ಹೊಸನಗರ

ಕಮದೂರಿನಲ್ಲಿ 17 ಕೋಟಿ ರೂ. ವೆಚ್ಚದ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲಾ ಕಟ್ಟಡಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಶಂಕುಸ್ಥಾಪನೆ

'ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ'ಯ ಸುಸಜ್ಜಿತ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶುಕ್ರವಾರ ಸಂಜೆ ಗುದ್ದಲಿ ಪೂಜೆ ನೆರವೇರಿಸಿದರು.

Gopalakrishna Beluru RPT3

ರಿಪ್ಪನ್‌ಪೇಟೆ: ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಕೆಂಚನಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಮದೂರು (ಆಲವಳ್ಳಿ) ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ‘ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ’ಯ ಸುಸಜ್ಜಿತ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶುಕ್ರವಾರ ಸಂಜೆ ಗುದ್ದಲಿ ಪೂಜೆ ನೆರವೇರಿಸಿದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಹಾಗೂ ವಸತಿ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ಯೋಜನೆಗೆ 17 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.

WhatsApp Group Join Now
Telegram Group Join Now
Instagram Group Join Now

11 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ಶಂಕುಸ್ಥಾಪನೆ ನೆರವೇರಿಸಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕ ಗೋಪಾಲಕೃಷ್ಣ ಬೇಳೂರು, “ಗ್ರಾಮೀಣ ಪ್ರದೇಶದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ದೂರದ ಊರುಗಳಿಂದ ಬರುವ ವಿದ್ಯಾರ್ಥಿಗಳಿಗೆ ಸುರಕ್ಷಿತ ವಸತಿ, ಉತ್ತಮ ಕಲಿಕಾ ವಾತಾವರಣ ಹಾಗೂ ಅಗತ್ಯ ಮೂಲಸೌಕರ್ಯ ಕಲ್ಪಿಸುವುದೇ ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಪ್ರಕೃತಿಯ ಮಡಿಲಲ್ಲಿ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಪೂರಕವಾದ ಜಾಗದಲ್ಲಿ ಈ ಕಟ್ಟಡ ತಲೆಎತ್ತಲಿದೆ. ಮುಂದಿನ 11 ತಿಂಗಳ ಕಾಲಮಿತಿಯೊಳಗೆ ಗುಣಮಟ್ಟದೊಂದಿಗೆ ಕಾಮಗಾರಿ ಪೂರ್ಣಗೊಳಿಸಿ, ಮುಂಬರುವ ಶೈಕ್ಷಣಿಕ ವರ್ಷದಿಂದಲೇ ಕಟ್ಟಡವನ್ನು ಲೋಕಾರ್ಪಣೆಗೊಳಿಸಲು ಗುತ್ತಿಗೆದಾರರು ಶ್ರಮಿಸಬೇಕು” ಎಂದು ಸೂಚಿಸಿದರು. ಇದೇ ವೇಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಮಾನತೆಯ ಆಶಯ ಹಾಗೂ ಸಂವಿಧಾನದ ಜಾಗೃತಿ ಕಾರ್ಯಕ್ರಮಗಳ ಮಹತ್ವವನ್ನು ಅವರು ಸ್ಮರಿಸಿದರು.

ಜಿಲ್ಲೆಯಲ್ಲಿ 34 ವಸತಿ ಶಾಲೆಗಳ ಯಶಸ್ವಿ ಕಾರ್ಯನಿರ್ವಹಣೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಪ್ರಾಚಾರ್ಯ ಹಾಗೂ ಶಿವಮೊಗ್ಗ ಜಿಲ್ಲಾ ಸಮನ್ವಯಾಧಿಕಾರಿ ಟಿ.ಕೆ. ಚಂದ್ರಪ್ಪ ಮಾತನಾಡಿ, “ರಾಜ್ಯಾದ್ಯಂತ ಪ್ರಸ್ತುತ 874 ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ 34 ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಶಿಕ್ಷಕರ ಪರಿಶ್ರಮ ಹಾಗೂ ಉತ್ತಮ ಬೋಧನೆಯಿಂದಾಗಿ ಈ ಶಾಲೆಗಳು ಉತ್ತಮ ಫಲಿತಾಂಶ ದಾಖಲಿಸುತ್ತಿದ್ದು, ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುತ್ತಿವೆ” ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಹೆಚ್.ಬಿ. ಚಿದಂಬರ ಹಾಗೂ ಬಗರ್‌ಹುಕುಂ ಸಮಿತಿ ಸದಸ್ಯೆ ಸಾಕಮ್ಮ, ಶಾಸಕರು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ಕಾರದಿಂದ ಕೋಟ್ಯಂತರ ರೂಪಾಯಿ ಅನುದಾನ ತಂದು ಹಗಲಿರುಳು ಶ್ರಮಿಸುತ್ತಿದ್ದಾರೆ. ಇಷ್ಟೆಲ್ಲಾ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದರೂ ವಿರೋಧ ಪಕ್ಷದವರು ವಿನಾಕಾರಣ ಟೀಕೆ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಪ್ರಣತಿ ಅಣ್ಣಪ್ಪ ಪ್ರಾರ್ಥಿಸಿದರೆ, ಕಮದೂರು ವಸತಿ ಶಾಲೆಯ ಪ್ರಾಚಾರ್ಯ ಚಂದ್ರಪ್ಪ ಹೆಚ್. ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀಕ್ಷಕ ಇಂಜಿನಿಯರ್ ನಳಿನಾಕ್ಷಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲೇಶಪ್ಪ, ಹೊಸನಗರ ತಹಶೀಲ್ದಾರ್ ಭರತ್‌ರಾಜ್, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನರೇಂದ್ರಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ಹಾಗೂ ಪ್ರಮುಖರಾದ ಹೆಚ್.ವಿ. ಈಶ್ವರಪ್ಪಗೌಡ, ಬಂಡಿ ರಾಮಚಂದ್ರ, ಅಮೀರಹಂಜಾ, ಉಬೇದುಲ್ಲಾ, ಮಹಮ್ಮದ್ ಷರೀಫ್, ಪರಮೇಶ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

error: Content is protected !!