ಸಾಗರ ; ತಾಲ್ಲೂಕಿನ ಕರೂರು ಹೋಬಳಿಯ ಯಡಮನೆ ಗ್ರಾಮದ ರೈತಾಪಿ ಕುಟುಂಬಗಳಿಗೆ ಅರಣ್ಯ ಇಲಾಖೆ ನೀಡಿರುವ ನೋಟಿಸ್‌ಗಳ ಕುರಿತು ಆತಂಕ ಬೇಡ ಎಂದು ಜಿಲ್ಲಾ ಉಸ್ತುವಾರಿ ಸಚಿವ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ರೈತರಿಗೆ ನೋಟಿಸ್ ನೀಡಿರುವ ವಿಷಯ ತಮ್ಮ ಗಮನಕ್ಕೆ ಬಂದ ತಕ್ಷಣವೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
“ಈ ನೋಟಿಸ್‌ಗಳು 2012-13ರ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೈಗೊಂಡ ತೀರ್ಮಾನಗಳ ಅನ್ವಯ ಜಾರಿಯಾಗುತ್ತಿವೆ. ನಮ್ಮ (ಕಾಂಗ್ರೆಸ್) ಸರ್ಕಾರಕ್ಕೆ ರೈತರನ್ನು ಒಕ್ಕಲೆಬ್ಬಿಸುವ ಯಾವುದೇ ಉದ್ದೇಶವಿಲ್ಲ” ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಈಗಾಗಲೇ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ನೇರವಾಗಿ ಮಾತುಕತೆ ನಡೆಸಿರುವುದಾಗಿ ತಿಳಿಸಿದ ಅವರು, ಯಾವುದೇ ಕಾರಣಕ್ಕೂ ರೈತರ ಜಮೀನನ್ನು ಬಲವಂತವಾಗಿ ತೆರವುಗೊಳಿಸಬಾರದು ಎಂಬ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.
ಅರಣ್ಯ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದರೂ, ಸೂಕ್ತ ದಾಖಲೆಗಳ ಕೊರತೆಯಿಂದಾಗಿ ಕೆಲ ಅರ್ಜಿಗಳು ಇನ್ನೂ ಊರ್ಜಿತವಾಗಿಲ್ಲ. ಸಂಬಂಧಪಟ್ಟ ಸಮಿತಿಗಳ ಮೂಲಕ ಮೇಲ್ಮನವಿ ಸಲ್ಲಿಸುವ ಅವಕಾಶವಿದ್ದು, ಅರ್ಜಿಗಳ ಮರುಪರಿಶೀಲನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
“ನಮ್ಮ ಸರ್ಕಾರ ರೈತರ ಮತ್ತು ಸಂತ್ರಸ್ತರ ಹಿತ ಕಾಯಲು ಬದ್ಧವಾಗಿದೆ. ಯಡಮನೆ ಗ್ರಾಮದ ಜನರು ಯಾವುದೇ ಆತಂಕಕ್ಕೆ ಒಳಗಾಗಬಾರದು” ಎಂದು ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





