿತದ ವಿಚಾರಗಳ ಬಗ್ಗೆ ಹೆಚ್ಚು ಚರ್ಚೆ ನಡೆಯಬೇಕು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

